ಮಾಡಾಳು ಲಂಚ ಪ್ರಕರಣ: ಎಸ್‌ಐಟಿ ಅಥವಾ ಸಿಬಿಐ ತನಿಖೆ ಕೋರಿದ್ದ ಶ್ರೀರಾಮ ಸೇನೆ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್‌

ಈ ಹಿಂದೆ ಸಕ್ಷಮ ಪ್ರಾಧಿಕಾರಕ್ಕೆಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಎಂಟು ವಾರಗಳಲ್ಲಿ ಕಾನೂನು ರೀತಿ ಕ್ರಮ ಜರುಗಿಸುವಂತೆ ಸೂಚಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದ ನ್ಯಾಯಾಲಯ.
Madal Virupakshappa
Madal Virupakshappa
Published on

ಬಿಜೆಪಿಯ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣದ ತನಿಖೆಯನ್ನು ಹೈಕೋರ್ಟ್‌ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವಹಿಸಬೇಕು. ಇಲ್ಲವೇ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ.

ಶ್ರೀರಾಮಸೇನೆ ದಾವಣಗೆರೆ ಘಟಕದ ಅಧ್ಯಕ್ಷ ಮಣಿಕಂಠ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ಮಂಗಳವಾರ ವಿಲೇವಾರಿ ಮಾಡಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಈ ಹಿಂದೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆಗ, ನಿಮ್ಮ ಬೇಡಿಕೆ ಕುರಿತು ಸರ್ಕಾರ ಅಥವಾ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದೀರಾ ಎಂದು ಹೈಕೋರ್ಟ್ ಅರ್ಜಿದಾರರನ್ನು ಪ್ರಶ್ನಿಸಿತ್ತು. ಮನವಿ ಸಲ್ಲಿಸಿಲ್ಲ ಎಂದು ಅರ್ಜಿದಾರರ ತಿಳಿಸಿದ್ದರು. ಹಾಗಿದ್ದರೆ ಸರ್ಕಾರ ಇಲ್ಲವೇ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಮನವಿ ಸಲ್ಲಿಸುವುದಾಗಿ ಹೇಳಿ ಅರ್ಜಿದಾರರು ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದರು. ಸರ್ಕಾರ ಅಥವಾ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲು ಅವಕಾಶ ನೀಡಿ ಅರ್ಜಿಯನ್ನು ಹೈಕೋರ್ಟ್ 2023ರ ಮಾರ್ಚ್‌ 28ರಂದು ಅರ್ಜಿ ಇತ್ಯರ್ಥಪಡಿಸಿತ್ತು. ಅದರಂತೆ, ಅರ್ಜಿದಾರರು 2023ರ ಮಾರ್ಚ್‌ 31ರಂದು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು.

Also Read
ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪ್ರಕರಣ: ಎಸ್‌ಐಟಿ ತನಿಖೆಗೆ ವಹಿಸಲು ಕೋರಿದ್ದ ಪಿಐಎಲ್‌ ಹಿಂಪಡೆದ ಶ್ರೀರಾಮ ಸೇನೆ

ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಹೇಳಿ ಅರ್ಜಿದಾರರು ಮತ್ತೊಮ್ಮೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠವು ಈ ಹಿಂದೆ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿಯನ್ನು ಪರಿಗಣಿಸುವಂತೆ ನಿರ್ದೇಶನ ನೀಡಲಾಗುವುದು ಎಂದು ಅರ್ಜಿದಾರರಿಗೆ ತಿಳಿಸಿ, ಪ್ರಕರಣದಲ್ಲಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಎಂಟು ವಾರಗಳಲ್ಲಿ ಕಾನೂನು ರೀತಿ ಕ್ರಮ ಜರುಗಿಸುವಂತೆ ಸೂಚಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ಅಭಿವೃದ್ಧಿ ನಿಗಮದ (ಕೆಎಸ್‌ಡಿಎಲ್) ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ಪುತ್ರನ ಮೂಲಕ ಕಚ್ಚಾವಸ್ತುಗಳ ಪೂರೈಕೆಗೆ ಗುತ್ತಿಗೆ ಪಡೆದವರಿಗೆ ಕಾರ್ಯಾದೇಶ ನೀಡಲು ಲಂಚ ಪಡೆದ ಆರೋಪದಲ್ಲಿ ಬಂಧಿತರಾಗಿದ್ದರು. ವಿಧಾನಸಭಾ ಚುನಾವಣೆಗೂ ಮುನ್ನ ಪ್ರಕರಣವು ಭಾರಿ ಸದ್ದು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Kannada Bar & Bench
kannada.barandbench.com