ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಕರಣ: ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂದ ಎಜಿ ಕಚೇರಿ

ರಾಜ್ಯ ಅಡ್ವೊಕೇಟ್‌ ಜನರಲ್‌ ಕಚೇರಿಯು ಕಂದಾಯ ಇಲಾಖೆಯ ಕಾನೂನು ವಿಭಾಗದ ಮುಖ್ಯಸ್ಥರಿಗೆ ತನ್ನ ಮೂರು ಪುಟಗಳ ಅಭಿಪ್ರಾಯ ರವಾನಿಸಿದೆ ಎಂದು ತಿಳಿದು ಬಂದಿದೆ.
Murugha Mutt and Dr. Shivamurthy Murugha Sharanaru
Murugha Mutt and Dr. Shivamurthy Murugha Sharanaru
Published on

ಚಿತ್ರದುರ್ಗ ಮುರುಘಾ ಮಠಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂದು ಅಡ್ವೊಕೇಟ್‌ ಜನರಲ್‌ ಕಚೇರಿ ಅಭಿಪ್ರಾಯಪಟ್ಟಿದೆ.

ರಾಜ್ಯ ಅಡ್ವೊಕೇಟ್‌ ಜನರಲ್‌ ಕಚೇರಿಯು ಕಂದಾಯ ಇಲಾಖೆಯ ಕಾನೂನು ವಿಭಾಗದ ಮುಖ್ಯಸ್ಥರಿಗೆ ತನ್ನ ಮೂರು ಪುಟಗಳ ಅಭಿಪ್ರಾಯ ರವಾನಿಸಿದ್ದು, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರ ಏಕಸದಸ್ಯ ನ್ಯಾಯಪೀಠದ ತೀರ್ಪಿನಲ್ಲಿ ಯಾವುದೇ ಆಕ್ಷೇಪಣೆ ವ್ಯಕ್ತಪಡಿಸುವ ಅಂಶಗಳು ಕಂಡುಬರುತ್ತಿಲ್ಲ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಬೇಕಾಗಿಲ್ಲ ಎಂಬ ಸ್ಪಷ್ಟ ನಿಲುವನ್ನು ದಾಖಲಿಸಿದೆ ಎನ್ನಲಾಗಿದೆ.

ಪ್ರಕರಣದ ಹಿನ್ನೆಲೆ: ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಪೋಕ್ಸೊ ಪ್ರಕರಣದಲ್ಲಿ ಜೈಲು ಸೇರಿದ ಹಿನ್ನೆಲೆಯಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವು ಅಂದಿನ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರ ಅಭಿಪ್ರಾಯ ಆಧರಿಸಿ ಪಿ ಎಸ್ ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ವಸ್ತ್ರದ 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.

Also Read
ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್‌ ಅಧಿಕಾರಿ ವಸ್ತ್ರದ್‌ ನೇಮಕ ರದ್ದುಪಡಿಸಿದ ಹೈಕೋರ್ಟ್‌

ರಾಜ್ಯ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್‌ ಮೆಟ್ಟಿಲೇರಿದ್ದರು. ‘ಸಂವಿಧಾನದ 162ನೇ ವಿಧಿಯ ಅನುಸಾರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸಂವಿಧಾನಬಾಹಿರ. ಅಂತೆಯೇ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ–1988ರ ಸೆಕ್ಷನ್‌ 8 (2)ರಡಿ ಶರಣರು ತಮ್ಮ ಅಧಿಕಾರ ಚಲಾಯಿಸಲು ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿರುವುದು ಕಾನೂನು ಬಾಹಿರ. ಆದ್ದರಿಂದ, ಈ ಆದೇಶಗಳನ್ನು ವಜಾಗೊಳಿಸಬೇಕು ಎಂದು ಪ್ರತ್ಯೇಕವಾಗಿ ಕೋರಿದ್ದರು. ಈ ಅರ್ಜಿಗಳನ್ನು ಏಕಸದಸ್ಯ ಪೀಠವು ಎತ್ತಿ ಹಿಡಿದಿತ್ತು.

Kannada Bar & Bench
kannada.barandbench.com