ಮುಡಾ ಪ್ರಕರಣ: ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಎತ್ತಿಹಿಡಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಿಎಂ ಮೇಲ್ಮನವಿ

ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಸೆ. 24ರಂದು ನ್ಯಾ. ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಒಂದು ತಿಂಗಳ ಬಳಿಕ ವಕೀಲ ಶತಭಿಷ್‌ ಶಿವಣ್ಣ ಮೂಲಕ ಮೇಲ್ಮನವಿ ಸಲ್ಲಿಕೆಯಾಗಿದೆ.
CM Siddaramaiah and Karnataka HC
CM Siddaramaiah and Karnataka HC
Published on

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿಯು ಇನ್ನಷ್ಟೇ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.

ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 24ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್‌ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಕೆಯಾಗಿದೆ.

ರಾಜ್ಯಪಾಲರ ಆದೇಶವು ವಿವೇಚನಾ ಶೂನ್ಯವಾಗಿಲ್ಲ. ಎಲ್ಲವೂ ಕಾನೂನಿನ ಅನ್ವಯವಾಗಿದೆ. ತನಿಖಾಧಿಕಾರಿಯಿಂದ ಮುಂಚಿತವಾಗಿ ತನಿಖೆ ನಡೆಸಿ ವರದಿ ಪಡೆಯಬೇಕಾದ ಅಗತ್ಯವಿಲ್ಲ ಎಂದು ಏಕಸದಸ್ಯ ಪೀಠ ತನ್ನ ಆದೇಶದಲ್ಲಿ ಹೇಳಿತ್ತು. ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್‌ 17ಎ ಅಡಿ ಖಾಸಗಿ ವ್ಯಕ್ತಿಯೂ ಸಹ ತನಿಖೆಗೆ ಕೋರಿ ಅನುಮತಿ ಪಡೆಯಬಹುದು ಎಂದು ನ್ಯಾಯಾಲಯ ಹೇಳಿತ್ತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ನೀಡಿದ್ದ ಮಧ್ಯಂತರ ಆದೇಶ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ದೂರುದಾರರು ದೂರನ್ನು ಮುಂದುವರಿಸಲು, ರಾಜ್ಯಪಾಲರಿಂದ ಅನುಮೋದನೆ ಪಡೆಯಲು ಸಮರ್ಥರಾಗಿದ್ದಾರೆ. ಸಾಮಾನ್ಯ ಸಂದರ್ಭಗಳಲ್ಲಿ, ಸಚಿವ ಸಂಪುಟದ ಸಲಹೆಯಂತೆ ಕಾರ್ಯನಿರ್ವಹಿಸುವುದು ರಾಜ್ಯಪಾಲರ ಕರ್ತವ್ಯ. ಆದಾಗ್ಯೂ, ಅವರು ಅಸಾಧಾರಣ ಸಂದರ್ಭಗಳಲ್ಲಿ ಸ್ವತಂತ್ರ ನಿರ್ಧಾರವನ್ನು ತೆಗೆದುಕೊಳ್ಳಬಹುದು ಮತ್ತು ಪ್ರಸ್ತುತ ಪ್ರಕರಣವು ಅಂತಹ ಒಂದು ಅಪವಾದವಾಗಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಖಾಸಗಿ ದೂರುದಾರರು ರಾಜ್ಯಪಾಲರಿಂದ ಮಂಜೂರಾತಿಯನ್ನು ಪಡೆಯಬಹುದು ಎಂದು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿರುವ ನ್ಯಾಯಾಲಯವು, ಪೊಲೀಸ್ ಅಧಿಕಾರಿಯೇ ಅನುಮತಿಯನ್ನು ಕೋರಬೇಕು ಎನ್ನುವ ಅಗತ್ಯವೇನೂ ಇಲ್ಲ, ಖಾಸಗಿ ದೂರುದಾರರೂ ಅನುಮತಿ ಕೋರಬಹುದು ಎಂದಿತ್ತು.

Also Read
ಮುಡಾ ಪ್ರಕರಣ: ತನಿಖೆಗೆ ಅನುಮತಿಸಿದ ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್‌; ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

"ವಾಸ್ತವ ಪರಿಸ್ಥಿತಿಯಲ್ಲಿ 17A ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ. ಆದರೆ, ಖಾಸಗಿ ದೂರುದಾರರ ವಿಚಾರದಲ್ಲಿ BNSS ನ 200 ಅಥವಾ 223 ರ ಅಡಿಯಲ್ಲಿ ಪೊಲೀಸ್ ಅಧಿಕಾರಿಯು ಅನುಮತಿ ಕೋರಬೇಕೆನ್ನುವ ಅಗತ್ಯ ಎಲ್ಲಿಯೂ ಇಲ್ಲ. ಅಂತಹ ಅನುಮತಿಯನ್ನು ಪಡೆಯುವುದು ದೂರುದಾರರ ಕರ್ತವ್ಯವಾಗಿದೆ" ಎಂದು ನ್ಯಾಯಾಲಯ ಹೇಳಿತ್ತು.

ಈ ಬೆಳವಣಿಗೆಯ ಬೆನ್ನಿಗೇ ವಿಶೇಷ ಸತ್ರ ನ್ಯಾಯಾಲಯವು ತನಿಖೆ ನಡೆಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ಅಲ್ಲದೇ, ಡಿಸೆಂಬರ್‌ 24ರ ಒಳಗೆ ತನಿಖಾ ವರದಿ ಸಲ್ಲಿಸಲು ನಿರ್ದೇಶಿಸಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಆಕ್ಷೇಪಾರ್ಹವಾದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು.

Kannada Bar & Bench
kannada.barandbench.com