ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ 2019ರ ಕಾಯಿದೆಯ ಸಿಂಧುತ್ವವನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲಾಗುವುದು ಎಂಬ ಕೇಂದ್ರ ಸರ್ಕಾರದ ನಿಲುವನ್ನು ಪರಿಗಣಿಸಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಹಾಗೂ ಸೂರ್ಯಕಾಂತ್ ಅವರಿದ್ದ ಸಾಂವಿಧಾನಿಕ ಪೀಠ ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಮರುಸಂಘಟಿಸಲು ಅನುಮತಿ ಇದೆಯೇ ಎಂದು ನಿರ್ಧರಿಸುವುದು ಅನಗತ್ಯ ಎಂದು ತೀರ್ಮಾನಿಸಿತು.
ಕೇಂದ್ರಾಡಳಿತ ಪ್ರದೇಶವಾಗಿ ಜಮ್ಮು ಮತ್ತು ಕಾಶ್ಮೀರದ ಸ್ಥಾನಮಾನ ತಾತ್ಕಾಲಿಕವಾಗಿದ್ದು ಈ ಪ್ರದೇಶಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಂಡಿತು.
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮತ್ತೆ ಒದಗಿಸುವುದರಿಂದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ನೀಡಲಾಗಿರುವ ಸ್ಥಾನಮಾನದ ಮೇಲೆ ಪರಿಣಾಮ ಉಂಟಾಗುವುದಿಲ್ಲ ಎಂದು ಮೆಹ್ತಾ ನ್ಯಾಯಾಲಯಕ್ಕೆ ಈ ಹಿಂದೆ ತಿಳಿಸಿದ್ದರು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿ ರದ್ದುಗೊಳಿಸಿ ಕೇಂದ್ರ ಸರ್ಕಾರ 2019ರಲ್ಲಿ ಕೈಗೊಂಡ ನಿರ್ಧಾರವನ್ನು ಸೋಮವಾರ ಎತ್ತಿಹಿಡಿಯಲಾಗಿದ್ದು ಆ ತೀರ್ಪಿನಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಆದರೂ ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ದೊರೆಯುವವರಿಗೆ ಚುನಾವಣೆ ತಡೆಹಿಡಿತಯುವಂತಿಲ್ಲ ಎಂದಿರುವ ನ್ಯಾಯಾಲಯ ಸೆ. 30, 2024 ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.
ಜೊತೆಗೆ "ರಾಜ್ಯದ ಸ್ಥಾನಮಾನ ನೀಡುವ ಕೆಲಸ ಸಾಧ್ಯವಾದಷ್ಟು ಬೇಗ ನಡೆಯಬೇಕು" ಎಂದು ನ್ಯಾಯಾಲಯ ನುಡಿದಿದೆ.