ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಬೆಂಗಳೂರಿನ ಸತ್ರ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೋಮವಾರ ಆದೇಶಿಸಿದೆ.
ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹಾಲಶ್ರೀ ಸ್ವಾಮೀಜಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆಸಿದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಟಿ ಗೋವಿಂದಯ್ಯ ಅವರು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಅವರಿಂದ ಐದು ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣದ ಆರೋಪಿಗಳಾದ ಹಿಂದೂ ಕಾರ್ಯಕರ್ತೆ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಇತ್ತ ಪ್ರಕರಣದ ಮೂರನೇ ಆರೋಪಿ, ದೂರುದಾರರಿಂದ ರೂ.1.50 ಕೋಟಿ ಹಣ ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಸೆಪ್ಟೆಂಬರ್ 19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು. ಇದಕ್ಕೂ ಮುನ್ನ, ಹಾಲಶ್ರೀ ಸ್ವಾಮೀಜಿ ಅವರು ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನು ಕೋರಿದ್ದನ್ನು ಇಲ್ಲಿ ನೆನೆಯಬಹುದು.