
ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ.
ಈ ವಿಚಾರವನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನ್ಯಾಯಮೂರ್ತಿ ಬಾಗ್ಚಿ ಅವರ ಹೆಸರನ್ನು ಮಾರ್ಚ್ 6ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಪದೋನ್ನತಿಗೆ ಶಿಫಾರಸು ಮಾಡಿತ್ತು.
ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರನ್ನು ಜೂನ್ 27, 2011ರಂದು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಯಿತು. ಜನವರಿ 4, 2021ರಂದು ಆಂಧ್ರಪ್ರದೇಶದ ಹೈಕೋರ್ಟ್‌ಗೆ ವರ್ಗಾವಣೆಗೊಂಡ ಅವರು ನವೆಂಬರ್ 8, 2021ರಂದು ಕಲ್ಕತ್ತಾ ಹೈಕೋರ್ಟ್‌ಗೆ ಮರಳಿ ಅಂದಿನಿಂದ ಈವರೆಗೆ ಅಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ.
ಅವರು 13 ವರ್ಷಗಳಿಗೂ ಹೆಚ್ಚು ಕಾಲ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ, ನ್ಯಾಯಮೂರ್ತಿ ಬಾಗ್ಚಿ ಅವರು 6 ವರ್ಷಗಳಿಗೂ ಹೆಚ್ಚು ಸುದೀರ್ಘ ಅಧಿಕಾರಾವಧಿ ಹೊಂದಿರಲಿದ್ದು ನ್ಯಾ. ಕೆ.ವಿ. ವಿಶ್ವನಾಥನ್ ಅವರ ನಿವೃತ್ತಿಯ ನಂತರ ಮೇ 2031ರಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಲಿದ್ದಾರೆ.
ಆದರೆಅವರು ಅದೇ ವರ್ಷ ಅವರು ಅಕ್ಟೋಬರ್‌ನಲ್ಲಿ ನಿವೃತ್ತರಾಗುವುದರಿಂದ ತುಲನಾತ್ಮಕವಾಗಿ ಕಡಿಮೆ ಅವಧಿಗೆ ಮಾತ್ರ ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದಾರೆ.
2013 ರಲ್ಲಿ ನಿವೃತ್ತರಾದ ದಿವಂಗತ ಸಿಜೆಐ ಅಲ್ತಮಶ್ ಕಬೀರ್ ನಂತರ ನ್ಯಾ. ಬಾಗ್ಚಿ ಅವರು ಕಲ್ಕತ್ತಾ ಹೈಕೋರ್ಟ್‌ನಿಂದ ನೇಮಕಗೊಳ್ಳುತ್ತಿರುವ ಮೊದಲ ಸಿಜೆಐ ಆಗಲಿದ್ದಾರೆ .
ನ್ಯಾಯಮೂರ್ತಿ ಬಾಗ್ಚಿ ಅವರ ನೇಮಕಾತಿಯೊಂದಿಗೆ, 34 ನ್ಯಾಯಮೂರ್ತಿಗಳ ಸಂಖ್ಯಾಬಲವಿರುವ ಸುಪ್ರೀಂ ಕೋರ್ಟ್‌ನಲ್ಲಿ ಒಂದು ಹುದ್ದೆ ಖಾಲಿ ಉಳಿಯಲಿದೆ.