ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯ ನಾಡಗೀತೆಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವ ಸಂಬಂಧ ಸರ್ಕಾರ ಸೆಪ್ಟೆಂಬರ್‌ 25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರಿಂದ ಅರ್ಜಿ ಸಲ್ಲಿಕೆ.
Karnataka High Court
Karnataka High Court

ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಹಾಡುವ ಧಾಟಿ ಮತ್ತು ಸಮಯ ಮಿತಿ ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ.

ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಸೆಪ್ಟೆಂಬರ್‌ 25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಸ್ವಲ್ಪ ಸಮಯ ವಾದ ಆಲಿಸಿದ ಪೀಠವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ತುರ್ತು ನೋಟಿಸ್ ಜಾರಿಗೆ ಆದೇಶಿಸಿತು. ಅಲ್ಲದೇ, ಯಾವ ಅಧಿಕಾರದ ಅಡಿ ಮತ್ತು ಯಾವ ನಿಯಮಗಳಡಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಎಚ್ ಎಂ ವಿಶ್ವನಾಥ್ ವಾದ ಮಂಡಿಸಿದರು.

ನಾಡಗೀತೆಗೆ ಮೈಸೂರು ಅನಂತಸ್ವಾಮಿಯವರ ರಾಗ ಸಂಯೋಜನೆ ಅಳವಡಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು 2013ರ ಜೂನ್‌ 12ರಂದು ವಸಂತ ಕನಕಪುರ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯ ವಿಚಾರಗಳಿಗೆ ವಿರುದ್ಧವಾಗಿದೆ. ಮೈಸೂರು ಅನಂತಸ್ವಾಮಿಯವರು ಪೂರ್ಣ ನಾಡಗೀತೆಗೆ ರಾಗ ಸಂಯೋಜನೆ ಮಾಡಿಲ್ಲ ಎಂದು ಆ ಸಭೆಯಲ್ಲಿ ಚರ್ಚಿಸಲಾಗಿತ್ತು. ಡಾ. ಸಿ. ಅಶ್ವಥ್ ಅವರ ರಾಗ ಸಂಯೋಜನೆ ಮುಂದುವರಿಸುವ ಬಗ್ಗೆ ಸ್ವತಃ ಮೈಸೂರು ಅನಂತಸ್ವಾಮಿಯವರು ಒಪ್ಪಿಕೊಂಡಿದ್ದರು. ಅಲ್ಲದೇ, ರಾಜ್ಯ ಸರ್ಕಾರ ನಾಡೋಜ ಚನ್ನವೀರ ಕಣವಿ ನೇತೃತ್ವದ ಸಮಿತಿಯ ಶಿಫಾರಸ್ಸನ್ನು ಕಡೆಗಣಿಸಿದೆ. ಡಾ. ಸಿ ಅಶ್ವಥ್ ಅವರ ರಾಗ ಸಂಯೋಜನೆಯನ್ನು ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಮೈಸೂರು ಅನಂತಸ್ವಾಮಿಯವರು ಫೂರ್ಣ ನಾಡಗೀತೆಗೆ ರಾಗ ಸಂಯೋಜನೆ ಮಾಡಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳು ಇಲ್ಲ. ಈ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ರಾಜ್ಯ ಸರ್ಕಾರ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿ ನಾಡಗೀತೆಯ ರಾಗ, ಧಾಟಿ ಮತ್ತು ಸಮಯದ ಮಿತಿ ಕುರಿತು ರಾಜ್ಯ ಸರ್ಕಾರ ತರಾತುರಿಯಲ್ಲಿ ಆದೇಶ ಹೊರಡಿಸಿದೆ. ಹೀಗಾಗಿ, ಆಕ್ಷೇಪಾರ್ಹವಾದ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಲಾಗಿದೆ.

ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಸೆಪ್ಟೆಂಬರ್‌ 25ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಈ ಸಂಬಂದ ಅರ್ಜಿದಾರರು 2021ರ ಸೆಪ್ಟೆಂಬರ್‌ 17ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಈ ಅರ್ಜಿಯು ವಿಚಾರಣೆಗೆ ಬಾಕಿ ಇರುವಾಗ ಸೆಪ್ಟೆಂಬರ್‌ 25ರ ಆದೇಶಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.

Related Stories

No stories found.
Kannada Bar & Bench
kannada.barandbench.com