ಕೋಲಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಹೊಸ ಸಂಕೀರ್ಣ ನಿರ್ಮಾಣ ಯೋಜನೆಗೆ 25 ಕೋಟಿ ರೂಪಾಯಿ ಹಣ ಮಂಜೂರಾತಿಗೆ ಅನುಮೋದನೆ ನೀಡಿ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಅಧಿಕೃತ ಆದೇಶ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಶಿಥಿಲಗೊಂಡಿರುವ ಕೋಲಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಕಟ್ಟಡಗಳನ್ನು ತೆರವುಗೊಳಿಸಿ ಹೊಸದಾಗಿ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಮಾಡಲು ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲ ವಿ ವೆಂಕಟಾಚಲ ಗೌಡ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠವು ನಡೆಸಿತು.
“ಕೋಲಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಹೊಸ ಸಂಕೀರ್ಣ ನಿರ್ಮಾಣ ಮತ್ತು ಮೂಲಸೌಕರ್ಯ ಒದಗಿಸುವ ಸಂಬಂಧ ಹೈಕೋರ್ಟ್ ರಿಜಿಸ್ಟ್ರಾರ್ (ಮೂಲಸೌಕರ್ಯ) ಅವರ ವರದಿ ಆಧರಿಸಿ 25 ಕೋಟಿ ರೂಪಾಯಿಗಳ ಮಂಜೂರಾತಿಗೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸರ್ಕಾರದ ಪರ ವಕೀಲರು ಹೇಳಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಆದೇಶ ಹೊರಡಿಸಲಾಗಿಲ್ಲ. ಆದ್ದರಿಂದ, ಎರಡು ವಾರಗಳಲ್ಲಿ ಅಧಿಕೃತ ಆದೇಶ ಹೊರಡಿಸಬೇಕು. ನಂತರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಬೇಕು” ಎಂದು ನಿರ್ದೇಶನ ನೀಡಿದ ಹೈಕೋರ್ಟ್ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.