ಬಿಬಿಎಂಪಿಯ ನಾಲ್ಕೂ ದಿಕ್ಕುಗಳಲ್ಲಿ ಬೃಹತ್‌ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಕ್ರಮ: ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ನಗರದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಡಲಾಗುತ್ತಿದೆ. ಇದರಿಂದ ಪರಿಸರ ಹಾಳಾಗುತ್ತಿದೆ ಎಂದು ಬಲವಾಗಿ ಆಕ್ಷೇಪಿಸಿದರು.
BBMP and Karnataka HC
BBMP and Karnataka HC
Published on

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನಾಲ್ಕೂ ದಿಕ್ಕುಗಳಲ್ಲಿ ಬೃಹತ್ ತ್ಯಾಜ್ಯ ಸಂಸ್ಕರಣಾ‌ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ ಸೋಮವಾರ ತಿಳಿಸಿದೆ.

ಮಹಾನಗರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಹಾಗೂ ವಿಲೇವಾರಿ ಅಸಮರ್ಪಕವಾಗಿದೆ ಎಂದು ಆಕ್ಷೇಪಿಸಿ‌ ಇಂದಿರಾ ನಗರದ ಕವಿತಾ ಶಂಕರ್‌ 2012ರಲ್ಲಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ನಗರದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಡಲಾಗುತ್ತಿದೆ. ಇದರಿಂದ ಪರಿಸರ ಹಾಳಾಗುತ್ತಿದೆ ಎಂದು ಬಲವಾಗಿ ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಮಹಾನಗರದ ನಾಲ್ಕೂ ದಿಕ್ಕುಗಳಲ್ಲಿ ಬೃಹತ್‌ ಪ್ರಮಾಣದ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆ ಮಾಡಲಾಗುವುದು. ಈ ಘಟಕಗಳ ಸ್ಥಾಪನೆಗೆ ನೂರಾರು ಎಕರೆ ಜಮೀನಿನ ಅವಶ್ಯಕ‌ತೆ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಕಾಲಾವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ಇದನ್ನು‌ ಪರಿಗಣಿಸಿದ ಪೀಠ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಿದೆ.

Kannada Bar & Bench
kannada.barandbench.com