ಶಾಸಕ ರಮೇಶ್‌ ಜಾರಕಿಹೊಳಿಯಿಂದ ಬ್ಯಾಂಕ್‌ಗೆ ₹439 ಕೋಟಿ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ವಾದ ಆಲಿಸಿದ ಪೀಠವು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.
Ramesh Jarakiholi and Karnataka HC
Ramesh Jarakiholi and Karnataka HC

ತಮ್ಮ ವಿರುದ್ಧ ಎದುರಾಗಿರುವ ಬ್ಯಾಂಕ್‌ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್‌ಐಆರ್‌ ರದ್ದುಗೊಳಿಸಲು ಕೋರಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಬರೋಬ್ಬರಿ ₹439 ಕೋಟಿ ರೂಪಾಯಿ ಪಾವತಿಸದೇ ವಂಚಿಸಿರುವ ಆರೋಪವನ್ನು ರಮೇಶ್‌ ಜಾರಕಿಹೊಳಿ ಎದುರಿಸುತ್ತಿದ್ದಾರೆ.

ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್‌ ಜಾರಕಿಹೊಳಿ ಹಾಗೂ ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್‌ ಪಾಟೀಲ್‌ ಮತ್ತು ಶಂಕರ್‌ ಪವಾಡೆ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಾದ ಆಲಿಸಿದ ಪೀಠವು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್‌ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಅರ್ಜಿದಾರ/ಆರೋಪಿಗಳು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ ಮತ್ತು ಅದರ ಸಮೂಹದ ಬ್ಯಾಂಕ್‌ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ 12.07.2013 ರಿಂದ 31.03.2017ರ ಅವಧಿಯಲ್ಲಿ ₹232.88 ಕೋಟಿ ಸಾಲ ಪಡೆದಿದ್ದರು. ಇದು ₹439.7 ಕೋಟಿಗೆ ಏರಿಕೆಯಾಗಿದ್ದರೂ ಅದನ್ನು ಪಾವತಿಸಿರಲಿಲ್ಲ.

Also Read
ಬ್ಯಾಂಕ್‌ಗೆ ₹439 ಕೋಟಿ ವಂಚನೆ: ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಾಸಕ ರಮೇಶ್‌ ಜಾರಕಿಹೊಳಿ

ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್‌ ಕಂಪೆನಿಯಲ್ಲಿ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್‌ ಮತ್ತು ಶಂಕರ್‌ ಅವರು ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಆರೋಪಿಗಳು/ಅರ್ಜಿದಾರರು ಕಂಪೆನಿಯಲ್ಲಿನ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದು, ಸಂಬಂಧಪಡದ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ.

ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ನೀಡಿದ ದೂರಿನ ಅನ್ವಯ ವಿ ವಿ ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 406, 420 & 34ರ ಅಡಿ ಪ್ರಕರಣ ದಾಖಲಾಗಿದೆ.

Related Stories

No stories found.
Kannada Bar & Bench
kannada.barandbench.com