
ಜೂನ್ 6ರಿಂದ ವಕ್ಫ್ ಉಮೀದ್ ಪೋರ್ಟಲ್‌ಗೆ ಚಾಲನೆ ನೀಡುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಮಂಗಳವಾರ ಪತ್ರಿಕಾ ಹೇಳಿಕೆ ನೀಡಿದೆ.
ವಕ್ಫ್ ತಿದ್ದುಪಡಿ ಕಾಯಿದೆ 2025ರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವುದರಿಂದ ಸರ್ಕಾರದ ಈ ಕ್ರಮ ಕಾನೂನುಬಾಹಿರವಾಗಿದ್ದು ನ್ಯಾಯಾಂಗ ನಿಂದನೆಗೆ ಸಮ ಎಂದು ಅದು ದೂರಿದೆ. ಹೀಗಾಗಿ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಲು ಅದು ನಿರ್ಧರಿಸಿದೆ.
ಕಾಯಿದೆಯನ್ನು ಎಲ್ಲಾ ಮುಸ್ಲಿಂ ಸಂಘಟನೆಗಳು ವಿರೋಧಿಸಿದ್ದು ವಿರೋಧ ಪಕ್ಷಗಳು, ಮಾನವ ಹಕ್ಕುಗಳ ಸಂಘಟನೆಗಳು, ಸಿಖ್ ಮತ್ತು ಕ್ರಿಶ್ಚಿಯನ್ ಸಂಸ್ಥೆಗಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳು ಕೂಡ ಇದನ್ನು ಟೀಕಿಸಿವೆ ಎಂದು ಅದು ಹೇಳಿದೆ.
ನ್ಯಾಯಾಲಯದ ನ ಆದೇಶ ಬರುವವರೆಗೆ ಪೋರ್ಟಲ್ ಮೂಲಕ ಮನವಿ ಪತ್ರ ಅಥವಾ ಆಸ್ತಿ ನೋಂದಾಯಿಸುವುದನ್ನು ತಪ್ಪಿಸುವಂತೆ ಮಂಡಳಿ ವಕ್ಫ್ ನಿರ್ವಾಹಕರನ್ನು ಒತ್ತಾಯಿಸಿದೆ.
ಎರಡು ವಾರಗಳ ಹಿಂದೆಯಷ್ಟೇ, ವಕ್ಫ್ (ತಿದ್ದುಪಡಿ) ಕಾಯಿದೆ- 2025ಕ್ಕೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು ಕಾಯ್ದಿರಿಸಿತ್ತು.
ವಕ್ಫ್ ತಿದ್ದುಪಡಿ ಕಾಯಿದೆ ಮುಸ್ಲಿಮ್ ಸಮುದಾಯವನ್ನು ತಾರತಮ್ಯದಿಂದ ಕಾಣುತ್ತದೆ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ದೂರಿ ಸುಪ್ರೀಂ ಕೋರ್ಟ್‌ನಲ್ಲಿ ವಿವಿಧ ಅರ್ಜಿಗಳು ಸಲ್ಲಿಕೆಯಾಗಿವೆ. ವಿವಿಧ ವ್ಯಕ್ತಿಗಳು, ರಾಜಕೀಯ ಪಕ್ಷಗಳು ಈ ಸಂಬಂಧ ಅರ್ಜಿ ಸಲ್ಲಿಸಿದ್ದಾರೆ. ಕಾಯಿದೆ ಸಂಬಂಧ ಮಧ್ಯಂತರ ಪರಿಹಾರ ಕೋರಿಯೂ ಅರ್ಜಿಗಳು ಸಲ್ಲಿಕೆಯಾಗಿವೆ.