[ಬಿಬಿಎಂಪಿ ಚುನಾವಣೆ] ವಾರದೊಳಗೆ ವಾರ್ಡ್‌ವಾರು ಮೀಸಲಾತಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

ಸರ್ವೋಚ್ಚ ನ್ಯಾಯಾಲಯದ ಮೇ 20ರಂದು ಮಾಡಿದ ಆದೇಶದಂತೆ ರಾಜ್ಯ ಸರ್ಕಾರವು ವಾರ್ಡ್‌ ಪುನರ್‌ ವಿಂಗಡಣೆ ಮಾಡಿ ಅಧಿಸೂಚನೆ ಪ್ರಕಟಿಸಿದೆ ಎಂದು ಪೀಠಕ್ಕೆ ತಿಳಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ.
Supreme Court and BBMP
Supreme Court and BBMP

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣೆಗೆ ಕಾಲ ಕೂಡಿಬಂದಿದ್ದು, ಇಂದಿನಿಂದ ಒಂದು ವಾರದೊಳಗೆ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳನ್ನೂ ಒಳಗೊಂಡಂತೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ, ಅಧಿಸೂಚನೆ ಹೊರಡಿಸಬೇಕು. ಆನಂತರ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್‌ ಆದೇಶಿಸಿದ್ದು, ಈ ಕುರಿತ ಅರ್ಜಿಗಳನ್ನು ಇತ್ಯರ್ಥಪಡಿಸಿದೆ.

ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ, ಡಾ. ಬಿ ಆರ್‌ ಅಂಬೇಡ್ಕರ್‌ ದಲಿತ ಸಂಘರ್ಷ ಸಮಿತಿ ಹಾಗೂ ಭಾಸ್ಕರ್‌ ಎಂಬವರು ಪ್ರತ್ಯೇಕವಾಗಿ ಸಲ್ಲಿಸಿರುವ ಮೂರು ವಿಶೇಷ ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಜೆ ಬಿ ಪರ್ದಿವಾಲಾ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

“ಕಾನೂನಿನ ನಿಬಂಧನೆಗಳು ಮತ್ತು ಸಾಂವಿಧಾನಿಕ ಮಾನದಂಡಗಳ ಪಾಲನೆಯ ಭಾಗವಾಗಿ ಚುನಾವಣಾ ಆಯೋಗವು ನಿರ್ದಿಷ್ಟ ಕಾಲಮಿತಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ಅನುವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ತಕ್ಷಣ ಹಿಂದುಳಿದ ವರ್ಗ ಸೇರಿದಂತೆ ವಾರ್ಡ್‌ವಾರು ಮೀಸಲಾತಿ ಪಟ್ಟಿ ಪ್ರಕಟಿಸಬೇಕು. ವಾರ್ಡ್‌ವಾರು ಮೀಸಲಾತಿ ಪ್ರಕಟಿಸುವುದನ್ನು ರಾಜ್ಯ ಸರ್ಕಾರ ತಡ ಮಾಡಿದರೆ ಪ್ರತಿವಾದಿಗಳು ಅದನ್ನು ಪ್ರಶ್ನಿಸುವ ಸ್ವಾತಂತ್ರ್ಯ ಹೊಂದಿರುತ್ತಾರೆ” ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು “ಬಿಬಿಎಂಪಿ ವ್ಯಾಪ್ತಿಯಲ್ಲಿನ ವಾರ್ಡ್‌ಗಳ ಪುನರ್‌ ವಿಂಗಡಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನೀಡಿದ್ದ ನಿರ್ದೇಶನವನ್ನು ಪಾಲನೆ ಮಾಡಲಾಗಿದೆ. ಜೂನ್‌ನಲ್ಲಿ ವಾರ್ಡ್‌ಗಳ ಪುನರ್‌ ವಿಂಗಡಣೆ ಪೂರ್ಣಗೊಂಡಿದ್ದು, ಜುಲೈ 14ರಂದು ಅಧಿಸೂಚನೆ ಪ್ರಕಟಿಸಲಾಗಿದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಸಮಿತಿಯು ಜುಲೈ 21ರಂದು ವರದಿ ಸಲ್ಲಿಸಿದೆ” ಎಂದರು.

ರಾಜ್ಯ ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಅವರು “ಎಂಟು ವಾರಗಳಲ್ಲಿ ವಾರ್ಡ್‌ವಾರು ಪುನರ್‌ ವಿಂಗಡಣೆ ಪಟ್ಟಿ ಅಧಿಸೂಚನೆಯ ಜೊತೆಗೆ ಹಿಂದುಳಿದ ವರ್ಗಗಳು ಸೇರಿದಂತೆ ವಾರ್ಡ್‌ವಾರು ಮೀಸಲಾತಿ ಪಟ್ಟಿ ನೀಡಲು ಕಳೆದ ವಿಚಾರಣೆಯಲ್ಲಿ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಇನ್ನೂ ಆಯೋಗಕ್ಕೆ ವಾರ್ಡ್‌ವಾರು ಮೀಸಲಾತಿ ಪಟ್ಟಿ ನೀಡಲಾಗಿಲ್ಲ. ಅದು ತಲುಪಿದ ತಕ್ಷಣ ಆಯೋಗವು ಚುನಾವಣಾ ಪ್ರಕ್ರಿಯೆ ಆರಂಭಿಸಲಿದೆ” ಎಂದು ಪೀಠಕ್ಕೆ ತಿಳಿಸಿದರು.

ಮೇ 20ರಂದು ನಡೆದಿದ್ದ ವಿಚಾರಣೆಯ ಸಂದರ್ಭದಲ್ಲಿ ಪೀಠವು “ಬಿಬಿಎಂಪಿ ವ್ಯಾಪ್ತಿಯಲ್ಲಿನ ವಾರ್ಡ್‌ಗಳ ಪುನರ್‌ ವಿಂಗಡಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಇಂದಿನಿಂದ ಎಂಟು ವಾರಗಳ ಕಾಲಾವಕಾಶ ನೀಡಲಾಗಿದೆ. ವಾರ್ಡ್‌ ಪುನರ್‌ ವಿಂಗಡಣೆ ಅಥವಾ ಶೇಕಡವಾರು ಮೀಸಲಾತಿ ಅಧಿಸೂಚನೆ ಪ್ರಕಟಣೆಯನ್ನು ಇಂದಿನಿಂದ ಎಂಟು ವಾರಗಳಲ್ಲಿ ಪ್ರಕಟಿಸಬೇಕು. ಆನಂತರ ಒಂದು ವಾರದ ಬಳಿಕ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನೂತನ ಚುನಾಯಿತ ಕೌನ್ಸಿಲ್‌ ಆಯ್ಕೆ ಪ್ರಕ್ರಿಯೆ ಆರಂಭಿಸಬೇಕು. ಆಯೋಗವು ಚುನಾವಣೆ ಪ್ರಕ್ರಿಯೆ ಆರಂಭಿಸಿದ ಬಳಿಕ ಕಾನೂನಿನ ಪ್ರಕಾರ ಅದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ” ಎಂದು ಆದೇಶದಲ್ಲಿ ದಾಖಲಿಸಿತ್ತು.

Also Read
ಬಿಬಿಎಂಪಿ ಚುನಾವಣೆ: ಎರಡು ತಿಂಗಳಲ್ಲಿ ವಾರ್ಡ್‌ ಪುನರ್‌ ವಿಂಗಡಣೆ, ಮೀಸಲಾತಿ ಅಧಿಸೂಚನೆ ಹೊರಡಿಸಲು ಸುಪ್ರೀಂ ಗಡುವು

ಮುಂದುವರೆದು, “ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಬಿಬಿಎಂಪಿ ಕಾಯಿದೆ 2021ರ ಜನವರಿ 11ರಂದು ಜಾರಿಯಾಗಿದೆ. ಇದರ ಅನ್ವಯ ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್‌ಗಳ ಪುನರ್‌ ವಿಂಗಡಣೆಗಾಗಿ ರಾಜ್ಯ ಸರ್ಕಾರವು ಆಯೋಗವನ್ನು ರಚಿಸಿದೆ. ಹಿಂದುಳಿದ ವರ್ಗಗಳನ್ನು ಒಳಗೊಂಡಂತೆ ಮೀಸಲಾತಿ ಕಲ್ಪಿಸಲು ಪ್ರತ್ಯೇಕವಾದ ಆಯೋಗವಿದೆ. ವಾರ್ಡ್‌ಗಳ ಪುನರ್‌ ವಿಂಗಡಣೆ ಪ್ರಕ್ರಿಯೆಯು ಅಂತಿಮ ಹಂತದಲ್ಲಿದ್ದು, ಔಪಚಾರಿಕ ಅಧಿಸೂಚನೆಯನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರ ಹೊರಡಿಸಲಿದೆ” ಎಂದು ಪೀಠ ಆದೇಶದಲ್ಲಿ ಉಲ್ಲೇಖಿಸಿತ್ತು.

“ಮೀಸಲಾತಿ ನಿಗದಿಪಡಿಸಲು ನೇಮಕ ಮಾಡಿರುವ ಆಯೋಗವು ಇದೇ ಸಂದರ್ಭದಲ್ಲಿ ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಅಧಿಸೂಚನೆ ಹೊರಡಿಸುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂಬ ಖಾತರಿಯನ್ನು ರಾಜ್ಯ ಸರ್ಕಾರ ನೀಡಿದ್ದು, ಅದರ ಅಧಿಸೂಚನೆಯನ್ನೂ ಹೊರಡಿಸಲಾಗುವುದು ಎಂಬ ರಾಜ್ಯ ಸರ್ಕಾರದ ಭರವಸೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಅದನ್ನು ಒಪ್ಪಿಕೊಳ್ಳಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿತ್ತು.

Related Stories

No stories found.
Kannada Bar & Bench
kannada.barandbench.com