ಬೆಂಗಳೂರು ಕಂಬಳ ಅ.26ಕ್ಕೆ ನಡೆಯಲ್ಲ, ಸ್ಪರ್ಧೆಗೆ ಸರ್ಕಾರದ ಅನುಮತಿ ಕೋರಿಲ್ಲ: ಹೈಕೋರ್ಟ್‌ಗೆ ಕಂಬಳ ಸಮಿತಿ ವಿವರಣೆ

ಇಲ್ಲಿ ಪ್ರಾಣಿಗಳಿಗೆ ಹಿಂಸೆಯಾಗುತ್ತಿದೆಯೇ ಎಂಬ ಪ್ರಶ್ನೆ ಇದೆ. ಕುದುರೆ ರೇಸ್‌ ನಡೆದಾಗ ಕುದುರೆಗಳನ್ನು ಬೇರೆ ದೇಶಗಳಿಂದ ಆಮದು/ರಫ್ತು ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೂ ಅವುಗಳನ್ನು ಸಾಗಿಸಲಾಗುತ್ತದೆ ಎಂದ ಎಜಿ.
Kambala & Karnataka HC
Kambala & Karnataka HC
Published on

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸುತ್ತಿಲ್ಲ ಮತ್ತು ಬೇರೆಲ್ಲೂ ಕಂಬಳ ನಡೆಸುವ ಸಂಬಂಧ ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿಲ್ಲ ಎಂಬ ಬೆಂಗಳೂರು ಕಂಬಳ ಸಮಿತಿಯ ವಾದವನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್‌ ಅರ್ಜಿಯ ವಿಚಾರಣೆ ಮುಂದೂಡಿತು.

ಬೆಂಗಳೂರು ಕಂಬಳ ಸಮಿತಿಗೆ ಸ್ಪರ್ಧೆ ಆಯೋಜಿಸಲು ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ನಡೆಸಿತು.

ಬೆಂಗಳೂರು ಕಂಬಳ ಸಮಿತಿ ಪ್ರತಿನಿಧಿಸಿದ್ದ ವಕೀಲ ವಿನೋದ್‌ ಕುಮಾರ್‌ ಅವರು “ಅಕ್ಟೋಬರ್‌ 26ರಂದು ಕಂಬಳ ಸ್ಪರ್ಧೆ ಆಯೋಜಿಸುತ್ತಿಲ್ಲ” ಎಂದು ತಿಳಿಸಿದರು.

ಆಗ ಪೆಟಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು “ಕಂಬಳ ಸ್ಪರ್ಧೆ ನಡೆಸುವಾಗ ಅನುಮತಿ ನೀಡಲಾಗುತ್ತಿದೆ ಎಂಬ ವಿಚಾರವನ್ನು ನಮಗೆ ತಿಳಿಸಬೇಕು. ಆಗ ನಾವು ನ್ಯಾಯಾಲಯದ ಮುಂದೆ ಬರುತ್ತೇವೆ. ನವೆಂಬರ್‌ 9ರಂದು ದಕ್ಷಿಣ ಕನ್ನಡ ಪಿಲಿಕುಳದ ಪ್ರಾಣಿ ಸಂಗ್ರಹಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಸ್ಪರ್ಧೆಯ ಸಂದರ್ಭದಲ್ಲಿನ ಕೂಗಾಟದಿಂದ ಪ್ರಾಣಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಹೆಚ್ಚುವರಿ ಅಫಿಡವಿಟ್‌ ಸಲ್ಲಿಸಲಾಗಿದೆ” ಎಂದರು.

Also Read
ಬೆಂಗಳೂರು ಕಂಬಳ ಸ್ಪರ್ಧೆಗೆ ಆಕ್ಷೇಪ: ಸರ್ಕಾರದ ಕೋರಿಕೆಯಂತೆ ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಕಳೆದ ವರ್ಷ ಬೆಂಗಳೂರು ಕಂಬಳಕ್ಕೆ ಕಾನೂನು ಪ್ರಕಾರ ಅನುಮತಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ಪೆಟಾ ಆಕ್ಷೇಪ ಇರುವುದು ಪ್ರಾಣಿಗಳಿಗೆ ಕ್ರೌರ್ಯ ಉಂಟು ಮಾಡಲಾಗುತ್ತಿದೆ ಎಂಬುದಾಗಿದೆ. ಈಗ ಕಂಬಳವನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾತ್ರ ನಡೆಸಬೇಕೆ ಎಂಬ ಪ್ರಶ್ನೆ ನ್ಯಾಯಾಲಯದ ಮುಂದಿದೆ. ಕಂಬಳ ಸ್ಪರ್ಧೆಯು ಕರ್ನಾಟಕದ ಸಂಸ್ಕೃತಿಗೆ ಸಂಬಂಧಿಸಿದ್ದು, ಇದನ್ನು ಕರ್ನಾಟಕ ಮಾತ್ರವಲ್ಲದೇ ದೇಶಾದ್ಯಂತ ಕೊಂಡೊಯ್ಯುವ ಸಂದರ್ಭ ಬಂದಿದೆ. ಇಲ್ಲಿ ಪ್ರಾಣಿಗಳಿಗೆ ಹಿಂಸೆಯಾಗುತ್ತಿದೆಯೇ ಎಂಬ ಪ್ರಶ್ನೆ ಇದೆ. ಕುದುರೆ ರೇಸ್‌ ನಡೆದಾಗ ಕುದುರೆಗಳನ್ನು ಬೇರೆ ದೇಶಗಳಿಂದ ಆಮದು/ರಫ್ತು ಮಾಡಲಾಗುತ್ತದೆ. ಬೇರೆ ರಾಜ್ಯಗಳಿಗೂ ಅವುಗಳನ್ನು ಸಾಗಿಸಲಾಗುತ್ತದೆ. ಯಾವುದೇ ನಿರ್ಧಾರ ಕೈಗೊಂಡರೂ ಪೀಠಕ್ಕೆ ತಿಳಿಸಲಾಗುವುದು” ಎಂದರು.

ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನವೆಂಬರ್‌ 5ಕ್ಕೆ ಮುಂದೂಡಿತು. 

Kannada Bar & Bench
kannada.barandbench.com