ವಕೀಲರ ಗೈರು; ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್‌ ಹಾಗೂ ಪತ್ನಿ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಂದೂಡಿಕೆ

ಮಠ ನಡೆಸುತ್ತಿರುವ ಪ್ರಿಯದರ್ಶಿನಿ ಶಾಲೆಯ ಶಿಕ್ಷಕ ಬಸವರಾಜೇಂದ್ರಪ್ಪ ಮತ್ತು ಪ್ರಕರಣದ ಸಂತ್ರಸ್ತೆಯ ತಾಯಿ ನಡುವೆ ನಡೆದ ಮೊಬೈಲ್ ಕರೆ ಸಂಭಾಷಣೆಯನ್ನು ಆಧರಿಸಿ ದೂರು ದಾಖಲಿಸಲಾಗಿದೆ.
S K Basavarajan and Karnataka HC
S K Basavarajan and Karnataka HC
Published on

ಚಿತ್ರದುರ್ಗದ ಮುರುಘಾರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಿದ ಆರೋಪದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಮಠದ ಮಾಜಿ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್ ಮತ್ತವರ ಪತ್ನಿ ಸೌಭಾಗ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.

ಎಸ್ ಕೆ ಬಸವರಾಜನ್ ಮತ್ತವರ ಪತ್ನಿ ಸೌಭಾಗ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ಕೈಗೆತ್ತಿಕೊಂಡಿತು. ಆದರೆ, ಈ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿರಲಿಲ್ಲ. ಪರಿಣಾಮ ಪೀಠವು ಅರ್ಜಿ ವಿಚಾರಣೆಯನ್ನು ಜನವರಿ 31ಕ್ಕೆ ಮುಂದೂಡಿತು.

ಮಠ ನಡೆಸುತ್ತಿರುವ ಪ್ರಿಯದರ್ಶಿನಿ ಶಾಲೆಯ ಶಿಕ್ಷಕ ಬಸವರಾಜೇಂದ್ರಪ್ಪ ಮತ್ತು ಪ್ರಕರಣದ ಸಂತ್ರಸ್ತೆಯೊಬ್ಬರ ತಾಯಿ ನಡುವೆ ನಡೆದ ಮೊಬೈಲ್ ಕರೆ ಸಂಭಾಷಣೆಯನ್ನು ಆಧರಿಸಿ ದಾಖಲಿಸಲಾದ ದೂರಿನ ಪ್ರಕರಣ ಇದಾಗಿದೆ.

ಡಾ.ಶಿವಮೂರ್ತಿ ಮರುಘಾ ಶರಣರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲು ಪಿತೂರಿ ನಡೆಸಿದ ಆರೋಪ ತಮ್ಮ ಮೇಲೆ ಹೊರಿಸಲಾಗಿದೆ. ಆದರೆ, ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ತಮ್ಮ ಹೆಸರು ಉಲ್ಲೇಖವಾಗಿಲ್ಲ. ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದ್ದು, ಎಫ್‌ಐಆರ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Kannada Bar & Bench
kannada.barandbench.com