ಬಿಕ್ಲು ಶಿವು ಕೊಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್‌

ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಲು ತೆರಳಿದ್ದ ಬಸವರಾಜ್‌ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಸಿಐಡಿ ಪೊಲೀಸರು ಅವರ ಪತ್ತೆ ಶೋಧ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.
Byrati Basavaraj
Byrati Basavaraj
Published on

ಆರು ತಿಂಗಳ ಹಿಂದೆ ನಡೆದ ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವು ಹತ್ಯೆ ಪ್ರಕರಣದ ಐದನೇ ಆರೋಪಿಯಾದ ಶಾಸಕ ಬೈರತಿ ಬಸವರಾಜ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರಿನ ಕೆ ಆರ್‌ ಪುರಂನ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಪ್ರಕರಣದಲ್ಲಿ ಕೋಕಾ ಕಾಯಿದೆ ಅನ್ವಯಿಸಿದ್ದನ್ನು ಹೈಕೋರ್ಟ್‌ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯಕ್ಕೆ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್‌ ಗಜಾನನ್‌ ಭಟ್‌ ಅವರು ಸಿಐಡಿಗೆ ನೋಟಿಸ್‌ ಜಾರಿಗೊಳಿಸಿದರು. ಅಲ್ಲದೇ, ವಿಚಾರಣೆಯನ್ನು ಡಿಸೆಂಬರ್‌ 22ಕ್ಕೆ ಮುಂದೂಡಿದೆ.

ಈ ನಡುವೆ, ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಲು ತೆರಳಿದ್ದ ಬಸವರಾಜ್‌ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಸಿಐಡಿ ಪೊಲೀಸರು ಅವರ ಪತ್ತೆ ಶೋಧ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Also Read
ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಣೆ; ಕೋಕಾ ಅನ್ವಯ ಆದೇಶ ವಜಾ

ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್‌ ಬಿಕ್ಲು ಶಿವ ಅಲಿಯಾಸ್‌ ಶಿವಪ್ರಕಾಶ್‌ ಕೊಲೆ ಆರೋಪದ ಮೇಲೆ ಜಗದೀಶ್‌, ಕಿರಣ್‌, ವಿಮಲ್‌, ಅನಿಲ್‌ ಮತ್ತು ಬೈರತಿ ಬಸವರಾಜ್‌ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್‌ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 103, 190 ಅಡಿ ಪ್ರಕರಣ ದಾಖಲಾಗಿದೆ.

Kannada Bar & Bench
kannada.barandbench.com