ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆಯಲು ಸಂಪುಟ ಸಭೆ ನಿರ್ಧಾರ: ಸಚಿವ ಪಾಟೀಲ್

ಹಿಂದಿನ ಅಡ್ವೊಕೇಟ್‌ ಜನರಲ್‌ (ಕೆ ಪ್ರಭುಲಿಂಗ ನಾವದಗಿ) ಹಾಗೂ ಹಾಲಿ ಎಜಿ (ಕೆ ಶಶಿಕಿರಣ್‌ ಶೆಟ್ಟಿ) ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಸ್ಪೀಕರ್‌ ಅವರಿಂದ ಅನುಮತಿ ಪಡೆಯದೇ ನಿಯಮಬಾಹಿರವಾಗಿ ನಡೆದುಕೊಳ್ಳಲಾಗಿದೆ ಎಂದಿರುವ ಸಚಿವರು.
CBI and D K Shivakumar
CBI and D K Shivakumar
Published on

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ 2019ರ ಸೆಪ್ಟೆಂಬರ್‌ 25ರಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಅನುಮತಿಸಿದ್ದ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯುವ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ.

“ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ಡಿ ಕೆ ಶಿವಕುಮಾರ್‌ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವುದನ್ನು ಹಿಂಪಡೆಯಲು ನಿರ್ಧರಿಸಲಾಗಿದೆ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟೀಲ್‌ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಸಿಬಿಐ ತನಿಖೆಗೆ ಅನುಮತಿಸುವುದಕ್ಕೂ ಮುನ್ನ ವಿಧಾನಸಭೆಯ ಸ್ಪೀಕರ್‌ ಅವರಿಂದ ನಿರ್ಣಯ ಪಡೆಯದೇ ಮುಖ್ಯಮಂತ್ರಿಗಳ ಮೌಖಿಕ ಆದೇಶ ಆಧರಿಸಿ ಸಿಬಿಐ ತನಿಖೆಗೆ ಅನುಮತಿಸಲಾಗಿತ್ತು. ಕಾನೂನಾತ್ಮಕವಾಗಿ ಸ್ಪೀಕರ್‌ ಅವರಿಂದ ನಿರ್ಣಯ ಪಡೆಯಲಾಗಿರಲಿಲ್ಲ. ಹಿಂದಿನ ಅಡ್ವೊಕೇಟ್‌ ಜನರಲ್‌ (ಕೆ ಪ್ರಭುಲಿಂಗ ನಾವದಗಿ) ಹಾಗೂ ಹಾಲಿ ಅಡ್ವೊಕೇಟ್‌ ಜನರಲ್‌ (ಕೆ ಶಶಿಕಿರಣ್‌ ಶೆಟ್ಟಿ) ಅವರ ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಸ್ಪೀಕರ್‌ ಅವರಿಂದ ಅನುಮತಿ ಪಡೆಯದೇ ನಿಯಮಬಾಹಿರವಾಗಿ ನಡೆದುಕೊಳ್ಳಲಾಗಿದೆ. ಹಿಂದಿನ ಸರ್ಕಾರದ ನಿರ್ಧಾರ ಕಾನೂನಿನಗೆ ಅನ್ವಯವಾಗಿಲ್ಲ” ಎಂದು ತಿಳಿಸಿದ್ದಾರೆ.

“ಈ ಸಂಬಂಧದ ಆದೇಶವು ಎರಡು-ಮೂರು ದಿನಗಳಲ್ಲಿ ಹೊರಬೀಳಲಿದೆ. ಹಿಂದಿನ ಸರ್ಕಾರ ಕೈಗೊಂಡಿದ್ದ ನಿರ್ಧಾರ ಕಾನೂನಿಗೆ ಅನ್ವಯವಾಗಿರಲಿಲ್ಲ” ಎಂದು ಪತ್ರಕರ್ತರ ಪ್ರಶ್ನೆಗೆ ಕಾನೂನು ಸಚಿವರು ಸಮಜಾಯಿಷಿ ನೀಡಿದರು.

ಬಿ ಎಸ್‌ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿಸಿದ್ದನ್ನು ಆಧರಿಸಿ, ತನಿಖಾ ಸಂಸ್ಥೆಯು 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಷೇಧ ಕಾಯಿದೆ ಸೆಕ್ಷನ್‌ 13 (2), 13 (1)(ಇ) ಅಡಿಯಲ್ಲಿ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠವು 2023ರ ಏಪ್ರಿಲ್‌ 20ರಂದು ವಜಾ ಮಾಡಿತ್ತು.

ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್‌ ಅವರು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದು, 2023ರ ಜೂನ್‌ 12ರಂದು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠವು ಮುಂದಿನ ವಿಚಾರಣೆವರೆಗೆ ತಡೆ ನೀಡಲಾಗಿದೆ ಎಂದು ಆದೇಶಿಸಿತ್ತು. ಈ ಮಧ್ಯೆ, ತಡೆ ತೆರವು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯವು 15 ದಿನಗಳಲ್ಲಿ ಪ್ರಕರಣ ಇತ್ಯರ್ಥಪಡಿಸುವಂತೆ ಹೈಕೋರ್ಟ್‌ಗೆ ನಿರ್ದೇಶಿಸಿತ್ತು.

ಈ ಹಿನ್ನೆಲೆಯಲ್ಲಿ ನವೆಂಬರ್‌ 22ರಂದು ಪ್ರಕರಣವನ್ನು ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲಾಗಿತ್ತು. ಡಿ ಕೆ ಶಿವಕುಮಾರ್‌ ಪರ ವಕೀಲರು ಮತ್ತು ಸಿಬಿಐ ಜಂಟಿ ಮೆಮೊ ಸಲ್ಲಿಸಿ, ನವೆಂಬರ್‌ 29ಕ್ಕೆ ವಿಚಾರಣೆಗೆ ಕೋರಿದ್ದನ್ನು ನ್ಯಾಯಾಲಯ ಮನ್ನಿಸಿತ್ತು. ಈ ಮಧ್ಯೆ, ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿಸಿದ್ದ ಆದೇಶ ಹಿಂಪಡೆಯಲು ನಿರ್ಧರಿಸಿದೆ.

Also Read
ಡಿಕೆಶಿ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಉಭಯ ಪಕ್ಷಕಾರರಿಂದ ಮುಂದೂಡಿಕೆ ಕೋರಿಕೆ; ನ.29ಕ್ಕೆ ವಿಚಾರಣೆ ನಿಗದಿ

ಪ್ರಕರಣದ ಹಿನ್ನೆಲೆ: ಡಿ ಕೆ ಶಿವಕುಮಾರ್‌ ಅವರು ಗಣಿಗಾರಿಕೆ ಮತ್ತು ರಿಯಲ್‌ ಎಸ್ಟೇಟ್‌ ಉದ್ಯಮ ಸೇರಿದಂತೆ ಹಲವು ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ 2017ರ ಆಗಸ್ಟ್‌ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ 8.59 ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು. ಡಿ ಕೆ ಶಿವಕುಮಾರ್‌ ಅವರಿಗೆ ಸೇರಿದ ವಸತಿ ಕಟ್ಟಡವೊಂದರಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಇದರ ಬೆನ್ನಿಗೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಜಾರಿ ನಿರ್ದೇಶನಾಲಯವು ಶಿವಕುಮಾರ್‌ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್‌ 3ರಂದು ಶಿವಕುಮಾರ್‌ ಅವರನ್ನು ಬಂಧಿಸಲಾಗಿತ್ತು. ಆನಂತರ 2019ರ ಸೆಪ್ಟೆಂಬರ್‌ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ಪ್ರಕರಣವನ್ನು ಒಪ್ಪಿಸಿ ರಾಜ್ಯ ಸರ್ಕಾರವು ಆದೇಶಿಸಿತ್ತು.

Kannada Bar & Bench
kannada.barandbench.com