ಪಂಚಮಸಾಲಿ ಸಮುದಾಯ ಮೀಸಲಾತಿ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಹಿಂದುಳಿದ ವರ್ಗಗಳ ಆಯೋಗವು ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿ ಸಲ್ಲಿಸಿದೆ. ರಾಜ್ಯ ಸರ್ಕಾರವು ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ. ಮಧ್ಯಂತರ ವರದಿಯು ಸೂಕ್ಷ್ಮ ವಿಚಾರಗಳಿಂದ ಕೂಡಿದ್ದು, ಈ ಹಂತದಲ್ಲಿ ಬಹಿರಂಗಗೊಳಿಸಲಾಗದು ಎಂದು ಎಜಿ ವಾದ.
Karnataka High Court
Karnataka High Court

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಮಾಡುವ ಹಿನ್ನೆಲೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂದು ಆದೇಶಿಸಬೇಕು ಎಂದು ಕೋರಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಒಂದು ವಾರ ಮುಂದೂಡಿದೆ.

ಬೆಂಗಳೂರಿನ ಡಿ ಜಿ ರಾಘವೇಂದ್ರ ಅವರು ಹಿಂದುಳಿದ ವರ್ಗಗಳ ಪಟ್ಟಿಯ ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಮೊಹಮ್ಮದ್‌ ನವಾಜ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ರಜಾಕಾಲೀನ ವಿಭಾಗೀಯ ಪೀಠವು ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ‌ ಎಚ್‌ ವಿ ಮಂಜುನಾಥ್‌ ಮತ್ತು ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರ ವಾದವನ್ನು ಆಲಿಸಿದ ಪೀಠವು ವಿಚಾರಣೆಯನ್ನು ಒಂದು ವಾರ ಮುಂದೂಡಿ ಆದೇಶ ಮಾಡಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ವಕೀಲ ಮಂಜುನಾಥ್‌ ಅವರು “ಹಿಂದಿನ ವಿಚಾರಣೆಯಲ್ಲಿ ಪೀಠವು ಹಿಂದುಳಿದ ವರ್ಗಗಳ ಆಯೋಗವು ಪಂಚಮಸಾಲಿ ಸಮುದಾಯಕ್ಕೆ ಸಂಬಂಧಿಸಿದ ಮಧ್ಯಂತರ ವರದಿ ಏನಾದರೂ ಇದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶ ಮಾಡಿದೆ. ಈ ಆದೇಶ ಪಾಲನೆಯಾಗಬೇಕು” ಎಂದರು.

ಇದಕ್ಕೆ ಆಕ್ಷೇಪಿಸಿದ ನಾವದಗಿ ಅವರು “ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿ ಸಲ್ಲಿಸಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರವು ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ. ಮುಚ್ಚಿದ ಲಕೋಟೆಯಲ್ಲಿ ಮುಖ್ಯಮಂತ್ರಿಗೆ ಸಲ್ಲಿಸಿರುವ ಮಧ್ಯಂತರ ವರದಿಯು ಸೂಕ್ಷ್ಮ ವಿಚಾರಗಳಿಂದ ಕೂಡಿದ್ದು, ಈ ಹಂತದಲ್ಲಿ ಅದನ್ನು ಬಹಿರಂಗಗೊಳಿಸಲಾಗದು” ಎಂದರು.

ಡಿಸೆಂಬರ್‌ 27ರ ವಿಚಾರಣೆಯಲ್ಲಿ ಪೀಠವು ರಾಜ್ಯ ಹಿಂದುಳಿದ ಆಯೋಗಗಳ ಕಾಯಿದೆ 1995ಕ್ಕೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಬೇಕು. ಮುಂದಿನ ವಿಚಾರಣೆಯ ವೇಳೆಗೆ ಆಯೋಗವು ತಳೆಯುವ ನಿಲುವನ್ನು ಆಧರಿಸಿ ಮುಂದಿನ ಆದೇಶ ಮಾಡುವ ಅಧಿಕಾರವನ್ನು ನ್ಯಾಯಾಲಯವು ಹೊಂದಿರುತ್ತದೆ ಎಂದು ಆದೇಶಿಸಿ ಪೀಠವು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿತ್ತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ “2000ನೇ ಇಸವಿಯಲ್ಲಿ ಲಿಂಗಾಯತ ಸಮುದಾಯದ ಕೆಲವು ಉಪ ಪಂಗಡಗಳ ಮೀಸಲಾತಿ ಕೋರಿಕೆಯನ್ನು ವಜಾ ಮಾಡಿ ಹಿಂದುಳಿದ ವರ್ಗಗಳ ಆಯೋಗವು ಕೆಲವು ಶಿಫಾರಸ್ಸುಗಳನ್ನು ಮಾಡಿತ್ತು. ಅದಾಗ್ಯೂ, ಆಯೋಗದ ಮಧ್ಯಂತರ ವರಿಯನ್ನು ಆಧರಿಸಿ, ಅಧಿಸೂಚನೆ ಪ್ರಕಟಿಸುವ ಮೂಲಕ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವ ಕ್ರಮಕ್ಕೆ ಮುಂದಾಗಲಾಗುತ್ತಿದೆ. ಇದಕ್ಕೆ ಯಾವುದೇ ಅವಕಾಶವಿಲ್ಲ ಎಂದಿದ್ದರು.

ರಾಜ್ಯ ಹಿಂದುಳಿದ ವರ್ಗಗಳ ಕಾಯಿದೆಯಲ್ಲಿ ಶಾಸನಬದ್ಧ ಸ್ಕೀಮ್‌ನಲ್ಲಿ ಮಧ್ಯಂತರ ವರದಿಯ ಬಗ್ಗೆ ಉಲ್ಲೇಖವಿಲ್ಲ. ಹೀಗಾಗಿ, ವೀರಶೈವ/ಲಿಂಗಾಯತ ಸಮುದಾಯದ ಉಪ ಪಂಗಡವನ್ನು ತಾತ್ಕಾಲಿಕ ಪ್ರಕ್ರಿಯೆಯ ಮೂಲಕ ಪ್ರವರ್ಗ 2ಎ ಗೆ ಸೇರಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವಾದಿಸಿದ್ದರು.

Related Stories

No stories found.
Kannada Bar & Bench
kannada.barandbench.com