[ಚುನಾವಣಾ ಪ್ರಕರಣ] ಗ್ಯಾರಂಟಿ ಯೋಜನೆಗಳು ಚುನಾವಣಾ ಆಯೋಗದ ನಿಯಮ, ಮಾರ್ಗಸೂಚಿಗೆ ಅನುಗುಣವಾಗಿವೆ: ಸಿಎಂ ಸಮರ್ಥನೆ

ವಿಚಾರಣೆಗೆ ಅರ್ಹವಲ್ಲದ, ಸೂಕ್ತ ಕಾನೂನು ತಿಳಿವಳಿಕೆ ಇಲ್ಲದ, ಕ್ಷುಲ್ಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಸಲ್ಲಿಸಲಾಗಿರುವ ಇಂತಹ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿರುವ ಮುಖ್ಯಮಂತ್ರಿ.
CM Siddaramaiah and Karnataka HC
CM Siddaramaiah and Karnataka HC

ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ ಐದು ಗ್ಯಾರಂಟಿ ಯೋಜನೆಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ಸಲ್ಲಿಸಲಾಗಿರುವ ಆಕ್ಷೇಪಣೆಯಲ್ಲಿ ಪ್ರತಿಪಾದಿಸಿದ್ದಾರೆ.

ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡುವ ಮೂಲಕ ಚುನಾವಣಾ ಅಕ್ರಮ ಎಸಗಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಚುನಾಯಿತರಾಗಿರುವ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ನಿವಾಸಿ ಕೆ ಎಂ ಶಂಕರ್ ಸಲ್ಲಿಸಿರುವ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಗುರುವಾರ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಣೆಯಲ್ಲಿ ಗ್ಯಾರಂಟಿ ಘೋಷಣೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಆಕ್ಷೇಪಣೆಯನ್ನು ಅಧಿಕೃತವಾಗಿ ಪರಿಗಣಿಸಿದ ಪೀಠವು ವಿಚಾರಣೆಯನ್ನು ಅಕ್ಟೋಬರ್‌ 6ಕ್ಕೆ ಮುಂದೂಡಿತು.

ಆಕ್ಷೇಪಣೆಯಲ್ಲಿ ಏನಿದೆ?

‘ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತು ಯುವ ನಿಧಿ’ ಈ ಐದು ಕಲ್ಯಾಣ ಕಾರ್ಯಕ್ರಮಗಳನ್ನು ರಾಜ್ಯ ಕೋಟ್ಯಂತರ ಕುಟುಂಬಗಳ ಶ್ರೇಯೋಭಿವೃದ್ಧಿಗೆ ರೂಪಿಸಲಾಗಿದೆ. ರಾಜ್ಯದ ನಾಗರಿಕರ ಹಾಗೂ ವಿಶೇಷವಾಗಿ ಮಹಿಳೆಯರ ಸಬಲೀಕರಣ ಮತ್ತು ಉನ್ನತೀಕರಣದ ವಿಶಾಲ ಧ್ಯೇಯದೊಂದಿಗೆ ಗ್ಯಾರಂಟಿ ಯೋಜನೆಗಳನ್ನು ನಿರ್ದಿಷ್ಟವಾಗಿ ರೂಪಿಸಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ. ಚುನಾವಣಾ ಪ್ರಣಾಳಿಕೆ ವೈಯುಕ್ತಿಕ ಘೋಷಣೆ ಆಗಿರುವುದಿಲ್ಲ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೂ ಅನ್ವಯವಾಗುತ್ತದೆ. ಚುನಾವಣಾ ಪ್ರಣಾಳಿಕೆಯ ಮಹತ್ವನ್ನು ಎಸ್ ಆರ್ ಬೊಮ್ಮಾಯಿ ವರ್ಸಸ್ ಭಾರತ ಸರ್ಕಾರ ಪ್ರಕರಣದಲ್ಲಿ 1994ರಲ್ಲಿ ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿನ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಸಿದ್ದರಾಮಯ್ಯ ತಮ್ಮ ಆಕ್ಷೇಪಣೆಯಲ್ಲಿ ವಿವರಿಸಿದ್ದಾರೆ.

Also Read
[ಸಂದರ್ಶನ] ಗ್ಯಾರಂಟಿ ಯೋಜನೆಗಳು ಉಪಕಾರವಲ್ಲ, ಬದಲಿಗೆ ಮಾನವ ಹಕ್ಕು; ಕಡುಬಡವರ ಏಳಿಗೆಗೆ ದಾರಿ: ಎಜಿ ಶಶಿಕಿರಣ್‌ ಶೆಟ್ಟಿ

ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಚುನಾವಣಾ ಅಕ್ರಮ ಎಸಗಲಾಗಿದೆ ಎಂಬ ಅರ್ಜಿದಾರರ ಆರೋಪ ಸಂಪೂರ್ಣ ಸುಳ್ಳು. ಅರ್ಜಿದಾರರ ಈ ವಾದವು ಪ್ರಜಾಪ್ರತಿನಿಧಿ ಕಾಯಿದೆಯ ತತ್ವಗಳಿಗೆ ವಿರುದ್ಧವಾಗಿದೆ. ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡುವ ಉದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ. ನನ್ನ ವಿರುದ್ಧವಲ್ಲದೇ ಕಾಂಗ್ರೆಸ್ ಪಕ್ಷದ ಅನೇಕ ಶಾಸಕರ ವಿರುದ್ಧ ಇದೇ ರೀತಿಯ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆಗೆ ಯೋಗ್ಯವಲ್ಲದ, ಸೂಕ್ತ ಕಾನೂನು ತಿಳಿವಳಿಕೆ ಇಲ್ಲದ, ಕ್ಷುಲ್ಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಸಲ್ಲಿಸಲಾಗಿರುವ ಇಂತಹ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ತಮ್ಮ ಆಕ್ಷೇಪಣೆಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ವಕೀಲ ಸಮೃದ್ಧ್‌ ಸೂರಜ್‌ ಹೆಗ್ಡೆ ಅವರು ಸಿದ್ದರಾಮಯ್ಯ ಅವರ ಪರವಾಗಿ ಆಕ್ಷೇಪಣೆ ಸಲ್ಲಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com