ಜನಾರ್ದನ ರೆಡ್ಡಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆ ಅನುಮತಿಗೆ ವಿಳಂಬ; ಹೈಕೋರ್ಟ್‌ ಕದತಟ್ಟಿದ ಸಿಬಿಐ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಅನುಮತಿ ಕೋರಿ 2022ರ ಆಗಸ್ಟ್‌ 30ರಂದು ಮನವಿ ಮಾಡಲಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ವಿವರಿಸಿದೆ.
Karnataka HC, CBI and G. Janardhana Reddy
Karnataka HC, CBI and G. Janardhana Reddy

ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ರಾಜ್ಯದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ತುರ್ತಾಗಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಕ್ರಿಮಿನಲ್‌ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ 1944ರ ವಿವಿಧ ನಿಬಂಧನೆಗಳ ಅಡಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನಾರ್ದನ ರೆಡ್ಡಿ ಗಳಿಸಿರುವ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯದ ಮೆಟ್ಟಿಲೇರಲು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಅನುಮತಿ ಕೋರಿ 2022ರ ಆಗಸ್ಟ್‌ 30ರಂದು ಮನವಿ ಮಾಡಲಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ವಿವರಿಸಿದೆ.

ತಮ್ಮ ಮತ್ತು ಕುಟುಂಬ ಸದಸ್ಯರಿಗೆ ಸೇರಿದ ಕರ್ನೂಲ್‌, ಹೈದರಾಬಾದ್‌ ಮತ್ತು ರಂಗಾ ರೆಡ್ಡಿ ಜಿಲ್ಲೆಗಳಲ್ಲಿ ಗುರುತಿಸಲಾಗಿರುವ ಸುಮಾರು 19.14 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿಗಳನ್ನು ಮಾರಾಟ ಮಾಡಲು ಜನಾರ್ದನ ರೆಡ್ಡಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರವು ಕ್ರಮಕೈಗೊಳ್ಳಲು ವಿಫಲವಾಗಿದೆ. ಜನಾರ್ದನ ರೆಡ್ಡಿ ಅವರು ಅಕ್ರಮವಾಗಿ ಆಸ್ತಿ ಮಾರಾಟ ಮಾಡಲು ಮುಂದಾಗುತ್ತಿದ್ದು, ಅವುಗಳ ನೋಂದಣಿ ಮಾಡದಂತೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ರಿಜಿಸ್ಟ್ರಾರ್‌ ಅವರಿಗೆ ಮನವಿ ಮಾಡಲಾಗಿದೆ ಎಂದು ಸಿಬಿಐ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಓಬಳಾಪುರಂ ಮೈನಿಂಗ್‌ ಕಂಪೆನಿ ಲಿಮಿಟೆಡ್‌ ಮತ್ತು ಅಸೋಸಿಯೇಟೆಡ್‌ ಮೈನಿಂಗ್‌ ಕಂಪೆನಿ ಲಿಮಿಟೆಡ್‌ ಮೂಲಕ ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನಿರ್ದೇಶನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಜನಾರ್ದನ ರೆಡ್ಡಿ ಸೇರಿದಂತೆ ಹಲವರ ವಿರುದ್ಧ 2015ರಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಅಕ್ರಮ ಗಣಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ ರೆಡ್ಡಿ ಅವರು 198 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂದು ಸಿಬಿಐ ಅರ್ಜಿಯಲ್ಲಿ ವಿವರಿಸಲಾಗಿದೆ.

2015ರಲ್ಲಿ ರೆಡ್ಡಿಗೆ ಸೇರಿದ ₹65.05 ಕೋಟಿ ಮೌಲ್ಯದ ಆಸ್ತಿ ಜಪ್ತಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಇಂಥದ್ದೇ ಮನವಿ ಮಾಡಲಾಗಿತ್ತು. ಇದಕ್ಕೆ ರಾಜ್ಯ ಸರ್ಕಾರ ಅನುಮತಿಸಿದ ಬಳಿಕ ಆ ಆಸ್ತಿಗಳ ಜಪ್ತಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಕೋರಿಕೆ ಸಲ್ಲಿಸಲಾಗಿತ್ತು ಎಂದು ಸಿಬಿಐ ಅರ್ಜಿಯಲ್ಲಿ ವಿವರಿಸಿದೆ. ಅದಾಗ್ಯೂ, ರೆಡ್ಡಿ ಮತ್ತು ಇತರ ಆರೋಪಿಗಳ ವಿರುದ್ಧದ ಪ್ರಕರಣ ವಿಚಾರಣೆಗೆ ಬಾಕಿ ಇರುವ ನ್ಯಾಯಾಲಯದಲ್ಲಿ 2015ರಲ್ಲಿ ಜಪ್ತಿ ಆದೇಶ ಕೋರಿ ಸಲ್ಲಿಸಿದ್ದ ಮನವಿ ಬಾಕಿ ಉಳಿದಿತ್ತು. ನಿರಂತರವಾಗಿ ಮನವಿ ಮಾಡಿದ ಹಿನ್ನೆಲೆಯಲ್ಲಿ 2022ರ ಮಾರ್ಚ್‌ 29ರಂದು ವಿಶೇಷ ನ್ಯಾಯಾಲಯವು ಸಿಬಿಐನ ಆಸ್ತಿ ಜಪ್ತಿ ಕೋರಿಕೆಗೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವಂತೆ ರೆಡ್ಡಿಗೆ ಆದೇಶಿಸಿತ್ತು.

ಈ ಮಧ್ಯೆ, ತನಿಖೆ ಮುಂದುವರಿಸಿದ ಸಿಬಿಐ ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿರುವ 219 ಹೆಚ್ಚುವರಿ ಆಸ್ತಿಗಳನ್ನು ಪತ್ತೆ ಮಾಡಿದೆ. ಇವುಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರಕ್ಕೆ 2022ರ ಆಗಸ್ಟ್‌ 30ರಂದು ಮನವಿ ಮಾಡಲಾಗಿದೆ ಎಂದು ಸಿಬಿಐ ವಿವರಿಸಿದೆ.

Kannada Bar & Bench
kannada.barandbench.com