ಬಿಜೆಪಿ ವಿರುದ್ಧ ಶೇ.40 ಕಮಿಷನ್ ಆರೋಪ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಜಾಮೀನು ಮಂಜೂರು

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡುವುದಕ್ಕೆ ಸಂಬಂಧಿಸಿದಂತೆ ವಾದ ಆಲಿಸಿ ಆದೇಶ ಮಾಡುವುದಾಗಿ ಹೇಳಿದ ವಿಶೇಷ ಮ್ಯಾಜಿಸ್ಟ್ರೇಟ್‌.
Rahul Gandhi, Siddaramaiah and D K Shivakumar
Rahul Gandhi, Siddaramaiah and D K Shivakumar

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಎಸ್‌ ಕೇಶವ ಪ್ರಸಾದ್‌ ಸಲ್ಲಿಸಿರುವ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಎನ್‌ ಶಿವಕುಮಾರ್‌ ನಡೆಸಿದರು.

ಕಳೆದ ವಿಚಾರಣೆಯಲ್ಲಿ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಇದರ ಭಾಗವಾಗಿ ಉಭಯ ನಾಯಕರು ನ್ಯಾಯಾಲಯದ ಮುಂದೆ ಖುದ್ದು ಹಾಜರಾದರು. ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಹಾಜರಾತಿ ದಾಖಲಿಸಿಕೊಂಡ ನ್ಯಾಯಾಲಯವು ತಲಾ ಐದು ಸಾವಿರ ರೂಪಾಯಿ ನಗದು ಬಾಂಡ್‌ ಪಡೆದು ಅವರಿಗೆ ಜಾಮೀನು ಮಂಜೂರು ಮಾಡಿತು.

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಅನುಪಸ್ಥಿತಿಗೆ ಸಂಬಂಧಿಸಿದಂತೆ ಅವರ ಪರವಾಗಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌ ಎ ಅಹ್ಮದ್‌, ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಮತ್ತು ವಕೀಲ ನಿಶಿತ್‌ ಕುಮಾರ್‌ ಶೆಟ್ಟಿ ಅವರು “ಈ ಬಾರಿ ರಾಹುಲ್‌ ಗಾಂಧಿ ಅವರ ಹಾಜರಾತಿಗೆ ವಿನಾಯಿತಿ ನೀಡಬೇಕು. ಎರಡು ಬಾರಿ ವಿನಾಯಿತಿ ನೀಡಲು ಅವಕಾಶವಿದೆ. ಪ್ರಕರಣವನ್ನು ಜೂನ್‌ 7ಕ್ಕೆ ಮುಂದೂಡಬೇಕು” ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಬಿಜೆಪಿ ಪರ ವಕೀಲ ವಿನೋದ್‌ ಕುಮಾರ್‌ ಅವರು “ಒಮ್ಮೆ ಮಾತ್ರ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದಾಗ ಹಾಜರಾಗದಿದ್ದರೆ ವಿನಾಯಿತಿ ನೀಡಬಹುದು. ಸಿಆರ್‌ಪಿಸಿ ಸೆಕ್ಷನ್‌ 205ರ ಅಡಿ ಅದಕ್ಕೆ ಅವಕಾಶವಿದೆ. ಎರಡೆರಡು ಬಾರಿ ವಿನಾಯಿತಿ ಇರುವುದಿಲ್ಲ. ನ್ಯಾಯಾಲಯದ ಮುಂದೆ ಎಲ್ಲರೂ ಸಮಾನರು. ರಾಹುಲ್‌ ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇರುವುದರಿಂದ ಅವರ ವಿರುದ್ಧ ಜಾಮೀನುರಹಿತ ವಾರೆಂಟ್‌ ಜಾರಿ ಮಾಡಬೇಕು” ಎಂದರು.

ಈ ಸಂಬಂಧ ವಿಸ್ತೃತ ವಾದ ಆಲಿಸಿ, ಮಧ್ಯಾಹ್ನ 3 ಗಂಟೆಗೆ ಆದೇಶ ಪ್ರಕಟಿಸುವುದಾಗಿ ಹೇಳಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತು.

Also Read
ಬಿಜೆಪಿ ವಿರುದ್ಧ ಶೇ.40 ಕಮಿಷನ್ ಆರೋಪ: ಸಿದ್ದು, ಡಿಕೆಶಿಗೆ ಸಮನ್ಸ್‌ ಮರು ಜಾರಿ; ರಾಹುಲ್‌ಗೆ ಜೂ.1ರವರೆಗೆ ವಿನಾಯಿತಿ

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವಾಗಿಸಿದ್ದ ಕಾಂಗ್ರೆಸ್‌ 2023ರ ಮೇ 5ರಂದು ಎಲ್ಲಾ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ಭ್ರಷ್ಟಾಚಾರ ದರ ಪಟ್ಟಿ ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು. ಅಲ್ಲದೇ, ಕೋವಿಡ್‌ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ 25-30% ಕಮಿಷನ್‌ ಪಡೆಯಲಾಗುತ್ತಿದೆ. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್ ನ (ಬಿಜೆಪಿ) ಸರ್ಕಾರವು ರೂ.1.5 ಲಕ್ಷ ಕೋಟಿಯನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇದರ ವಿರುದ್ಧ ದೂರು ದಾಖಲಿಸಿದ್ದ ಬಿಜೆಪಿಯು, ಡಬಲ್‌ ಎಂಜಿನ್‌ ಸರ್ಕಾರಕ್ಕೆ ಬದಲಾಗಿ ಟ್ರಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಕಾಂಗ್ರೆಸ್‌ ಹಾನಿ ಮಾಡಿದೆ; ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಆರೋಪಿಗಳು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಹಾಗೂ ರಾಹುಲ್‌ ಗಾಂಧಿ ಅವರು ನೇರ ಕಾರಣವಾಗಿದ್ದಾರೆ ಎಂದು ಆರೋಪಿಸಿತ್ತು.

ರಾಹುಲ್‌ ಗಾಧಿ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಸುಳ್ಳು ಜಾಹೀರಾತನ್ನು ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ಮಾನಹಾನಿ ಮಾಡುವ ಪ್ರಯತ್ನ ಮಾಡಲಾಗಿದೆ. ಹೀಗಾಗಿ, ಕಾಂಗ್ರೆಸ್‌, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಮತ್ತು ರಾಹುಲ್‌ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿಯು ಖಾಸಗಿ ದೂರು ದಾಖಲಿಸಿತ್ತು. ಇದರ ಸಂಜ್ಞೇ ಪರಿಗಣಿಸಿದ್ದ ವಿಶೇಷ ನ್ಯಾಯಾಲಯವು ಫೆಬ್ರವರಿ 23ರಂದು ಮಾನಹಾನಿ ದಾವೆ ದಾಖಲಿಸಲು ಆದೇಶಿಸಿ, ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿತ್ತು. ಆದರೆ, ಸಮನ್ಸ್‌ ಅನ್ನು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಅವರಿಗೆ ತಲುಪಿಸದ ಹಿನ್ನೆಲೆಯಲ್ಲಿ ಮರು ಜಾರಿ ಮಾಡಲಾಗಿತ್ತು.

Kannada Bar & Bench
kannada.barandbench.com