ಸಂಪುಟದಲ್ಲಿ ನ್ಯಾ. ಕುನ್ಹಾ ವರದಿ ಅಂಗೀಕಾರ: ಕೆಎಸ್‌ಸಿಎ, ಆರ್‌ಸಿಬಿ, ಡಿಎನ್‌ಎ, ಪೊಲೀಸರ ವಿರುದ್ಧ ಕ್ರಮಕ್ಕೆ ನಿರ್ಧಾರ
ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಘಟಿಸಿದ ಕಾಲ್ತುಳಿತ ಪ್ರಕರಣದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಸಂಪುಟ ಸಭೆಯು ಗುರುವಾರ ಅಂಗೀಕರಿಸಿದೆ.
ವರದಿಯಲ್ಲಿ ಉಲ್ಲೇಖಿಸಿರುವ ಖಾಸಗಿ ಸಂಸ್ಥೆಗಳು ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಿರುವ ಕ್ರಮಗಳನ್ನು ಕಾನೂನು ರೀತ್ಯಾ ಕೈಗೊಳ್ಳಲು ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ನಿರ್ಧರಿಸಿದೆ.
ಆರ್‌ಸಿಬಿ, ಡಿಎನ್‌ಎ ಎಂಟರ್ ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಕೆಎಸ್‌ಸಿಎ ಅಂದಿನ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ ಶಂಕರ್, ಖಜಾಂಚಿ ಜಯರಾಮ್, ಆರ್‌ಸಿಬಿಎಸ್‌ಪಿಎಲ್‌ನ ಉಪಾಧ್ಯಕ್ಷ ಇ ಎಸ್ ರಾಜೇಶ್ ಮೆನನ್, ವ್ಯವಸ್ಥಾಪಕ ನಿರ್ದೇಶಕ ಡಾ. ವೆಂಕಟವರ್ಧನ್ ವಿರುದ್ಧ ಕ್ರಮಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಈ ನಡುವೆ, ಇಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠದ ಮುಂದೆ ಕಾಲ್ತುಳಿತ ಪ್ರಕರಣದ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪರಿಗಣಿಸಿದ್ದ ಅರ್ಜಿಯು ವಿಚಾರಣೆಗೆ ಬಂದಿತ್ತು. ಕಾಲಾವಕಾಶದ ಕೊರತೆಯ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ವಿಚಾರಣೆಯ ಸಂದರ್ಭದಲ್ಲಿ ಕೆಎಸ್‌ಸಿಎ ಪರ ಹಿರಿಯ ವಕೀಲ ಎಂ ಎಸ್ ಶ್ಯಾಮ್‌ಸುಂದರ್ ಅವರು “ನ್ಯಾ.ಕುನ್ಹಾ ವರದಿಯ ಅನುಸಾರ ರಾಜ್ಯ ಸರ್ಕಾರವು ಕೆಎಸ್‌ಸಿಎ, ಡಿಎನ್‌ಎ ಮತ್ತು ಆರ್‌ಸಿಬಿ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದೆ. ಈಗಾಗಲೇ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಇದರಿಂದ ರಕ್ಷಣೆ ನೀಡಬೇಕು” ಎಂದು ಮನವಿ ಮಾಡಿದರು. ಇದಕ್ಕೆ ಡಿಎನ್‌ಎ ಪರ ಹಿರಿಯ ವಕೀಲ ಸಂಪತ್ ಕುಮಾರ್ ಧ್ವನಿಗೂಡಿಸಿದರು.
ವಕೀಲರೊಬ್ಬರು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಪರಿಗಣಿಸಿರುವುದರಿಂದ ನ್ಯಾ. ಕುನ್ಹಾ ವರದಿಯನ್ನು ಸಾರ್ವಜನಿಕಗೊಳಿಸಲು ನಿರ್ದೇಶಿಸಬೇಕು ಎಂದು ಕೋರಿದರು. ಇದೆಲ್ಲದರ ಮಧ್ಯೆ, ನ್ಯಾ. ಕುನ್ಹಾ ವರದಿಯನ್ನು ವಜಾಗೊಳಿಸುವಂತೆ ಕೋರಿ ಡಿಎನ್‌ಎ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯವು ನಾಳೆ ವಿಚಾರಣೆ ನಡೆಸಲಿದೆ.