ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನೀಡಿರುವ ಹೇಳಿಕೆಯ ವಿಡಿಯೋ ಸಿಡಿಯನ್ನು ಒದಗಿಸುವಂತೆ ಪ್ರಕರಣದ ದೂರುದಾರರಾದ ನಮಿತಾ ಕೆ.ಪೂಜಾರಿ ಅವರಿಗೆ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಶುಕ್ರವಾರ ಸೂಚಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ, ಶಾಸಕ ಹರೀಶ್ ಪೂಂಜಾ ಅವರು ನೀಡಿದ ಹೇಳಿಕೆಯಿಂದ ಯಾವುದೇ ಹಿಂಸಾಚಾರ ಅಥವಾ ಶಾಂತಿಭಂಗ, ಕೋಮು ಸೌಹಾರ್ದಕ್ಕೆ ಧಕ್ಕೆಯಾದ ಪ್ರಕರಣ ನಡೆದಿಲ್ಲ. ರಾಜಕೀಯ ಪ್ರೇರಿತ, ದುರುದ್ದೇಶ ಮತ್ತು ದ್ವೇಷ ಭಾವನೆಯಿಂದ ದೂರು ದಾಖಲಿಸಿದ್ದು, ಅದನ್ನು ರದ್ದುಪಡಿಸಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ದೂರುದಾರೆ ಪರ ವಕೀಲ ಬಿ ಲತೀಫ್ ಅವರು, ಅರ್ಜಿದಾರರು ನೀಡಿರುವ ಹೇಳಿಕೆ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಿದೆ. ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆಯ ವಿಡಿಯೋ ಸಿಡಿ ತಮ್ಮ ಬಳಿ ಇದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಮಯಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿಗೆ ಒಪ್ಪಿದ ಪೀಠವು ಸಿಡಿ ಒದಗಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜಾ ಜಯ ಸಾಧಿಸಿದ್ದರು. ಇದರಿಂದ ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನ ಜೈನ್ ಪಟೇಲ್ ಸಭಾಂಗಣದಲ್ಲಿ 2023ರ ಮೇ 22ರಂದು ಬಿಜೆಪಿ ಪಕ್ಷದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ? ‘ಸತ್ಯಣ್ಣ, 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಮತ ಕೇಳಿದ್ದೀರಲ್ಲಾ? ಹಿಂದೂ ಹುಡುಗಿಯನ್ನು ಪ್ರೀತಿಸಿದ್ದ ಮುಸ್ಲಿಂ ಹುಡುಗನಿಗೆ ಹಿಂದೂ ಹುಡುಗನೊಬ್ಬ ಹಲ್ಲೆ ಮಾಡಿದ್ದ. ಗೋವುಗಳನ್ನು ಸಾಗಿಸುತ್ತಿದ್ದವರಿಗೆ ಹಿಂದೂ ಯುವಕರು ತಡೆದು ಹಲ್ಲೆ ಮಾಡಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ನಾನು ಠಾಣೆಗೆ ಹೋಗಿ ಅವರ ಮೇಲೆ ಪ್ರಕರಣ ದಾಖಲಾಗದಂತೆ ನೋಡಿಕೊಂಡು ಠಾಣೆಯಿಂದ ಬಿಡಿಸಿಕೊಂಡು ಬಂದಿದ್ದೇನೆ’ ಎಂದು ಹೇಳಿಕೆ ನೀಡಿದ್ದರು.
ಇದನ್ನು ಆಧರಿಸಿ ನಮಿತಾ ಕೆ.ಪೂಜಾರಿ ಎಂಬುವರು ಬೆಳ್ತಂಗಡಿ ಠಾಣೆಗೆ ದೂರು ನೀಡಿ, ಹರೀಶ್ ಪೂಂಜಾ ಶಾಸಕನಾಗಿದ್ದುಕೊಂಡು ಕೋಮು ಪ್ರಚೋದಕ ಸಂವಿಧಾನಬಾಹಿರ ಹೇಳಿಕೆ ನೀಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಮಧ್ಯೆ ದ್ವೇಷ ಉಂಟು ಮಾಡಬೇಕು ಹಾಗೂ ಶಾಂತಿ ಕದಡಬೇಕು ಎಂಬ ಉದ್ದೇಶದಿಂದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರು ಸ್ವೀಕರಿಸಿದ್ದ ಪೊಲೀಸರು, ಐಪಿಸಿ ಸೆಕ್ಷನ್‌ಗಳಾದ 153, 153(ಎ) 505 ಮತ್ತು 505(ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.