

ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಮತ್ತೆ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಜಿ ಬಸವರಾಜ ಅವರ ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಲಿದೆ.
ಇತ್ತೀಚೆಗೆ ಎಲ್ಲಾ ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಅನ್ವಯಿಸಿದ್ದ ಆದೇಶವನ್ನು ವಜಾಗೊಳಿಸಿದ್ದ ಹೈಕೋರ್ಟ್, ನಿರೀಕ್ಷಣಾ ಜಾಮೀನು ಕೋರಿದ್ದ ಬೈರತಿ ಬಸವರಾಜ್ ಅವರ ಮಧ್ಯಂತರ ಅರ್ಜಿಯನ್ನೂ ವಜಾಗೊಳಿಸಿತ್ತು. ಪ್ರಕರಣದಲ್ಲಿ ಕೋಕಾ ಅನ್ವಯಿಸಿದರೆ ಆರೋಪಿಗಳಿಗೆ ಜಾಮೀನು ನೀಡಲು ವಿಚಾರಣಾಧೀನ ನ್ಯಾಯಾಲಯಗಳಿಗೆ ಅವಕಾಶವಿಲ್ಲ. ಹೀಗಾಗಿ, ಬಸವರಾಜ್ ಅವರು ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ, ನಿರೀಕ್ಷಣಾ ಜಾಮೀನು ಕೋರಿದ್ದರು.
ಹೈಕೋರ್ಟ್ ಕೋಕಾ ಕಾಯಿದೆ ಅನ್ವಯಿಸಿರುವ ಆದೇಶವನ್ನು ವಜಾಗೊಳಿಸಿದ್ದರೂ, ನಿರೀಕ್ಷಣಾ ಜಾಮೀನನ್ನು ಬೈರತಿ ಬಸವರಾಜ್‌ಗೆ ನಿರಾಕರಿಸಿತ್ತು. ಹೀಗಾಗಿ, ಬೈರತಿ ಬಸವರಾಜ್ ವಿಚಾರಣಾಧೀನ ನ್ಯಾಯಾಲಯದಲ್ಲಿ ಮೊದಲಿಗೆ ನಿರೀಕ್ಷಣಾ ಜಾಮೀನು ಕೋರಿದ್ದರು. ಇದು ವಜಾಗೊಂಡಿರುವುದರಿಂದ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ವಿಚಾರಣಾಧೀನ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನಿಗೆ ಪ್ರಾಸಿಕ್ಯೂಷನ್ ಆಕ್ಷೇಪಿಸಿತ್ತು. 18 ಆರೋಪಿಗಳ ವಿರುದ್ಧ 4,236 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಬೈರತಿ ಮತ್ತು 20ನೇ ಆರೋಪಿಯ ವಿರುದ್ಧ ತನಿಖೆ ಬಾಕಿ ಇದೆ ಎಂದು ತಿಳಿಸಿತ್ತು.
ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇಲೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.