ರಾಜಸ್ಥಾನ, ಉತ್ತರಾಖಂಡ, ಒರಿಸ್ಸಾ, ಗುವಾಹಟಿ, ಅಲಾಹಾಬಾದ್ ಹಾಗೂ ಮೇಘಾಲಯ ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳನ್ನು (ಸಿಜೆ) ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಈ ಕೆಳಗಿನ ನ್ಯಾಯಮೂರ್ತಿಗಳನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಲಾಗಿದೆ:
ರಾಜಸ್ಥಾನ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಅವರನ್ನು ಅದೇ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಅವರನ್ನು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಿತು ಬಹ್ರಿ ಅವರನ್ನು ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ಚಕ್ರಧಾರಿ ಶರಣ್ ಸಿಂಗ್ ಅವರನ್ನು ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎಸ್. ವೈದ್ಯನಾಥನ್ ಅವರನ್ನು ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ನ್ಯಾಯಮೂರ್ತಿಗಳಾದ ಅರುಣ್ ಬನ್ಸಾಲಿ, ವಿಜಯ್ ಬಿಷ್ಣೋಯ್ ಮತ್ತು ಎಂ ಎಂ ಶ್ರೀವಾಸ್ತವ ಅವರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ 2023ರ ಡಿಸೆಂಬರ್ 28ರಂದು ಶಿಫಾರಸು ಮಾಡಿತ್ತು.
ನ್ಯಾಯಮೂರ್ತಿಗಳಾದ ಎಸ್ ವೈದ್ಯನಾಥನ್, ಚಕ್ರಧಾರಿ ಶರಣ್ ಸಿಂಗ್ ಹಾಗೂ ರಿತು ಬಹ್ರಿ ಅವರ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ 2023ರ ನವೆಂಬರ್‌ನಲ್ಲಿ ಶಿಫಾರಸು ಮಾಡಿತ್ತು.