[ಬೆಂಗಳೂರು-ಚೆನ್ನೈ ಕಾರಿಡಾರ್‌] ಕೊಳತ್ತೂರು ಜಂಕ್ಷನ್‌ ಬಳಿ ಮೇಲ್ಸೇತುವೆ: 2 ತಿಂಗಳಲ್ಲಿ ಪರಿಗಣಿಸಲು ಹೈಕೋರ್ಟ್‌ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕೃಷಿಕರಾದ ಕೆ ವಿ ರವಿಕುಮಾರ್ ಸೇರಿದಂತೆ ಕೊಳತ್ತೂರು, ಅಪ್ಪಸಂದ್ರ, ಸೋಲೂರು, ಊರಹಳ್ಳಿ ಗ್ರಾಮಗಳ ಒಟ್ಟು 13 ನಿವಾಸಿಗಳಿಂದ ಅರ್ಜಿ ಸಲ್ಲಿಕೆ.
High Court of Karnataka
High Court of Karnataka

ಬೆಂಗಳೂರು–ಚೆನ್ನೈ ಕಾರಿಡಾರ್‌ ಮಾರ್ಗದಲ್ಲಿನ ಹೊಸಕೋಟೆ ತಾಲ್ಲೂಕಿನ ಕೊಳತ್ತೂರು ಜಂಕ್ಷನ್‌ ಬಳಿ ಮೇಲ್ಸೇತುವೆ ನಿರ್ಮಿಸುವಂತೆ ಕೋರಿ ಸ್ಥಳೀಯರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳಲ್ಲಿ ಪರಿಗಣಿಸಿ ಕಾನೂನು ಪ್ರಕಾರ ತೀರ್ಮಾನ ಕೈಗೊಳ್ಳುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.

ಮೇಲ್ಸೇತುವೆ ನಿರ್ಮಾಣ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಕೃಷಿಕರಾದ ಕೆ ವಿ ರವಿಕುಮಾರ್ ಸೇರಿದಂತೆ ಕೊಳತ್ತೂರು, ಅಪ್ಪಸಂದ್ರ, ಸೋಲೂರು, ಊರಹಳ್ಳಿ ಗ್ರಾಮಗಳ ಒಟ್ಟು 13 ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೊಳತ್ತೂರು ಜಂಕ್ಷನ್‌ ಬಳಿ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಕೋರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರು, ಅದರ ಯೋಜನಾ ವಿಭಾಗದ ನಿರ್ದೇಶಕರಿಗೆ ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಆ ಮನವಿಯನ್ನು ಎಂಟು ವಾರಗಳಲ್ಲಿ ಕಾನೂನು ಪ್ರಕಾರ ಪರಿಗಣಿಸಿ ನಿರ್ಧಾರ ತಿಳಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಿದರು.

ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ಎಂ ಶಿವಪ್ರಕಾಶ್‌ ಅವರು ಕೊಳತೂರು ಮತ್ತು ಸುತ್ತಲಿನ 20 ಗ್ರಾಮಗಳನ್ನು ಸಂಪರ್ಕಿಸುವ ಬೆಂಗಳೂರು–ಕೋಲಾರ ರಾಷ್ಟ್ರೀಯ ಹೆದ್ದಾರಿ-75ರ ಸಮೀಪದಲ್ಲೇ ಜಿಲ್ಲಾ ತಾಯಿ ಮಕ್ಕಳ ಆಸ್ಪತ್ರೆಯನ್ನು 40 ಕೋಟಿರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಬೆಂಗಳೂರು–ಚೆನ್ನೈ ಕಾರಿಡಾರ್‌ ರಸ್ತೆಯಿಂದ ಕೊಳತ್ತೂರು ಗ್ರಾಮದ ಮುಖ್ಯ ದ್ವಾರಕ್ಕೆ ಲಿಂಕ್‌ ರಸ್ತೆ ಕೊಟ್ಟು ಅಡ್ಡಿಪಡಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ಮುಖ್ಯವಾಗಿ ತಾಯಿ ಮಕ್ಕಳ ಆಸ್ಪತ್ರೆಗೆ ಬರುವವರು ಬಳಸಿ ಬರಬೇಕಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸುತ್ತಿಕೊಂಡು ಆಸ್ಪತ್ರೆಗೆ ಹೋಗುವ ವೇಳೆ ಉಂಟಾಗುವ ಅನಾಹುತಗಳಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ವಿವರಿಸಿದರು.

Also Read
ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ ಕಾರಿಡಾರ್‌ನ ಕೊಳತೂರು ಜಂಕ್ಷನ್‌ ಬಳಿ ಮೇಲ್ಸೇತುವೆ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

ಈ ಸಮಸ್ಯೆಯನ್ನು ನಿವಾರಿಸಲು ಜಂಕ್ಷನ್‌ ಅಲ್ಲಿ ಮೇಲ್ಸೇತುವೆ ನಿರ್ಮಿಸಿ, ಜನ ಹಾಗೂ ವಾಹನ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಕೋರಿ ಸ್ಥಳೀಯರು ಹಲವು ಮನವಿ ಸಲ್ಲಿಸಿದ್ದಾರೆ. ಈವರೆಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಗಳು ಆ ಮನವಿ ಪರಿಗಣಿಸಿಲ್ಲ. ಆದ್ದರಿಂದ ಕೊಳತ್ತೂರು ಮತ್ತು ಸುತ್ತಲಿನ 20 ಗ್ರಾಮಗಳನ್ನು ಸಂಧಿಸುವ ರಾಷ್ಟ್ರೀಯ ಹೆದ್ದಾರಿ–75 ಹಾಗೂ 648ರ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ಸಂಪರ್ಕ ಕಲ್ಪಿಸುವ ಕೊಳತ್ತೂರು ಜಂಕ್ಷನ್‌ ಬಳಿ ಮೇಲ್ಸೇತುವೆ ನಿರ್ಮಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ಎನ್‌ಎಚ್‌ಎಐಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.

Kannada Bar & Bench
kannada.barandbench.com