
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಬೆಳಗಾವಿಯ ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಗೀತಾ ಕೆ ಬಿ, ಬಿ ಮುರಳೀಧರ್ ಪೈ ಮತ್ತು ತ್ಯಾಗರಾಜ್ ಎನ್. ಇನವಳ್ಳಿ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಇಂದು ಅಧಿಸೂಚನೆ ಪ್ರಕಟಿಸಿದೆ.
ನ್ಯಾಯಮೂರ್ತಿ ಕೆ ಬಿ ಗೀತಾ ಅವರು 2024ರ ಮೇ 27 ರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಂಗಳೂರು ನಗರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೇಮಕವಾಗುವುದಕ್ಕೂ ಮುನ್ನ ನ್ಯಾಯಾಧೀಶರಾದ ಬಿ ಮುರಳೀಧರ್ ಪೈ ಅವರು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಸೆಪ್ಟೆಂಬರ್ 15ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.
ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನ್ಯಾ. ಕೆ ವಿ ಅರವಿಂದ್ ಅವರನ್ನು ಕಾಯಂ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಶುಕ್ರವಾರ ಅಧಿಸೂಚನೆ ಪ್ರಕಟಿಸಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 46 ಮಂದಿ ನ್ಯಾಯಮೂರ್ತಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ನ್ಯಾಯಮೂರ್ತಿ ಜೆ ಎಂ ಖಾಜಿ ಅವರು ಇಂದು ನಿವೃತ್ತಿ ಹೊಂದಿದ್ದಾರೆ. ಈಗ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದೊಂದಿಗೆ ಈ ಸಂಖ್ಯೆಯು 48ಕ್ಕೆ ಏರಲಿದೆ.