ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಿಸಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಗೆ ರೇವಣ್ಣ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದನ್ನು ಸಂಪೂರ್ಣವಾಗಿ ಪರಿಶೀಲಿಸಬೇಕಿದೆ ಎಂದು ರಾಜ್ಯ ಸರ್ಕಾರ ಹೇಳಿದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಅರ್ಜಿ ವಿಚಾರಣೆ ಮುಂದೂಡಿತು.
ರೇವಣ್ಣ ಅವರಿಗೆ ವಿಚಾರಣಾಧೀನ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ನಡೆಸಿತು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು “ಈಗಷ್ಟೇ ಆಕ್ಷೇಪಣೆಯ ಪ್ರತಿ ನೀಡಿದ್ದಾರೆ. ಅದನ್ನು ಓದಬೇಕಿದೆ. ಮುಂದಿನ ವಾರ ವಿಚಾರಣೆ ನಡೆಸಬಹುದು” ಎಂದರು. ಇದಕ್ಕೆ ಒಪ್ಪಿದ ಪೀಠವು ಜೂನ್ 28ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.
ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಅಪಹರಣ ಸಂಬಂಧ ಆಕೆಯ ಪುತ್ರ ನೀಡಿದ ದೂರು ಆಧರಿಸಿ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಎಚ್ ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 364ಎ, 365 ಜೊತೆಗೆ 34 ಅಡಿ ಪ್ರಕರಣ ದಾಖಲಾಗಿದೆ. ಇದರಲ್ಲಿ ಸತೀಶ್ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.
ಇನ್ನೊಂದೆಡೆ ಹೊಳೆನರಸೀಪುರ ಠಾಣೆಯಲ್ಲಿ ತನ್ನನ್ನು ಮೊದಲ ಆರೋಪಿಯನ್ನಾಗಿಸಿ ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣ ರದ್ದುಪಡಿಸುವಂತೆ ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು.
ರೇವಣ್ಣ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು “ಪ್ರಕರಣದಲ್ಲಿ ಮಾಹಿತಿದಾರರಾದ ಎರಡನೇ ಪ್ರತಿವಾದಿಗೆ ಪೊಲೀಸರು ಏಕೆ ನೋಟಿಸ್ ನೀಡಿಲ್ಲ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಉತ್ತರಿಸಬೇಕಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಅವರಿಂದ ವಿವರಣೆ ಕೇಳಬೇಕು” ಎಂದರು.
ಎಸ್‌ಐಟಿ ಅಧಿಕಾರಿಗಳು ಮಾಹಿತಿದಾರೆಗೆ ನೋಟಿಸ್ ಜಾರಿಯಾಗುವಂತೆ ನೋಡಿಕೊಳ್ಳುವುದನ್ನು ಖಾತರಿಪಡಿಸಬೇಕು ಎಂದು ಹೇಳಿದ ಪೀಠವು ವಿಚಾರಣೆಯನ್ನು ಮುಂದೂಡಿತು.
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಏಪ್ರಿಲ್ 28ರಂದು ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಯಲ್ಲಿ ಎಚ್ ಡಿ ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ರೇವಣ್ಣರನ್ನು ಮೊದಲ ಹಾಗೂ ಪ್ರಜ್ವಲ್‌ರನ್ನು ಎರಡನೇ ಆರೋಪಿಯನ್ನಾಗಿಸಿ ಪೊಲೀಸರು ಐಪಿಸಿ ಸೆಕ್ಷನ್‌ಗಳಾದ 354(ಎ), 354(ಡಿ), 506 ಅಡಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ.