ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕಾತಿ ನಿಯಮ ಪ್ರಶ್ನೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್‌ ನೋಟಿಸ್‌

ಮಾರ್ಗಸೂಚಿಗಳು ಮತ್ತು ಕೇಂದ್ರ ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿ ಮಳವಳ್ಳಿ ಶಾಸಕ ಪಿ ಎಂ ನರೇಂದ್ರ ಸ್ವಾಮಿ ಅವರನ್ನು ಕೆಎಸ್‌ಪಿಸಿಬಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಆಕ್ಷೇಪಿಸಿರುವ ಅರ್ಜಿದಾರ ಪರ ವಕೀಲರು.
PM Narendra Swamy & Karnataka HC
PM Narendra Swamy & Karnataka HC
Published on

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಅನ್ವಯಿಸುವ ಕೇಂದ್ರ ಸರ್ಕಾರ ರೂಪಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ನೇಮಕಾತಿ ಪ್ರಕ್ರಿಯೆ ಮತ್ತು ಅಧ್ಯಕ್ಷರ ನೇಮಕಾತಿ ಮತ್ತು ಇತರೆ ಸೇವಾ ಷರತ್ತುಗಳು) 2024ರ ನಿಯಮಗಳನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌ ಆಂಜನೇಯ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರು ಮತ್ತು ಕೆಎಸ್‌ಪಿಸಿಬಿ ಪರ ವಕೀಲರ ವಾದ ಆಲಿಸಿದ ಪೀಠವು ಕೇಂದ್ರ, ರಾಜ್ಯ ಸರ್ಕಾರ, ರಾಜ್ಯ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕೆಎಸ್‌ಪಿಸಿಬಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ವಿಚಾರಣೆ ಮುಂದೂಡಿತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಎಕ್ಸ್‌ ಎಂ ಜೋಸೆಫ್‌ ಅವರು “ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಹಲವು ಬಾರಿ ನಿರ್ದೇಶನ ನೀಡಿದ್ದರೂ ಅದನ್ನು ಪಾಲಿಸಲಾಗಿಲ್ಲ. ಮಾರ್ಗಸೂಚಿಗಳು ಮತ್ತು ಕೇಂದ್ರ ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿ ಮಳವಳ್ಳಿ ಶಾಸಕ ಪಿ ಎಂ ನರೇಂದ್ರ ಸ್ವಾಮಿ ಅವರನ್ನು ಕೆಎಸ್‌ಪಿಸಿಬಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ” ಎಂದರು.

ಕೆಎಸ್‌ಪಿಸಿಬಿ ಪ್ರತಿನಿಧಿಸಿದ್ದ ವಕೀಲ ಮಹೇಶ್‌ ಚೌಧರಿ ಅವರು “ಜಲ ಕಾಯಿದೆ ಸೆಕ್ಷನ್‌ 64ರ ಅಡಿ ನಿಯಮಗಳನ್ನು ರಾಜ್ಯ ಸರ್ಕಾರ ನಿಯಮ ರೂಪಿಸಬಹುದು. ಆದರೆ, ಅವುಗಳನ್ನು ಸದನದ ಮುಂದೆ ಮಂಡಿಸಬೇಕಿಲ್ಲ. ಸೇವಾ ವಿಚಾರಗಳಲ್ಲಿ ಪಿಐಎಲ್‌ ಸಿಂಧುವಾಗುವುದಿಲ್ಲ ಎಂದು ಈಗಾಗಲೇ ಪೀಠವು ಬೇರೆ ಪ್ರಕರಣದಲ್ಲಿ ನಿರ್ಧರಿಸಿದೆ. ಪ್ರಕರಣದಲ್ಲಿ ಅರ್ಜಿದಾರರ ದಾವೆ ಹೂಡುವ ಹಕ್ಕನ್ನು ಪರಿಶೀಲನೆ ಮಾಡಬೇಕಿದೆ” ಎಂದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ನೇಮಕಾತಿ ಪ್ರಕ್ರಿಯೆ ಮತ್ತು ಅಧ್ಯಕ್ಷರು, ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿ ನೇಮಕಾತಿ ಮತ್ತು ಇತರೆ ಸೇವಾ ಷರತ್ತುಗಳು) 2024 ಅನ್ನು ವಜಾಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com