ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದ ಪ್ರತಿಬಂಧಕಾದೇಶ

ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳಲ್ಲಿ ವರದಿಯಾಗಿರುವ ಅವಹೇಳನಕಾರಿ ವರದಿಗಳನ್ನು ತೆಗೆದು ಹಾಕುವಂತೆ ನ್ಯಾಯಾಲಯವು ಆದೇಶದಲ್ಲಿ ನಿರ್ದೇಶಿಸಿದೆ.
D Veerendra Heggade
D Veerendra Heggade
Published on

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಈಚೆಗೆ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಅಲ್ಲದೇ, 61 ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

ಶೀನಪ್ಪ ಮತ್ತು ಇತರರು ಸಲ್ಲಿಸಿದ್ದ ಅಸಲು ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ 11ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಡಿ ಪಿ ಕುಮಾರಸ್ವಾಮಿ ಅವರು ಆದೇಶ ಮಾಡಿದ್ದಾರೆ.

ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳಲ್ಲಿ ವರದಿಯಾಗಿರುವ ಅವಹೇಳನಕಾರಿ ವರದಿಗಳನ್ನು ತೆಗೆದು ಹಾಕುವಂತೆ ನ್ಯಾಯಾಲಯವು ಆದೇಶದಲ್ಲಿ ನಿರ್ದೇಶಿಸಿದೆ.

“ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ನಡೆಸುತ್ತಿರುವ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಯೂಟ್ಯೂಬ್‌, ವಿದ್ಯುನ್ಮಾನ ಮಾಧ್ಯಮ ಮತ್ತು ಇತರೆ ಯಾವುದೇ ಮಾಧ್ಯಮದಲ್ಲಿ ಯುವತಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಮಾಡಬಾರದು” ಎಂದು ನ್ಯಾಯಾಲಯವು ಪ್ರತಿಬಂಧಕಾದೇಶದಲ್ಲಿ ಹೇಳಿದೆ.

2012ರಲ್ಲಿ ಬೆಳ್ತಂಗಡಿ ತಾಲ್ಲೂಕು ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ ನಡೆದಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರಾದ ಮಹೇಶ್‌ ಶೆಟ್ಟಿ ತಿಮರೋಡಿ, ಜಗದೀಶ್‌, ಪ್ರಭಾ ಬೆಳವಂಗಲ, ಸೋಮನಾಥ್‌ ನಾಯಕ್‌, ಬಿ ಎಂ ಭಟ್‌, ವಿಠ್ಠಲ ಗೌಡ ಮತ್ತಿತರರು ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬಸ್ಥರ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ಕೆಲವು ಮಾಧ್ಯಮಗಳು ಧರ್ಮಸ್ಥಳ ಮತ್ತು ಹೆಗ್ಗಡೆ ಅವರ ಕುಟುಂಬಸ್ಥರ ವಿರುದ್ಧ ಅವಹೇಳನಕಾರಿ ವರದಿ ಮಾಡುತ್ತಿವೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

Kannada Bar & Bench
kannada.barandbench.com