ಕಾವೇರಿ ನೀರು ವಿವಾದ: ಕರ್ನಾಟಕದಿಂದ ಹೆಚ್ಚುವರಿ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ

ಮಳೆ ಕೊರತೆಯ ನಡುವೆಯೂ ತನಗೆ ಹಂಚಿಕೆಯಾಗಿರುವ ಕಾವೇರಿ ನೀರಿನ ಪಾಲನ್ನು ಕರ್ನಾಟಕ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಎರಡು ಅರ್ಜಿಗಳನ್ನು ಸಲ್ಲಿಸಿತ್ತು.
Supreme Court, Karnataka and Tamil Nadu
Supreme Court, Karnataka and Tamil Nadu
Published on: 

ಕಾವೇರಿ ನದಿಯಿಂದ ಕರ್ನಾಟಕವು ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ.

Justice Vikram Nath and Justice Aparesh Kumar Singh
Justice Vikram Nath and Justice Aparesh Kumar Singh

"ಅರ್ಜಿಯನ್ನು ನಾವು ವಜಾಗೊಳಿಸಿದ್ದೇವೆ" ಎಂದು ಪೀಠ ಹೇಳಿದೆ.

ತಮಿಳುನಾಡು ಸರ್ಕಾರವು ತನಗೆ ಹಂಚಿಕೆಯಾಗಿರುವ ಕಾವೇರಿ ನೀರಿನ ಪಾಲನ್ನು ತಕ್ಷಣ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಎರಡು ಅರ್ಜಿಗಳನ್ನು ಸಲ್ಲಿಸಿತ್ತು.

ಕಳೆದ ಆಗಸ್ಟ್‌ನಲ್ಲಿ ಮಳೆ ಕೊರತೆಯ ವರ್ಷವಾಗಿದ್ದರೂ ಕರ್ನಾಟಕವು ತನ್ನ ಪಾಲಿನ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ಸುಮಾರು 11 ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ (ಟಿಎಂಸಿ) ನೀರಿನ ಕೊರತೆಯಿಂದಾಗಿ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಮಿಳುನಾಡು ತಿಳಿಸಿತ್ತು.

ಆದರೆ, ತಮಿಳುನಾಡಿನ ಆರೋಪವನ್ನು ಕರ್ನಾಟಕ ಸರ್ಕಾರ ನಿರಾಕರಿಸಿತ್ತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂ) ಆದೇಶಗಳನ್ನು ತಾನು ಪಾಲಿಸುತ್ತಿರುವುದಾಗಿ ಸ್ಪಷ್ಟಪಡಿಸಿತ್ತು.

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದವು 1892 ಮತ್ತು 1924ರಲ್ಲಿ ಅಂದಿನ ಮದ್ರಾಸ್ ಪ್ರೆಸಿಡೆನ್ಸಿ ಹಾಗೂ ಮೈಸೂರು ಸಂಸ್ಥಾನದ ನಡುವೆ ನಡೆದ ಒಪ್ಪಂದಗಳ ಕಾಲದಿಂದಲೂ ಇದೆ.

ಉಭಯ ರಾಜ್ಯಗಳ ನಡುವೆ ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ನೀರು ವಿವಾದ ನ್ಯಾಯಮಂಡಳಿ ರಚನೆಗೆ ನಿರ್ದೇಶಿಸಿತ್ತು. 2007ರಲ್ಲಿ ನ್ಯಾಯಮಂಡಳಿ ತನ್ನ ಅಂತಿಮ ತೀರ್ಪು ಪ್ರಕಟಿಸಿ, ತಮಿಳುನಾಡಿಗೆ ಪ್ರತಿದಿನ ನಿಗದಿತ ಪ್ರಮಾಣದ ನೀರು ಪಡೆಯಲು ಅವಕಾಶ ಕಲ್ಪಿಸಿತ್ತು. ಆದರೆ, ಈ ತೀರ್ಪಿನ ವಿರುದ್ಧ ಎರಡೂ ರಾಜ್ಯಗಳು ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ವಿವಾದ ಮುಂದುವರಿದಿತ್ತು.

2016ರಲ್ಲಿ ಕರ್ನಾಟಕದ ಜಲಾಶಯಗಳಲ್ಲಿ ಹಂಚಿಕೆ ಮಾಡಲು ಹೆಚ್ಚುವರಿ ನೀರು ಲಭ್ಯವಿಲ್ಲ ಎಂಬ ವಾದದ ನಡುವೆಯೇ ತಮಿಳುನಾಡು ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಈ ಸಂದರ್ಭದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

2023ರಲ್ಲಿ ಕಾವೇರಿ ನದಿಯಿಂದ ತಮಗೆ ಪ್ರಸ್ತುತ ನಿಗದಿಪಡಿಸಿರುವ ಪ್ರತಿದಿನದ 5,000 ಕ್ಯೂಸೆಕ್ ನೀರಿನ ಪ್ರಮಾಣವನ್ನು 7,200 ಕ್ಯೂಸೆಕ್‌ಗೆ ಹೆಚ್ಚಿಸಬೇಕೆಂದು ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಇದಲ್ಲದೆ, ಕರ್ನಾಟಕ ಮತ್ತು ತಮಿಳುನಾಡು ನಡುವಿನ ಮತ್ತೊಂದು ಜಲವಿವಾದವೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ಪೆನ್ನೈಯಾರ್ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ತಮಿಳುನಾಡು ಸರ್ಕಾರವು ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮೂಲ ದಾವೆ ಹೂಡಿದೆ.