ರಾಜಕಾರಣಕ್ಕೆ ಧಾರ್ಮಿಕ ಸ್ಥಳ ದುರುಪಯೋಗದ ಆರೋಪ: ಪ್ರಕರಣ ರದ್ದತಿಗೆ ಹೈಕೋರ್ಟ್‌ ಕದತಟ್ಟಿದ ಸಂಸದ ರಾಘವೇಂದ್ರ

ರಾಘವೇಂದ್ರ ತಮ್ಮ ಅರ್ಜಿಯಲ್ಲಿ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸರು ಮತ್ತು ಪ್ರಕರಣದ ದೂರುದಾರರಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ ಅವಿನಾಶ್‌ ಅವರನ್ನು ಪ್ರತಿವಾದಿ ಮಾಡಿದ್ದಾರೆ.
Karnataka High Court
Karnataka High Court
Published on

ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಮತದಾರರ ಮೇಲೆ ಪ್ರಭಾವ ಬೀರಿದ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ರಾಘವೇಂದ್ರ ಅವರು ತಮ್ಮ ಅರ್ಜಿಯಲ್ಲಿ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸರು ಮತ್ತು ಪ್ರಕರಣದ ದೂರುದಾರರಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ ಅವಿನಾಶ್‌ ಅವರನ್ನು ಪ್ರತಿವಾದಿ ಮಾಡಿದ್ದಾರೆ.

ಶುಕ್ರವಾರ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಪೀಠದ ಮುಂದೆ ಹಾಜರಾದ ರಾಘವೇಂದ್ರ ಪರ ವಕೀಲರು, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು. ಅರ್ಜಿದಾರರ ವಿರುದ್ಧದ ಎಫ್ಐಆರ್‌ಗೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದರು. ಅದಕ್ಕೆ ಪೀಠವು ಮುಂದಿನ ವಾರದಲ್ಲಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು ಎಂದಿತು.

ಪ್ರಕರಣದ ಹಿನ್ನೆಲೆ: 2024ರ ಮಾರ್ಚ್‌ 23ರಂದು ಬೆಳಿಗ್ಗೆ 11 ಗಂಟೆಯಲ್ಲಿ ಚಿತ್ರದುರ್ಗದ ಸಿದ್ದೇಶ್ವರ ಭೋವಿ ಸಮಾಜ ಗುರುಪೀಠದಲ್ಲಿ ರಾಘವೇಂದ್ರ ಅವರು ಸಭೆ ನಡೆಸಿದ್ದರು. ಈ ವೇಳೆ ಮತದಾರರ ಮೇಲೆ ಪ್ರಭಾವ ಬೀರಲು ಭಾಷಣ ಮಾಡಿ ಧಾರ್ಮಿಕ ಸ್ಥಳವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸಭೆ ನಡೆಸಲು ಚುನಾವಣಾ ಆಯೋಗದಿಂದ ಪೂರ್ವಾನುಮತಿ ಪಡೆದಿಲ್ಲ. ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ ಅವಿನಾಶ್‌ ಚಿತ್ರದುರ್ಗ ಗ್ರಾಮೀಣ ಠಾಣಾ ಪೊಲೀಸರಿಗೆ 2024ರ ಮಾರ್ಚ್‌ 23ರಂದು ದೂರು ನೀಡಿದ್ದರು. ಅದನ್ನು ಪರಿಗಣಿಸಿದ್ದ ಪೊಲೀಸರು, ಧಾರ್ಮಿಕ ಸಂಸ್ಥೆಗಳ (ದುರ್ಬಳಕೆ ತಡೆ) ಕಾಯಿದೆ-1988 ಮತ್ತು ಜನಪ್ರತಿನಿಧಿಗಳ ಕಾಯಿದೆ-1951 ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್‌ 171ಎಫ್‌ (ಚುನಾವಣೆಯಲ್ಲಿ ಅನಪೇಕ್ಷಿತ ಪ್ರಭಾವ ಬೀರಿದ) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದಕ್ಕೆ ತಡೆ ಕೋರಿ ರಾಘವೇಂದ್ರ ಹೈಕೋರ್ಟ್‌ ಕದತಟ್ಟಿದ್ದಾರೆ.

Kannada Bar & Bench
kannada.barandbench.com