ಶಾಲೆ, ಕೈಗಾರಿಕೆ, ಕಂಪೆನಿಗಳ ಕೆಲಸದ ಅವಧಿ ಬದಲಾವಣೆ: ಸಮಗ್ರ ವರದಿ ಸಲ್ಲಿಸಲು ಸರ್ಕಾರಕ್ಕೆ ಎರಡು ತಿಂಗಳು ಕಾಲಾವಕಾಶ

ಅ.5ರಂದು ಕಾರ್ಮಿಕ ಇಲಾಖೆ, ಎಫ್‌ಕೆಸಿಸಿಐ, ವಾಣಿಜ್ಯೋದ್ಯಮಿಗಳು, ಕಾರ್ಮಿಕರ ಒಕ್ಕೂಟಗಳ ಪ್ರತಿನಿಧಿಗಳ ಜೊತೆಗೆ ಸಮಾಲೋಚನೆ ನಡೆದಿದೆ. ಅ.9ರಂದು ಶಾಲಾ ಆಡಳಿತ ಮಂಡಳಿ, ಪೋಷಕರ ಒಕ್ಕೂಟದೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದ ಸರ್ಕಾರದ ವಕೀಲರು.
Karnataka High Court
Karnataka High Court

ಬೆಂಗಳೂರು ನಗರದಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ವಿವಿಧ ಕಂಪೆನಿಗಳ ಕೆಲಸದ ಅವಧಿ ಬದಲಾವಣೆ ಮಾಡುವ ಸಾಧ್ಯತೆಯ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಗ್ರವಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮತ್ತೆ ಎಂಟು ವಾರಗಳ ಕಾಲಾವಕಾಶ ನೀಡಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್‌ ಮಾಲ್‌ವರೆಗೆ ರಸ್ತೆ ಅಗಲೀಕರಣ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕಳೆದ (ಸೆ.12ರಂದು) ವಿಚಾರಣೆಯಲ್ಲಿ ನ್ಯಾಯಾಲಯವು ಬೆಂಗಳೂರು ನಗರದಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರದ ದಟ್ಟಣೆ ಸಮಸ್ಯೆ ನಿವಾರಿಸಬೇಕಿದೆ. ಈ ನಿಟ್ಟಿನಲ್ಲಿ ಶಾಲೆಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡುವ ಕುರಿತಂತೆ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮೂಲಕ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಬಸ್‌ ಆಪರೇಟರ್‌ಗಳು, ಪೋಷಕರ ಸಂಘಗಳು ಪ್ರತಿನಿಧಿಗಳ ಜೊತೆಗೆ ಸಭೆ ಕರೆದು ಸಮಾಲೋಚಿಸಿ ಆರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು, ಹೈಕೋರ್ಟ್‌ ನಿರ್ದೇಶನದಂತೆ ಸಂಬಂಧಪಟ್ಟವರ ಜೊತೆಗೆ ಸರ್ಕಾರ ಸಮಾಲೋಚನೆ ನಡೆಸಿದೆ. ಅಕ್ಟೋಬರ್‌ 5ರಂದು ಕಾರ್ಮಿಕ ಇಲಾಖೆ, ಎಫ್‌ಕೆಸಿಸಿಐ, ವಾಣಿಜ್ಯೋದ್ಯಮಿಗಳು ಹಾಗೂ ಕಾರ್ಮಿಕರ ಒಕ್ಕೂಟಗಳ ಪ್ರತಿನಿಧಿಗಳ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. ಅಕ್ಟೋಬರ್‌ 9ರಂದು ಶಾಲಾ ಆಡಳಿತ ಮಂಡಳಿ, ಪೋಷಕರ ಒಕ್ಕೂಟದೊಂದಿಗೆ ಸಭೆ ನಡೆಸಲಾಯಿತು. ಹಾಗೆಯೇ, ಸಾರಿಗೆ ಮತ್ತು ಸಂಚಾರ ವಿಭಾಗದ ಪೊಲೀಸ್‌ ಇಲಾಖೆ ಅಧಿಕಾರಿಗಳೊಂದಿಗೂ ಸಭೆ ನಡೆಸಲಾಗಿದೆ. ಸಂಚಾರ ದಟ್ಟಣೆಗೆ ಪರಿಹಾರ ಕಂಡುಹಿಡಿಯಲು ಸಮಾಲೋಚನೆ‌ ಪ್ರಕ್ರಿಯೆ ಮುಂದುವರಿಯಲಿದ್ದು, ಅಂತಿಮ ಅಭಿಪ್ರಾಯ ಕುರಿತಂತೆ ವರದಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.

ಆ ಮನವಿ ಪರಿಗಣಿಸಿದ ಪೀಠವು ನ್ಯಾಯಾಲಯದ ಸೂಚನೆಯ ಮೇರೆಗೆ ಸರ್ಕಾರವು ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ ಚರ್ಚಿಸಿ, ಅಭಿಪ್ರಾಯ ಸಂಗ್ರಹ ಮಾಡುತ್ತಿದೆ. ಸಭೆಯಲ್ಲಿ ಸಂಬಂಧಪಟ್ಟ ಪಾಲುದಾರರು ಭಾಗವಹಿಸಿದ್ದು, ಅಂತಿಮ ನಿರ್ಧಾರ ತೀರ್ಮಾನಕ್ಕೆ ಬರಬೇಕಿದೆ. ಇದು ಒಂದು ಪ್ರಕ್ರಿಯೆಯಾಗಿದ್ದು, ತೀರ್ಮಾನ ಏನೆಂಬುದನ್ನು ಎದುರು ನೋಡಬೇಕಿದೆ. ಆ ಕುರಿತಂತೆ ಸಮಗ್ರವಾದ ವರದಿ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಂಟು ವಾರ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಿ ವಿಚಾರಣೆ ಮುಂದೂಡಿತು.

Related Stories

No stories found.
Kannada Bar & Bench
kannada.barandbench.com