ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ದೇಶಮುಖ್ ವಿರುದ್ಧ ಮಾಡಿದ ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪಗಳನ್ನು ಆಧರಿಸಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.
ವಕೀಲರಾದ ಸೋನಾಲಿ ಜಾಧವ್ ಅವರ ಮೂಲಕ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಸಿಬಿಐನ ಬಲವಂತದ ಕ್ರಮದಿಂದಲೂ ಮಧ್ಯಂತರ ರಕ್ಷಣೆ ನೀಡುವಂತೆ ಕೋರಲಾಗಿದೆ. ಪ್ರಕರಣವನ್ನು ಈ ವಾರ ತುರ್ತು ವಿಚಾರಣೆಗೆ ಪರಿಗಣಿಸುವ ಸಾಧ್ಯತೆ ಇದೆ.
ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ವರ್ಗಾವಣೆಗೊಂಡ ಸಿಂಗ್, ದೇಶಮುಖ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಅಲ್ಲದೆ ಪ್ರಕರಣವನ್ನು ಸಿಬಿಐ ವಿಚಾರಣೆ ನಡೆಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲು ಸಿಬಿಐಗೆ ಹೈಕೋರ್ಟ್ ಅನುಮತಿ ನೀಡಿತ್ತು.
ಪೊಲೀಸ್ ಅಧಿಕಾರಿಗಳ ವರ್ಗಾವಣೆ ಹಾಗೂ ನೇಮಕಾತಿಯಲ್ಲಿ ಅನಗತ್ಯ ಪ್ರಭಾವ ಬೀರಿದ್ದಾರೆ ಮತ್ತು ಅಧಿಕಾರಿಗಳ ಕರ್ತವ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿ ಹೈಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯಲ್ಲಿ ವಿವರಿಸಲಾಗಿತ್ತು. ದೇಶಮುಖ್ ಸಂಜ್ಞೇಯ ಅಪರಾಧ ಎಸಗಿದ್ದಾರೆ ಎಂದು ತನಿಖೆ ನಂತರ ನಿರ್ಧರಿಸಿದ್ದ ಸಿಬಿಐ ದೇಶಮುಖ್ ಮತ್ತು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿತ್ತು.