ನ್ಯಾ. ಯಶವಂತ್‌ ವರ್ಮಾ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಗವಾಯಿ

ದೆಹಲಿಯ ತಮ್ಮ ಅಧಿಕೃತ ನಿವಾಸದಿಂದ ಅಪಾರ ಪ್ರಮಾಣದ ಸುಟ್ಟ ನೋಟುಗಳ ಕಂತೆಗಳನ್ನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಆರೋಪ ಹೊರಿಸಿದ ಆಂತರಿಕ ಸಮಿತಿ ವರದಿಯನ್ನು ನ್ಯಾಯಮೂರ್ತಿ ವರ್ಮಾ ಪ್ರಶ್ನಿಸಿದ್ದಾರೆ.
Justice Yashwant Varma
Justice Yashwant Varma
Published on

ಆಂತರಿಕ ಸಮಿತಿಯ ವರದಿಯನ್ನು ಪ್ರಶ್ನಿಸಿ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಬುಧವಾರ ಹಿಂದೆ ಸರಿದಿದ್ದಾರೆ.

ದೆಹಲಿಯ ತಮ್ಮ ಅಧಿಕೃತ ನಿವಾಸದಿಂದ ಅಪಾರ ಪ್ರಮಾಣದ ಸುಟ್ಟ ನೋಟುಗಳ ಕಂತೆಗಳನ್ನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಆರೋಪ ಹೊರಿಸಿದ ಆಂತರಿಕ ಸಮಿತಿ ವರದಿಯನ್ನು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿ ವರ್ಮಾ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ತುರ್ತು ಪಟ್ಟಿಗಾಗಿ ಸಿಜೆಐ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು. "ಇದು ಕೆಲವು ಸಾಂವಿಧಾನಿಕ ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ. ಇದನ್ನು ಸಾಧ್ಯವಾದಷ್ಟು ಬೇಗ ಪಟ್ಟಿ ಮಾಡಲು ಸಾಧ್ಯವಾದರೆ ಒಳಿತು," ಎಂದು ಸಿಬಲ್ ಹೇಳಿದರು.

Also Read
ನಗದು ಪತ್ತೆ ಪ್ರಕರಣ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನ್ಯಾ. ವರ್ಮಾ ಅವರ ಪ್ರಮುಖ ಆಕ್ಷೇಪಗಳೇನು?

"ನಾನು ಸಹ ಸಮಿತಿಯ ಭಾಗವಾಗಿದ್ದರಿಂದ ಈ ವಿಷಯವನ್ನು ಕೈಗೆತ್ತಿಕೊಳ್ಳಲು ನನಗೆ ಸಾಧ್ಯವಾಗುವುದಿಲ್ಲ. ನಾವು ಅದನ್ನು ಪಟ್ಟಿ ಮಾಡುತ್ತೇವೆ" ಎಂದು ಸಿಜೆಐ ಹೇಳಿದರು.

ಮಾಜಿ ಸಿಜೆಐ ಸಂಜೀವ್ ಖನ್ನಾ ಅವರ ಅಧಿಕಾರಾವಧಿಯಲ್ಲಿ ನ್ಯಾಯಮೂರ್ತಿ ವರ್ಮಾ ವಿರುದ್ಧ ಆಂತರಿಕ ಕ್ರಮವನ್ನು ಪ್ರಾರಂಭಿಸುವ ಪ್ರಕ್ರಿಯೆಯಲ್ಲಿ ತಾವು ಭಾಗಿಯಾಗಿರುವುದನ್ನು ಸಿಜೆಐ ಗವಾಯಿ ಉಲ್ಲೇಖಿಸಿರಬಹುದು.

ನ್ಯಾಯಮೂರ್ತಿ ವರ್ಮಾ ಅವರನ್ನು ಅಧಿಕಾರದಿಂದ ಪದಚ್ಯುತಿಗೊಳಿಸಲು ವಾಗ್ದಂಡನೆ ಪ್ರಸ್ತಾವನೆಯನ್ನು ಪ್ರಸಕ್ತ ಸಂಸತ್‌ ಅಧಿವೇಶನದಲ್ಲಿ ತರಲು ಯೋಜಿಸಲಾಗುತ್ತಿದೆ ಎನ್ನುವ ಸಂದರ್ಭದಲ್ಲಿಯೇ ಯಶವಂತ್‌ ವರ್ಮಾ ಅವರು ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ, ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನದಿಂದ ತಮ್ಮ ಪದಚ್ಯುತಿಗೆ ಮಾಡಿದ ಶಿಫಾರಸನ್ನು ಅಸಾಂವಿಧಾನಿಕ ಮತ್ತು ಅತಿರೇಕದ ಕ್ರಮ ಎಂದು ಘೋಷಿಸಬೇಕೆಂದು ನ್ಯಾ. ವರ್ಮಾ ಕೋರಿದ್ದಾರೆ.

Also Read
ನಗದು ಪತ್ತೆ ಪ್ರಕರಣ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನ್ಯಾ. ವರ್ಮಾ ಅವರ ಪ್ರಮುಖ ಆಕ್ಷೇಪಗಳೇನು?

ನ್ಯಾಯಮೂರ್ತಿಗಳ ವಿರುದ್ಧದ ದೂರುಗಳ ವಿಚಾರಣೆಯ ಆಂತರಿಕ ಕಾರ್ಯವಿಧಾನವನ್ನು ನ್ಯಾಯಮೂರ್ತಿ ವರ್ಮಾ ಪ್ರಶ್ನಿಸಿದ್ದಾರೆ. ಇದು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ತೆಗೆದುಹಾಕಲು ಸಂಸತ್ತಿಗೆ ಮಾತ್ರವೇ ಅಧಿಕಾರವಿರುವ ಕಾನೂನನ್ನು "ಅವಮಾನಿಸುವ" ಸಮಾನಾಂತರವಾದ, ಸಾಂವಿಧಾನಿಕವಲ್ಲದ ಕಾರ್ಯವಿಧಾನವನ್ನು ಸೃಷ್ಟಿಸುತ್ತದೆ ಎಂದು ಆಕ್ಷೇಪಿಸಿದ್ದಾರೆ. ನ್ಯಾಯಾಧೀಶರ (ವಿಚಾರಣಾ) ಕಾಯ್ದೆ, 1968ರ ಅಡಿಯಲ್ಲಿ ಒದಗಿಸಲಾದ ಸುರಕ್ಷತೆಗಳನ್ನು ಆಂತರಿಕ ಕಾರ್ಯವಿಧಾನವು ಹೊಂದಿಲ್ಲ ಎಂದು ಅವರು ವಾದಿಸಿದ್ದಾರೆ.

Kannada Bar & Bench
kannada.barandbench.com