
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ತಯಾರಿಕೆ, ವಿತರಣೆ ಮತ್ತು ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಸರ್ಕಾರದ ಆದೇಶವನ್ನು ಸಂಬಂಧಪಟ್ಟ ಪ್ರಾಧಿಕಾರಗಳು ಕಾನೂನಿನ ಅನುಸಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲಿವೆ ಎಂದು ನಿರೀಕ್ಷೆ ಹೊಂದಿರುವುದಾಗಿ ಕರ್ನಾಟಕ ಹೈಕೋರ್ಟ್ ಈಚೆಗೆ ಹೇಳಿದೆ.
ಪಿಒಪಿ ಮೂರ್ತಿಗಳನ್ನು ನಿಷೇಧಿಸಿ 2023ರ ಸೆಪ್ಟೆಂಬರ್ 15ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಗರಾಭಿವೃದ್ಧಿ ಇಲಾಖೆ ಹಾಗೂ ಇತರ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ಇತ್ಯರ್ಥಪಡಿಸಿತು.
ಪಿಒಪಿ ಮೂರ್ತಿಗಳ ತಯಾರಿಕೆ, ವಿತರಣೆ, ಮಾರಾಟ ಇನ್ನಿತರ ವಿಷಯದ ಕುರಿತು ಯಾವುದೇ ನಿರ್ದಿಷ್ಟ ನಿರ್ದೇಶನ ನೀಡಲು ನಿರಾಕರಿಸಿದ ಪೀಠವು “2023ರಲ್ಲಿ ಹೊರಡಿಸಲಾದ ಸರ್ಕಾರಿ ಅಧಿಸೂಚನೆ ಜಾರಿಯಲ್ಲಿರುವುದರಿಂದ ಮತ್ತದೇ ಆದೇಶ ಹೊರಡಿಸುವ ಅಗತ್ಯವಿಲ್ಲ. ನಿಸ್ಸಂಶಯವಾಗಿ ಇದೊಂದು ಗಂಭೀರ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ 2023ರ ಸರ್ಕಾರಿ ಆದೇಶವನ್ನು ಸಂಬಂಧಪಟ್ಟ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಜಾರಿಗೆ ತರಲಿವೆ ಎಂಬ ನಿರೀಕ್ಷೆ ಇದೆ” ಎಂದು ತಿಳಿಸಿ, ಅರ್ಜಿ ಇತ್ಯರ್ಥಪಡಿಸಿತು.
ಇದಕ್ಕೂ ಮುನ್ನ, ಕೆಎಸ್‌ಪಿಸಿಬಿ ಪರ ವಕೀಲ ಮಹೇಶ್ ಚೌಧರಿ ಅವರು “2023ರ ಸರ್ಕಾರಿ ಆದೇಶವನ್ನು ಸಮರ್ಪಕವಾಗಿ ಪಾಲನೆಯಾಗಿಲ್ಲ. ಮಾರುಕಟ್ಟೆಯಲ್ಲಿ ಪಿಒಪಿ ಇಂದ ತಯಾರಿಸಿರುವ ಗೌರಿ ಹಾಗೂ ಗಣೇಶ ಮೂರ್ತಿಗಳು ಕಾಣಿಸಿಕೊಳ್ಳುತ್ತಿವೆ. ಕುಂಬಳಗೋಡು ಹೋಬಳಿಯ ಹುಳಿಮಾವು ಗ್ರಾಮದಲ್ಲಿ ಇಬ್ಬರು ವ್ಯಕ್ತಿಗಳು ಪಿಒಪಿ ಮೂರ್ತಿ ತಯಾರಿಸುತ್ತಿರುವ ವಿಚಾರ ತಿಳಿದುಬಂದಿದೆ. ಪಿಒಪಿ ಮೂರ್ತಿಗಳು ನೀರಿನಲ್ಲಿ ಮುಳುಗಿದಾಗ ನೀರಿನಲ್ಲಿರುವ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತದೆ. ಜಲ ಮೂಲಗಳು ಮತ್ತು ಪರಿಸರದ ಮೇಲೂ ಗಂಭೀರ ಪರಿಣಾಮ ಉಂಟಾಗಲಿದೆ. ಇದು ಸಂವಿಧಾನ ಪರಿಚ್ಛೇದ 21ರ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆಯಾಗಿದೆ” ಎಂದು ಪೀಠಕ್ಕೆ ವಿವರಿಸಿದರು.
ಸರ್ಕಾರದ ಪರ ವಕೀಲೆ ನಿಲೋಫರ್ ಅಕ್ಬರ್ ಅವರು “ಪಿಒಪಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕೆಲ ಎಫ್‌ಐಆರ್ ದಾಖಲಿಸಲಾಗಿದೆ. ಕಾನೂನಿನ ಅನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದರು.