ಕೋವಿಡ್ ಕಾರಣದಿಂದಾಗಿ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದ ವೇಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ಮೈಸೂರು ಜಿಲ್ಲಾಧಿಕಾರಿ ಒಪ್ಪಿಕೊಂಡಿರುವುದನ್ನು ಶುಕ್ರವಾರ ಕರ್ನಾಟಕ ಹೈಕೋರ್ಟ್ ತಿಳಿಸಿದೆ.
ಸಾರ್ವಜನಿಕರಿಗೆ ದೇಗುಲ ಮುಚ್ಚಬೇಕು ಎಂದು ವಿಪತ್ತು ನಿರ್ವಹಣಾ ಕಾಯಿದೆಯಡಿ ರಾಜ್ಯ ಕಾರ್ಯಕಾರಿ ಸಮಿತಿ ನಿರ್ದೇಶಿಸಿದರೆ ಈ ಆದೇಶವನ್ನು ಯಾವುದೇ ವಿನಾಯಿತಿ ಇಲ್ಲದೆ ಸಂಬಂಧಿಸಿದವರೆಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಜೂನ್ 10ರ ಆದೇಶದಂತೆ ಸರ್ಕಾರ ಜಿಲ್ಲಾಧಿಕಾರಿಗಳ ಜ್ಞಾಪನಾ ಪತ್ರದ ಪ್ರತಿಯನ್ನು ಸಲ್ಲಿಸಿತ್ತು. “ಆ ವರದಿ ಕೂಡ ವಿಜಯೇಂದ್ರ ಅವರು ದೇಗುಲ ಪ್ರವೇಶಿಸಿದ್ದನ್ನು ಸ್ಪಷ್ಟವಾಗಿ ಒಪ್ಪಿಕೊಳ್ಳುತ್ತದೆ. ಅಲ್ಲದೆ ಯಾವುದೇ ವಿಶೇಷ ದರ್ಶನ ಮಾಡಿಲ್ಲ ಎಂಬ ದೇಗುಲ ಕಾರ್ಯನಿರ್ವಹಣಾಧಿಕಾರಿಯ ವಾದವನ್ನೂ ಇದು ದಾಖಲಿಸುತ್ತದೆ” ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಂತೆ ಕೋರಿ ಲೆಟ್ಜ್‌ಕಿಟ್ ಪ್ರತಿಷ್ಠಾನ ಸಲ್ಲಿಸಿರುವ ಮನವಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಈ ಅವಲೋಕನಗಳನ್ನು ಮಾಡಿದೆ.
ವಿಜಯೇಂದ್ರ ಅವರನ್ನು ವಿಶೇಷವಾಗಿ ನಡೆಸಿಕೊಂಡಿದ್ದಕ್ಕಾಗಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ರಾಜಕೀಯ ನಾಯಕರಿಗೇ ಒಂದು ನಿಯಮ, ಪ್ರಜೆಗಳಿಗೇ ಇನ್ನೊಂದು ನಿಯಮ ಇರಲು ಸಾಧ್ಯವಿಲ್ಲ ಎಂದಿತ್ತು. ಘಟನೆಗೆ ಸಂಬಂಧಿಸಿದಂತೆ ವಕೀಲ ಜಿ ಆರ್ ಮೋಹನ್ ನ್ಯಾಯಾಲಯಕ್ಕೆ ಜ್ಞಾಪನಾ ಪತ್ರ ಸಲ್ಲಿಸಿದ್ದರು. ಉಳಿದ ನಾಗರಿಕರು ಲಾಕ್‌ಡೌನ್ ನಿರ್ಬಂಧಗಳನ್ನು ಪಾಲಿಸುತ್ತಿದ್ದಾಗ ವಿಜಯೇಂದ್ರ ಅವರ ಪ್ರಯಾಣ ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗಿದ್ದು ಈ ವೇಳೆ ಬೇರೆ ನಾಗರಿಕರು ಲಾಕ್‌ಡೌನ್ ನಿರ್ಬಂಧಗಳನ್ನು ಪಾಲಿಸಬೇಕಾಗಿತ್ತು ಎಂದು ವಿವರಿಸಿದ್ದರು.
ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ (ಡಿಸಿ) ಅವರ ವರದಿಯನ್ನು ಅಧಿಕೃತವಾಗಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶಿಸಿತ್ತು.
ಶುಕ್ರವಾರದ ವಿಚಾರಣೆ ವೇಳೆ ನ್ಯಾಯಾಲಯ, ವರದಿಯಲ್ಲಿ ಹೇಳಿರುವುದು ದೇಗುಲದ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರು ಸೇರಿದಂತೆ ಎಲ್ಲರ ಕಣ್ಣು ತೆರೆಸುವಂತಿದೆ” ಎಂದಿದೆ.
ಇದೇ ವೇಳೆ ರಾಜ್ಯ ಕಾರ್ಯಕಾರಿ ಸಮಿತಿ ಹೊರಡಿಸಿದ ಆದೇಶ ಜೂನ್ 21ರವರೆಗೆ ಜಾರಿಯಲ್ಲಿರುತ್ತದೆ ಎಂಬುದನ್ನು ಗಮನಿಸಿದ ನ್ಯಾಯಾಲಯ, ದೇವಾಲಯ ಪ್ರವೇಶ ನಿಷೇಧ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದನ್ನು ಸಮಿತಿ ಖಚಿತಪಡಿಸಿಕೊಳ್ಳಬೇಕು ಎಂದಿತು.
ದೇವಾಲಯಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶಗಳನ್ನು ಉಲ್ಲಂಘಿಸಿರುವ ಸಂಬಂಧಪಟ್ಟ ವ್ಯಕ್ತಿಗಳು ನ್ಯಾಯಾಲಯದಲ್ಲಿ ಇರಲಿಲ್ಲ ಎಂಬುದನ್ನು ಪೀಠ ಗಮನಿಸಿತು. ಪ್ರಕರಣದ ಮುಂದಿನ ವಿಚಾರಣೆ ಜುಲೈ 22ಕ್ಕೆ ನಿಗದಿಯಾಗಿದೆ.