ಮತದಾರರ ಮಾಹಿತಿ ಕಳವು ಪ್ರಕರಣ: ಚಿಲುಮೆ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಕೆಎಸ್‌ಎಲ್‌ಎಸ್‌ಎಗೆ ಮನವಿ ಸಲ್ಲಿಕೆ

ಆಡಳಿತಾರೂಢ ಸರ್ಕಾರದಿಂದ ಸತ್ಯಾಸತ್ಯತೆ ಹೊರಬರುವ ನಂಬಿಕೆಯಿಲ್ಲ. ಆದ್ದರಿಂದ, ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯಮೂರ್ತಿಗಳ ಸುಪರ್ದಿಯಲ್ಲಿಯೇ ಈ ತನಿಖೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖ.
KSLSA, Justice B Veerappa
KSLSA, Justice B Veerappa
Published on

ಬೆಂಗಳೂರು ನಗರದ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಖಾಸಗಿ ಮಾಹಿತಿ ಕಳವು ಮಾಡಿದ ಆರೋಪ ಎದುರಿಸುತ್ತಿರುವ ಚಿಲುಮೆ ಸಂಸ್ಥೆ ಹಾಗೂ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹಿರಿಯ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ.

ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಈ ಸಂಬಂಧ ಪತ್ರ ಮನವಿ ಸಲ್ಲಿಸಿದ್ದು, ಮತದಾರರ ಖಾಸಗಿ ಮಾಹಿತಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಎರಡು ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳಲ್ಲಿ ಆಡಳಿತಾರೂಢ ಸರ್ಕಾರದಿಂದ ಸತ್ಯಾಸತ್ಯತೆ ಹೊರಬರುವ ನಂಬಿಕೆಯಿಲ್ಲ. ಆದ್ದರಿಂದ, ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯಮೂರ್ತಿಗಳ ಸುಪರ್ದಿಯಲ್ಲಿಯೇ ಈ ತನಿಖೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಕೋರಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯೇ ಬುಡಮೇಲು: ಮತದಾರರ ಪಟ್ಟಿ ಪರಿಷ್ಕರಣೆ ಜವಾಬ್ದಾರಿಯನ್ನು ಸರ್ಕಾರ ಹಾಗೂ ಬಿಬಿಎಂಪಿ ಅಧಿಕಾರಿ ವರ್ಗದವರು ಚಿಲುಮೆ ಹೆಸರಿನ ಖಾಸಗಿ ಸಂಸ್ಥೆಗೆ ನೀಡಿದ್ದಾರೆ. ಇದು ಚುನಾವಣಾ ಆಯೋಗದ ವ್ಯಾಪ್ತಿಯೊಳಗೆ ಅಕ್ರಮವಾಗಿ ಪ್ರವೇಶಿಸಿರುವ ಮತ್ತು ನಾಗರಿಕರ ಗೋಪ್ಯ ಮಾಹಿತಿಗಳನ್ನು ಕಲೆ ಹಾಕಿರುವ ಅಪರಾಧಿಕ ಕೃತ್ಯವಾಗಿರುತ್ತದೆ. ಮತದಾರರ ಪಟ್ಟಿ ಪ್ರಜಾಪ್ರಭುತ್ವದ ತಾಯಿಬೇರು. ಆದರೆ, ರಾಜಕಾರಣಿಗಳು ಈ ಬೇರನ್ನೇ ಕತ್ತರಿಸಿ ವಾಮ ಮಾರ್ಗಗಳ ಮೂಲಕ ಆಡಳಿತಾರೂಢ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಸಲು ಯತ್ನಿಸಿದ್ದಾರೆ. ಇದು ಚುನಾವಣಾ ಪ್ರಕ್ರಿಯೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಯತ್ನವಾಗಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಪಿಐಎಲ್ ಪರಿಗಣಿಸಲು ಮನವಿ: ಈ ಪತ್ರ ಮನವಿಯನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಚಿಲುಮೆ ಸಂಸ್ಥೆ ಮತ್ತದರ ಹಿಂದಿರುವ ಅಧಿಕಾರಿಗಳು, ರಾಜಕಾರಣಿಗಳು, ಸಚಿವರು ಸೇರಿ ಯಾರೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕಾನೂನಿನ ಚೌಕಟ್ಟಿನಡಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪತ್ರದಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com