ಬಿಟ್‌ ಕಾಯಿನ್‌ ಹಗರಣ: ಶ್ರೀಕಿ ಸೇರಿ ನಾಲ್ವರಿಗೆ ಅಧೀನ ನ್ಯಾಯಾಲಯಕ್ಕೆ ಹಾಜರಾತಿಯಿಂದ ವಿನಾಯಿತಿ ನೀಡಿದ ಹೈಕೋರ್ಟ್‌

“ಅರ್ಜಿದಾರರು ಮುಂದಿನ ವಿಚಾರಣೆವರೆಗೆ ವಿಚಾರಣಾಧೀನ ನ್ಯಾಯಾಲಯದ ಮುಂದೆ ವೈಯಕ್ತಿಕವಾಗಿ ಹಾಜರಾಗಬೇಕಿಲ್ಲ” ಎಂದು ನ್ಯಾಯಾಲಯವು ತಾತ್ಕಾಲಿಕ ಆದೇಶ ಮಾಡಿ ವಿಚಾರಣೆಯನ್ನು ಅಕ್ಟೋಬರ್‌ 3ಕ್ಕೆ ಮುಂದೂಡಿತು.
Accused Sri Krishna alias Shriki
Accused Sri Krishna alias Shriki

ಬಿಟ್‌ ಕಾಯಿನ್‌ ಹಗರಣದಲ್ಲಿ ಆರೋಪಿಗಳಾಗಿರುವ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಹಾಗೂ ಮತ್ತಿತರರು ವಿಚಾರಣಾಧೀನ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿ ಕರ್ನಾಟಕ ಹೈಕೋರ್ಟ್‌ ಮಂಗಳವಾರ ತಾತ್ಕಾಲಿಕ ಆದೇಶ ಮಾಡಿದೆೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ಕಾನೂನು ಪ್ರಕ್ರಿಯೆ ವಜಾ ಮಾಡುವಂತೆ ಕೋರಿ ಶ್ರೀಕೃಷ್ಣ ರಮೇಶ್‌ ಅಲಿಯಾಸ್‌ ಶ್ರೀಕಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರು ಮುಂದಿನ (ಹೈಕೋರ್ಟ್‌) ವಿಚಾರಣೆವರೆಗೆ ವಿಚಾರಣಾಧೀನ ನ್ಯಾಯಾಲಯದ ಮುಂದೆ ವೈಯಕ್ತಿಕವಾಗಿ ಹಾಜರಾಗಬೇಕಿಲ್ಲ ಎಂದು ನ್ಯಾಯಾಲಯವು ತಾತ್ಕಾಲಿಕ ಆದೇಶ ಮಾಡಿ ವಿಚಾರಣೆಯನ್ನು ಅಕ್ಟೋಬರ್‌ 3ಕ್ಕೆ ಮುಂದೂಡಿತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಂದೇಶ್‌ ಚೌಟ ಮತ್ತು ಕಿರಣ್‌ ಜವಳಿ ಅವರು “ಸರ್ಕಾರದ ಅಧಿಸೂಚನೆಯ ಪ್ರಕಾರ ತನಿಖೆಯನ್ನು ಡಿವೈಎಸ್‌ಪಿ ಅಥವಾ ಪೊಲೀಸ್‌ ವರಿಷ್ಠಾಧಿಕಾರಿ ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಇನ್‌ಸ್ಪೆಕ್ಟರ್‌ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಇದು ನ್ಯಾಯಸಮ್ಮತವಲ್ಲ” ಎಂದು ವಾದಿಸಿದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್‌ ಅವರು “ಪ್ರಕರಣದ ತನಿಖೆಗೆ ತಡೆ ನೀಡಬಾರದು. ಹಿಂದಿನ ತನಿಖೆಯಲ್ಲಿ ಲೋಪ ಕಂಡುಬಂದಿರುವುದರಿಂದ ಹೊಸದಾಗಿ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ. ಅಧಿಕಾರಿಗಳ ಪಾತ್ರದ ವಿಚಾರವು ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖವಾಗಿದೆ” ಎಂದು ಪೀಠಕ್ಕೆ ತಿಳಿಸಿದರು.

ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಎಸ್‌ಪಿಪಿ ಪ್ರಸನ್ನ ಕುಮಾರ್‌ ಅವರು “ತನಿಖಾಧಿಕಾರಿಗಳ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದ್ದು, ಇದರಲ್ಲಿ ಯಾವುದೇ ವ್ಯಕ್ತಿಯ ಹೆಸರು ಇಲ್ಲ. ಶ್ರೀಕಿಯ ಲ್ಯಾಪ್‌ಟಾಪ್‌ ಅನ್ನು ಹಲವು ಬಾರಿ ತಿರುಚಲಾಗಿದೆ ಎಂದು ಎಫ್‌ಎಸ್‌ಎಲ್‌ ವರದಿಯಲ್ಲಿ ಹೇಳಲಾಗಿದೆ. ಶ್ರೀಕಿಯು ಸಿಐಡಿ ಕಸ್ಟಡಿಯಲ್ಲಿದ್ದಾಗ ಆತನ ಲ್ಯಾಪ್‌ಟಾಪ್‌ ಅನ್ನು ಮುಚ್ಚಿದ ರೀತಿಯಲ್ಲಿ (ಸೀಲ್ಡ್‌ ಕಂಡೀಷನ್‌) ಮೂರು ದಿನ ಸಾವಿರಾರು ಆಪರೇಷನ್‌ ಮಾಡಲಾಗಿದೆ” ಎಂದು ಪೀಠಕ್ಕೆ ವಿವರಿಸಿದರು.

Also Read
ಬಿಟ್‌ ಕಾಯಿನ್‌ ಹಗರಣ: ಎಫ್‌ಐಆರ್‌ ರದ್ದತಿ ಕೋರಿ ಶ್ರೀಕಿ, ಇತರೆ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಮುಂದೂಡಿಕೆ

ಶ್ರೀಧರ್‌ ಪೂಜಾರ್‌ ವಿರುದ್ಧ ಬಲವಂತದ ಕ್ರಮ ಇಲ್ಲ: ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಸಾಕ್ಷಿ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ವಿರುದ್ಧ ಹೊಸದಾಗಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ತಮ್ಮನ್ನು ಬಂಧಿಸುವ ಸಾಧ್ಯತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಡಿವೈಎಸ್‌ಪಿ ಶ್ರೀಧರ್‌ ಕೆ. ಪೂಜಾರ್‌ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಸಿಐಡಿಗೆ ನಿರ್ದೇಶಿಸಿದೆ.

ಇದನ್ನು ಆಲಿಸಿದ ಪೀಠವು ಅರ್ಜಿದಾರರ ವಿರುದ್ಧ ಮೇಲ್ನೋಟಕ್ಕೆ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಆದೇಶಿಸಿ, ವಿಚಾರಣೆ ಮುಂದೂಡಿದೆ.

Related Stories

No stories found.
Kannada Bar & Bench
kannada.barandbench.com