ದುರ್ಗಾಪರಮೇಶ್ವರಿ ದೇವಾಲಯದ ವ್ಯವಸ್ಥಾಪನಾ ಮಂಡಳಿಗೆ ನೇಮಕ: 10 ದಿನಗಳಲ್ಲಿ ದಾಖಲೆ ಸಲ್ಲಿಸಲು ಹೈಕೋರ್ಟ್‌ ನಿರ್ದೇಶನ

ಸದಸ್ಯರ ನೇಮಕಾತಿಯು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯಿದೆಗೆ ವಿರುದ್ಧವಾಗಿದೆ. ಆದ್ದರಿಂದ, ನೇಮಕಾತಿಯನ್ನು ರದ್ದುಪಡಿಸಬೇಕು ಎಂಬುದು ಅರ್ಜಿದಾರರ ಮನವಿಯಾಗಿದೆ.
Karnataka High Court and Justice S Sunil Dutt Yadav
Karnataka High Court and Justice S Sunil Dutt Yadav
Published on

ಬೆಳ್ತಂಗಡಿಯ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವ ದಾಖಲೆಗಳನ್ನು 10 ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.

ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯಿದೆಯ ನಿಯಮಗಳನ್ನು ಉಲ್ಲಂಘಿಸಿ ಸದಸ್ಯರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಬೆಳ್ತಂಗಡಿ ತಾಲೂಕು ಗೇರುಕಟ್ಟೆ ನಿವಾಸಿ ದಿವಾಕರ ಆಚಾರ್ಯ ಹಾಗೂ ಜನರ್ದಾನ ಪೂಜಾರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಕೀಲರು “ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯಿದೆಯ ಸೆಕ್ಷನ್ 25ರ ಪ್ರಕಾರ ಸದಸ್ಯರನ್ನು ನೇಮಕ ಮಾಡಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸ್ಸಿನಂತೆ ನೇಮಕಾತಿ ನಡೆದಿದೆ” ಎಂದರು. ಅದಕ್ಕೆ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು 10 ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇನ ನೀಡಿದ ಪೀಠವು ವಿಚಾರಣೆಯನ್ನು ಮುಂದೂಡಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಶಿಫಾರಸ್ಸು ಪತ್ರದಲ್ಲಿ ಸಲ್ಲಿಸಿದ್ದ ಪಟ್ಟಿಯಲ್ಲಿದ್ದವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಅದರಂತೆ ಜಿಲ್ಲಾ ಧಾರ್ಮಿಕ ಪರಿಷತ್ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು ಎನ್ನಲಾಗಿದೆ.

ಎಂ ರಾಘವೇಂದ್ರ, ನೀನಾ ಕುಮಾರ್, ಪಿ ರೀಟಾ, ಮೋಹಿನಿ, ಹೇಮಂತ್ ಕುಮಾರ್, ಶರತ್ ಕುಮಾರ್, ಎಚ್ ರಾಘವ, ಕೆ ಹರೀಶ್ ಹಾಗೂ ಬಿ ಹರೀಶ್ ಕುಮಾರ್ ಅವರನ್ನು ವ್ಯವಸ್ಥಾಪನಾ ಸಮಿತಿಗೆ ನೇಮಕ ಮಾಡಲಾಗಿದೆ. ಈ ನೇಮಕಾತಿಯು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯಿದೆಗೆ ವಿರುದ್ಧವಾಗಿದೆ. ಆದ್ದರಿಂದ, ನೇಮಕಾತಿಯನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com