ನಟ ಉಪೇಂದ್ರರಿಂದ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಅವಮಾನ ಪ್ರಕರಣ: ಎರಡನೇ ಎಫ್‌ಐಆರ್‌ಗೂ ಹೈಕೋರ್ಟ್‌ ತಡೆಯಾಜ್ಞೆ

ಕರ್ನಾಟಕ ರಣಧೀರ ಪಡೆ ಸಂಘಟನೆ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಠಾಣೆ ಪೊಲೀಸರು ದಾಖಲಿಸಿದ ಎಫ್‌ಐಆರ್ ರದ್ದು ಕೋರಿ ನಟ ಉಪೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನ್ ಗೌಡರ್.
Actor Upendra and Karnataka HC
Actor Upendra and Karnataka HC

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯವರಿಗೆ ಅವಮಾನ ಉಂಟಾಗುವ ರೀತಿಯಲ್ಲಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡನೇ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕರ್ನಾಟಕ ರಣಧೀರ ಪಡೆ ಸಂಘಟನೆ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಠಾಣೆ ಪೊಲೀಸರು ದಾಖಲಿಸಿದ ಎಫ್‌ಐಆರ್ ರದ್ದು ಕೋರಿ ನಟ ಉಪೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ.

ಇದೇ ಆರೋಪ ಸಂಬಂಧ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಆಗಸ್ಟ್‌ ೧೪ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದರೊಂದಿಗೆ ಪ್ರಕರಣ ಸಂಬಂಧ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎರಡೂ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ ದೊರತಂತಾಗಿದೆ.

ನಟ ಉಪೇಂದ್ರ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಉದಯ್ ಹೊಳ್ಳ ಅವರು, ಜಾತಿ ನಿಂದನೆ ಆರೋಪದ ಮೇಲೆ ಉಪೇಂದ್ರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎರಡನೇ ಎಫ್‌ಐಆರ್ ದಾಖಲಾಗಿದೆ. ಆ ಎಫ್‌ಐಆರ್ ಅನ್ನು ರದ್ದುಪಡಿಸಲು ಈ ಅರ್ಜಿಯಲ್ಲಿ ಕೋರಲಾಗಿದೆ. ಹಿಂದೆ ಇದೇ ಪ್ರಕರಣ ಸಂಬಂಧ ಚನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲನೇ ಎಫ್‌ಐಆರ್‌ಗೆ ಈಗಾಗಲೇ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಒಂದೇ ಆರೋಪಕ್ಕೆ ಎರಡೆರಡು ಎಫ್‌ಐಆರ್ ದಾಖಲಿಸಲು ಕಾನೂನಿನಲ್ಲಿ ಅವಕಾಶ ಇಲ್ಲ” ಎಂದರು.

“ಪ್ರಚಾರಕ್ಕಾಗಿ ಉಪೇಂದ್ರ ವಿರುದ್ಧ ದುರುದ್ದೇಶಪೂರಿತವಾಗಿ ದೂರು ನೀಡಲಾಗಿದೆ. ಹಲಸೂರು ಗೇಟ್‌ ಪೊಲೀಸರಿಗೆ ದೂರು ನೀಡಿದ ದೂರುದಾರರು, ಠಾಣೆ ಮುಂದೆ ಕೇಕ್ ಕತ್ತರಿಸಿದ್ದಾರೆ. ರಾಜ್ಯದ ಸಚಿವರೊಬ್ಬರು ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಆದರೆ, ಅವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ಕೇವಲ ಎನ್‌ಸಿಆರ್ (ಗಂಭೀರ ಸ್ವರೂಪವಲ್ಲದ ಪ್ರಕರಣ) ದಾಖಲಿಸಿದ್ದಾರೆ. ಆದರೆ, ಉಪೇಂದ್ರ ಅವರು ಚಿತ್ರನಟ ಎಂಬ ಕಾರಣಕ್ಕೆ ಎಫ್‌ಐಆರ್ ದಾಖಲಿಸಿದ್ದಾರೆ” ಎಂದು ವಿವರಿಸಿದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎ ಬೆಳ್ಳಿಯಪ್ಪ ಅವರು “ಉಪೇಂದ್ರ ಅವರ ಹೇಳಿಕೆಯಿಂದ ಸಮುದಾಯಗಳ ನಡುವೆ ವೈಷಮ್ಯ ಮೂಡಿದೆ. ಇದರಿಂದ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಬಾರದು” ಎಂದು ಕೋರಿದರು.

Also Read
ನಟ ಉಪೇಂದ್ರ ವಿರುದ್ಧದ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಪ್ರಕರಣಕ್ಕೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಇದಕ್ಕೆ ಪೀಠವು “ಅರ್ಜಿದಾರರು ಯಾವುದೇ ಜಾತಿಯ ವ್ಯಕ್ತಿಯನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ. ಮೇಲಾಗಿ ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿಲ್ಲ. ಇಂತಹ ಉದ್ದೇಶಪೂರ್ವಕವಲ್ಲದ ಹೇಳಿಕೆಯು ಜಾತಿ ನಿಂದನೆ ಆರೋಪದಡಿ ಬರುವುದಿಲ್ಲ. ಮತ್ತೊಂದೆಡೆ ಒಂದೇ ಆರೋಪಕ್ಕೆ ಎರಡೆರಡು ಎಫ್‌ಐಆರ್ ದಾಖಲಿಸಲಾಗಿದೆ. ಈಗಾಗಲೇ ಮೊದಲನೇ ಎಫ್‌ಐಆರ್‌ಗೆ ತಡೆ ನೀಡಲಾಗಿದೆ” ಎಂದು ಹೇಳಿ ಹಲಸೂರು ಗೇಟ್‌ ಠಾಣೆಯಲ್ಲಿ ದಾಖಲಾಗಿರುವ ಎರಡನೇ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿ, ವಿಚಾರಣೆ ಮುಂದೂಡಿತು.

Related Stories

No stories found.
Kannada Bar & Bench
kannada.barandbench.com