ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ.
ಈ ಸಂಬಂಧ ರಾಷ್ಟ್ರಪತಿಗಳು ಜನವರಿ 24ರಂದು ಅಧಿಸೂಚನೆ ಹೊರಡಿಸಿದ್ದಾರೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಜನವರಿ 19ರಂದು ನ್ಯಾಯಮೂರ್ತಿ ವರಾಳೆ ಅವರನ್ನು ಭಾರತದ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು.
ವರಾಳೆ ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಿ ಟಿ ರವಿಕುಮಾರ್ ನಂತರ ದಲಿತ ಸಮುದಾಯದಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮೂರನೇ ನ್ಯಾಯಮೂರ್ತಿ ವರಾಳೆ ಆಗಲಿದ್ದಾರೆ. ನ್ಯಾ. ವರಾಳೆ ಅವರು ಪರಿಶಿಷ್ಟ ಜಾತಿಗೆ ಸೇರಿದ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದಾರೆ ಮತ್ತು ದೇಶಾದ್ಯಂತ ಇರುವ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಏಕೈಕ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.
ನ್ಯಾಯಮೂರ್ತಿ ವರಾಳೆ ಅವರು ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿದ್ದು, ಆರಂಭಿಕ ವರ್ಷಗಳಲ್ಲಿ ವಕೀಲ ಎಸ್ ಎನ್ ಲೋಯಾ ಅವರ ಬಳಿ ಪ್ರಾಕ್ಟೀಸ್ ಮಾಡಿದ್ದರು. 1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.
2008ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ವರಾಳೆ ಅವರು ಅಕ್ಟೋಬರ್ 15, 2022ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದರು.
[ಅಧಿಸೂಚನೆ ಓದಿ]