

ಸೌಹಾರ್ದ ಸಹಕಾರಿ ಬ್ಯಾಂಕುಗಳು ತಮ್ಮ ಠೇವಣಿಯ ಶೇ.20ರಷ್ಟು ಮೊತ್ತ ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು. ಬ್ಯಾಂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್ಷ ತಮ್ಮ ಆಸ್ತಿ ಘೋಷಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ಒಳಗೊಂಡ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಕಾಯಿದೆ-2025 ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ ನಂಜನಗೌಡ ಹಾಗೂ ಇದರ ಸದಸ್ಯ ಸಂಸ್ಥೆಗಳಾಗಿರುವ ರಾಜ್ಯದ ವಿವಿಧ 12 ಸೌಹಾರ್ದ ಸಹಕಾರಿ ಸಂಘಗಳ ಕಾರ್ಯನಿರ್ವಹಣಾಧಿಕಾರಿಗಳು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಇ ಎಸ್ ಇಂದಿರೇಶ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ, ಸಹಕಾರ ಇಲಾಖೆ ಹಾಗೂ ಸಹಕಾರ ಸಂಘಗಳ ನಿಬಂಧಕರಿಗೆ ನೋಟಿಸ್ ಜಾರಿಗೊಳಿಸಿತು. ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಸೇರಿ ಇತರ ಪ್ರತಿವಾದಿಗಳಿಗೆ ನಿರ್ದೇಶಿಸಿತು. ಒಂದೊಮ್ಮೆ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸದಿದ್ದರೆ ಕಾಯಿದೆ ಜಾರಿಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಪರಿಗಣಿಸಲಾಗುವುದು ಎಂದು ಪೀಠ ಹೇಳಿದೆ.
ತಿದ್ದುಪಡಿ ಕಾಯಿದೆಯು ಸಹಕಾರ ತತ್ವಕ್ಕೆ ವಿರುದ್ಧವಾಗಿದ್ದು, ಸಹಕಾರ ಸಂಘಗಳ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಿದೆ. ಅಲ್ಲದೆ, ತಿದ್ದುಪಡಿಯು ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವತಂತ್ರ ನಿರ್ವಹಣೆಗೆ ಅಡ್ಡಿ ಉಂಟು ಮಾಡಲಿದೆ. ಆದ್ದರಿಂದ ತಿದ್ದುಪಡಿ ಕಾಯಿದೆಯನ್ನು ಸಾಂವಿಧಾನ ಬಾಹಿರ ಎಂದು ಘೋಷಿಸಬೇಕು. ಅರ್ಜಿಯು ಅಂತಿಮ ಇತ್ಯರ್ಥ ಆಗುವ ತನಕ 2025ರ ಸೆಪ್ಟೆಂಬರ್ 12ರಂದು ಜಾರಿಗೆ ಬಂದಿರುವ ಕಾಯಿದೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.