ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣದಲ್ಲಿ ಹೆಚ್ಚಳವಾಗದ ಶಿಕ್ಷೆ ಪ್ರಮಾಣ: ಸಿಎಂ ಅತೃಪ್ತಿ

“ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಸಕ್ಷಮ ನ್ಯಾಯಾಲಯಕ್ಕೆ ತನಿಖಾಧಿಕಾರಿ ಆರೋಪಪಟ್ಟಿ ಸಲ್ಲಿಸಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದರೆ ಎಜಿ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು” ಎಂದ ಸಿಎಂ.
CM Siddaramaiah
CM Siddaramaiah
Published on

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಹಲವು ದಶಕಗಳಿಂದ ಶಿಕ್ಷೆ ಪ್ರಮಾಣ ಶೇ. 3ಕ್ಕಿಂತ ಹೆಚ್ಚಾಗಿಲ್ಲ. ಇದೇ ಕಾರಣಕ್ಕಾಗಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಘಟಕಗಳಿಗೆ ಪೊಲೀಸ್‌ ಠಾಣಾ ಅಧಿಕಾರ ನೀಡಿದ್ದರೂ ಶಿಕ್ಷೆಯ ಪ್ರಮಾಣ ಹೆಚ್ಚಳವಾಗದಿದ್ದರೆ ಹೇಗೆ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ವೇಳೆ ಅವರು ಪ್ರತಿಕ್ರಿಯಿಸಿದರು.

“ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಸಕ್ಷಮ ನ್ಯಾಯಾಲಯಕ್ಕೆ ತನಿಖಾಧಿಕಾರಿ ಆರೋಪಪಟ್ಟಿ ಸಲ್ಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು” ಎಂದರು.

“ಪರಿಶಿಷ್ಟರ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ತನಿಖೆ ವಿಳಂಬವಾದಷ್ಟೂ ಸಾಕ್ಷ್ಯ ನಾಶವಾಗುತ್ತದೆ. ಈ ಪ್ರಕರಣಗಳಲ್ಲಿ ಸಾಕ್ಷ್ಯಗಳನ್ನು ಒದಗಿಸುವ ಹೊರೆ ಆರೋಪಿಗಳ ಮೇಲಿರುತ್ತದೆ. ನ್ಯಾಯಾಲಯಕ್ಕೆ ನಿಗದಿತ ಕಾಲಾವಧಿಯಲ್ಲಿ ಆರೋಪ ಪಟ್ಟಿ ಸಲ್ಲಿಸಿ ಸಾಕ್ಷ್ಯಗಳನ್ನು ಪರಿಣಾಮಕಾರಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಪೋಕ್ಸೊ ಪ್ರಕರಣಗಳು ದೀರ್ಘ ಕಾಲದಿಂದ ಬಾಕಿ ಇದ್ದರೆ ಪ್ರಾಸಿಕ್ಯೂಷನ್ ಜೊತೆ ಚರ್ಚಿಸಿ ಬೇಗ ಇತ್ಯರ್ಥ ಪಡಿಸಲು, ಶೀರ್ಘ್ರ ನ್ಯಾಯದಾನಕ್ಕೆ ಕ್ರಮ ವಹಿಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಸರ್ಕಾರಿ ಅಭಿಯೋಜಕರು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ” ಎಂದರು.

24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ಸಿಕ್ಕಿಲ್ಲ: ದಾಸ್‌

"ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ ವಿಚಾರಣೆ ನಡೆಸಲು ಮೂರು ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ" ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಮುಖ್ಯಮಂತ್ರಿ ಗಮನಸೆಳೆದರು.

Also Read
ಎಸ್‌ಸಿ, ಎಸ್‌ಟಿ ಆಯೋಗಕ್ಕೆ ಶೀಘ್ರ ಅಧ್ಯಕ್ಷರ ನೇಮಕಕ್ಕೆ ಕೋರಿಕೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಹೈಕೋರ್ಟ್‌

"ಆಗ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು “ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಪಡೆಯುವ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವೃತ್ತಿಯಾಗಲಾಗುವುದು" ಎಂದು ತಿಳಿಸಿದರು.

Kannada Bar & Bench
kannada.barandbench.com