ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ: ಪಹಲ್ಗಾಮ್ ದಾಳಿಯಂತಹ ಘಟನೆ ನಿರ್ಲಕ್ಷಿಸಲಾಗದು ಎಂದ ಸುಪ್ರೀಂ ಕೋರ್ಟ್‌

ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿಗೆ ವಿರೋಧ ವ್ಯಕ್ತಪಡಿಸಿದರು. ಆಗ ನ್ಯಾಯಾಲಯ ಈ ಮಾತುಗಳನ್ನು ಹೇಳಿತು.
Supreme Court, Jammu and Kashmir
Supreme Court, Jammu and Kashmir
Published on

ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಗುರುವಾರ  ಮೇಲ್ನೋಟಕ್ಕೆ ಪ್ರತಿಕೂಲ ಅಭಿಪ್ರಾಯ ವ್ಯಕ್ತಪಡಿಸಿದೆ [ಜಹೂರ್‌ ಅಹ್ಮದ್‌ ಭಟ್‌ ಮತ್ತಿತರರು ಹಾಗೂ ಭಾರತ ಒಕ್ಕೂಟ ನಡುವಣ ಪ್ರಕರಣ]

ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರನ್ನು ಉದ್ದೇಶಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರಿದ್ದ ಪೀಠ ಪಹಲ್ಗಾಮ್‌ನಲ್ಲಿ ಈಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಸ್ತಾಪಿಸುತ್ತಾ ಕಾಶ್ಮೀರದ ಪ್ರಸಕ್ತ ಸನ್ನಿವೇಶವನ್ನು ಕಡೆಗಣಿಸಲಾಗದು ಎಂದಿತು.

ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿಗೆ ವಿರೋಧ ವ್ಯಕ್ತಪಡಿಸಿದರು.

ಚುನಾವಣೆ ಬಳಿಕ ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಭರವಸೆ ನೀಡಿತ್ತು. ನಮ್ಮ ದೇಶದ ಈ ಭಾಗ ವಿಶಿಷ್ಟ ಸ್ಥಾನದಲ್ಲಿದೆ. ಈ ವಿಚಾರ ಈಗ ಏಕೆ ಎದ್ದು ಬಂದಿದೆ ಎಂದು ತಿಳಿಯುತ್ತಿಲ್ಲ. ನೀರನ್ನು ರಾಡಿ ಮಾಡಬೇಕಾದಂತಹ ಸಂದರ್ಭ ಇದಲ್ಲ. ನಾನು ಕೇಂದ್ರ ಸರ್ಕಾರದಿಂದ ಮತ್ತಷ್ಟು ಸೂಚನೆಗಳನ್ನು ಪಡೆಯಬೇಕಿದ್ದು ಎಂಟು ವಾರಗಳ ಕಾಲಾವಕಾಶ ಅಗತ್ಯವಿದೆ ಎಂದರು. ಇದಕ್ಕೆ ಸಮ್ಮತಿಸಿದ ಪೀಠವು ಎಂಟು ವಾರಗಳ ಬಳಿಕ ಪ್ರಕರಣ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು

ಸುಪ್ರೀಂ ಕೋರ್ಟ್‌ 2023ರಲ್ಲಿ ವಿಧಿ 370ರ ರದ್ದತಿ ಎತ್ತಿಹಿಡಿದಾಗ ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವುದಾಗಿ ಭರವಸೆಯಿತ್ತಿತ್ತು. ಅದರ ಮಾತನ್ನು ನ್ಯಾಯಾಲಯ ನಂಬಿತ್ತು. ಆದ್ದರಿಂದಲೇ ರಾಜ್ಯದ ಸ್ಥಾನಮಾನದ ವಿಚಾರವಾಗಿ ತೀರ್ಮಾನ ತೆಗೆದುಕೊಳ್ಳುವುದರಿಂದ ದೂರ ಉಳಿದಿತ್ತು. ತೀರ್ಪು ಹೊರಬಿದ್ದು 21 ತಿಂಗಳು ಕಳೆದಿವೆ ಎಂದು ಶಂಕರನಾರಾಯಣನ್‌ ಗಮನಸೆಳೆದರು.

ರಾಜ್ಯದ ಸ್ಥಾನಮಾನ  ಮರುಸ್ಥಾಪಿಸದೇ ಇರುವುದರಿಂದ ಕಾಶ್ಮೀರದ ಜನರ ಹಕ್ಕುಗಳ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ ಎಂದು ಕಾಲೇಜು ಅಧ್ಯಾಪಕ ಜಹೂರ್ ಅಹ್ಮದ್ ಭಟ್  ಅರ್ಜಿ ಸಲ್ಲಿಸಿದ್ದರು.

ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ಕೆಲ ವರ್ಷಗಳ ಹಿಂದೆ ರದ್ದಾಗಿ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಲಾಗಿತ್ತು. ಲಡಾಖ್‌ ಪ್ರದೇಶವನ್ನು ಪ್ರತ್ಯೇಕಿಸಿ ಮತ್ತೊಂದು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲಾಗಿತ್ತು.

ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು.  ರಾಜ್ಯದ ಸ್ಥಾನಮಾನ ನೀಡುವ ಮೊದಲೇ ಚುನಾವಣೆ ನಡೆಸಿ ಶಾಸಕಾಂಗ ಸಭೆ ರಚಿಸಲು ಹೊರಡುವುದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

ಅರ್ಜಿದಾರರ ಪ್ರಕಾರ, ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವ ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸುವುದು ಸಂವಿಧಾನದ ಮೂಲ ರಚನೆಯ ಭಾಗವಾಗಿರುವ ಒಕ್ಕೂಟ ತತ್ವವನ್ನು ದುರ್ಬಲಗೊಳಿಸುತ್ತದೆ ಎನ್ನುವುದಾಗಿದೆ. ಕಳೆದ ವರ್ಷ ಈ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಕಾಂಗ್ರೆಸ್ ಮತ್ತು ಕೆಲವು ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರವು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಅಧಿಕಾರದಲ್ಲಿದೆ.

ಮೇ 2024 ರಲ್ಲಿ, ಸರ್ವೋಚ್ಚ ನ್ಯಾಯಾಲಯವು  ಡಿಸೆಂಬರ್ 2023 ರಲ್ಲಿ  370 ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಎತ್ತಿಹಿಡಿಯುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಮರು ಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿತ್ತು.

ಸಂವಿಧಾನದ 370 ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ದಾರಿ ಮಾಡಿಕೊಟ್ಟ 2019ರ ಕಾನೂನಿನ ಸಿಂಧುತ್ವ ಕುರಿತು ನಿರ್ಧರಿಸಲು ಸರ್ವೋಚ್ಚ ನ್ಯಾಯಾಲಯದ ಸಾಂವಿಧಾನಿಕ ಪೀಠ ಕಳೆದ ವರ್ಷ ನಿರಾಕರಿಸಿತ್ತು.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ತಾತ್ಕಾಲಿಕವಾದುದಾಗಿತ್ತು. ಈ ಪ್ರದೇಶಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದಿದ್ದ ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ)  ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ನ್ಯಾಯಾಲಯ ಆಗ ದಾಖಲಿಸಿಕೊಂಡಿತ್ತು.

Kannada Bar & Bench
kannada.barandbench.com