

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಕಲಿ ಸ್ಟಿಂಗ್ ವಿಡಿಯೊ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ, ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಪಾದಕ ರಾಕೇಶ್ ಶೆಟ್ಟಿ ಸೇರಿದಂತೆ ಏಳು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಬೆಂಗಳೂರಿನ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಶಂಕರಪ್ಪ ನಿಂಬಣ್ಣ ಕಳಕಣಿ ಅವರು ಈ ಆದೇಶ ಹೊರಡಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರಾದ ಪ್ರಜ್ವಲ್ ಪ್ರಸಾದ್, ಚಂದನ್ ಎಚ್‌ಎಸ್ ಮತ್ತು ಮೋಹನ್ ಗೌಡ ಆರ್, ಪವರ್ ಟಿವಿ ಕ್ಯಾಮೆರಾಮನ್ ಕೆ ವಿ ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರ ಅರ್ಜಿಗಳನ್ನೂ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದಲ್ಲಿ ಈ ಹಿಂದೆ ಇದೇ ಆರೋಪಿಗಳು ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.
ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 61 (ಅಪರಾಧ ಸಂಚು), 3(5) (ಸಾಮೂಹಿಕ ಹೊಣೆಗಾರಿಕೆ), 308(6) (ಸುಲಿಗೆ), 336(4) ಮತ್ತು 340(2) (ನಕಲಿ ದಾಖಲೆ ಸೃಷ್ಟಿ ಮತ್ತು ಬಳಕೆ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66ಸಿ (ಗುರುತು ಕಳವು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಅಕ್ಟೋಬರ್ 6ರಂದು ಸಿದ್ದರಾಮಯ್ಯ ಅವರು ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಅಪರಿಚಿತ ವ್ಯಕ್ತಿಗಳು ತಮ್ಮ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಒಳಗೊಂಡ ನಕಲಿ ವಿಡಿಯೊವನ್ನು ಪ್ರಸಾರ ಮಾಡಿದ್ದು, ಬ್ಲ್ಯಾಕ್‌ಮೇಲ್ ಮಾಡುವ ಹಾಗೂ ಮಾನಹಾನಿ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದರು.
ಸೆಪ್ಟೆಂಬರ್ 26ರಂದು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದ ವಿಡಿಯೋದಲ್ಲಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಮತ್ತು ಕೃಪಾ ಆಳ್ವ ಅವರು, 2011ರಲ್ಲಿ ಸಿದ್ದರಾಮಯ್ಯ ಅವರಿಂದ ತಾನು ಸಂತ್ರಸ್ತೆಯಾಗಿದ್ದೇನೆ ಎಂದು ಹೇಳಿಕೊಂಡ ಮಹಿಳೆಯೊಂದಿಗೆ ಮಾತನಾಡುತ್ತಿರುವ ದೃಶ್ಯಗಳಿದ್ದವು ಎಂದು ಹೇಳಲಾಗಿತ್ತು.
ವಿಡಿಯೋ ಪ್ರಸಾರವಾದ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಕೃಪಾ ಆಳ್ವ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿತ್ತು.
ಇದೇ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 13ರಂದು ಬೆಂಗಳೂರಿನ ನ್ಯಾಯಾಲಯವು ಸಿದ್ದರಾಮಯ್ಯ ಅವರನ್ನು ಹನಿಟ್ರ್ಯಾಪ್ ವಿವಾದಕ್ಕೆ ಸಂಪರ್ಕಿಸುವ ವಿಡಿಯೋಗಳನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ 42 ಮಾಧ್ಯಮ ಸಂಸ್ಥೆಗಳು, ಡಿಜಿಟಲ್ ವೇದಿಕೆಗಳು ಸೇರಿದಂತೆ ಇತರ ಪ್ರತಿವಾದಿಗಳಿಗೆ ಏಕಪಕ್ಷೀಯ ಮಧ್ಯಂತರ ನಿರ್ಬಂಧ ವಿಧಿಸಿತ್ತು.
ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳಲ್ಲಿ ಆರೋಪಿಗಳು, ಎಫ್‌ಐಆರ್‌ನಲ್ಲಿ ತಮ್ಮ ಹೆಸರುಗಳಿಲ್ಲ ಮತ್ತು ತನಿಖೆಯ ಸಂದರ್ಭದಲ್ಲಿ ತಮ್ಮನ್ನು ಸುಳ್ಳು ಆರೋಪದಲ್ಲಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದರು.
ಅಲ್ಲದೆ, 'ಕರ್ನಾಟಕ ಹನಿ ಟ್ರ್ಯಾಪ್' ಎಂಬ ಯೂಟ್ಯೂಬ್ ಚಾನೆಲ್‌ನ ಮಾಲೀಕರು, ಸೃಷ್ಟಿಕರ್ತರು ಅಥವಾ ನಿರ್ವಾಹಕರು ತಾವಲ್ಲ ಎಂದೂ ಅವರು ಪ್ರತಿಪಾದಿಸಿದ್ದರು.
ಆದರೆ, ನ್ಯಾಯಾಲಯ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.
ಅರ್ಜಿದಾರರ ಪರ ವಕೀಲರಾದ ರಾಘವೇಂದ್ರ ಶೆಣೈ ಎಂ, ಸ್ವರೂಪ್ ಆನಂದ್ ಆರ್, ಮಾಧವ್ ಬಿ ಕಶ್ಯಪ್, ಸುಯೋಗ್ ಹೇರಳೆ ಇ, ನರೇಶ್ ಸಂತೋಷ್ ಕೆಎಸ್ ಮತ್ತು ಸಚಿನ್ ವಾದ ಮಂಡಿಸಿದರು.
ರಾಜ್ಯದ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ ಹಾಜರಿದ್ದರು.