ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಇನ್ನೂ ದಿನಾಂಕ ನಿಗದಿಪಡಿಸಿಲ್ಲ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ಕಂಬಳ ನಡೆಯಲಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.
ಬೆಂಗಳೂರು ಮಹಾನಗರದಲ್ಲಿ ಕಂಬಳ ಆಯೋಜಿಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ (ಪೆಟಾ) ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಅರ್ಜಿದಾರರ ಪರ ವಕೀಲರು ಪಿಲಿಕುಳದಲ್ಲಿ ಪ್ರಾಣಿ ಸಂಗ್ರಹಾಲಯದ ಬಳಿಯಲ್ಲೇ ಕಂಬಳ ನಡೆಸುವುದಕ್ಕೆ ವ್ಯಕ್ತಪಡಿಸಿದ ಆಕ್ಷೇಪವನ್ನು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಅಲ್ಲಗಳೆದರು. ಪಿಲಿಕುಳದಲ್ಲಿ ಕಳೆದ 15-20 ವರ್ಷಗಳಿಂದ ಕಂಬಳ ನಡೆಸಿಕೊಂಡು ಬರಲಾಗುತ್ತಿದೆ ಎಂದು ಪೀಠಕ್ಕೆ ವಿವರಿಸಿದರು.
ಅರ್ಜಿದಾರರ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ದಕ್ಷಿಣ ಕನ್ನಡ ಜಿಲ್ಲೆ ಅಥವಾ ಪಿಲಿಕುಳದಲ್ಲಿ ಕಂಬಳ ಆಯೋಜಿಸಲು ನಮ್ಮ ಆಕ್ಷೇಪವಿಲ್ಲ. ಆದರೆ, ಪಿಲಿಕುಳದಲ್ಲಿ ಮೃಗಾಲಯದ ಪಕ್ಕದಲ್ಲೇ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿರುವುದಕ್ಕೆ ಆಕ್ಷೇಪವಿದೆ. ಸ್ವತಃ ಮೃಗಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದು ಕಂಬಳದ ಸಂದರ್ಭದಲ್ಲಿ ಉಂಟಾಗುವ ಕೂಗಾಟದಿಂದ ಬೇರೆ ಪ್ರಾಣಿಗಳಿಗೆ ತೊಂದರೆ ಆಗುತ್ತದೆ ಎಂದು ಹೇಳಿದ್ದಾರೆ” ಎಂದರು.
ಇದೇ ವೇಳೆ ಬೆಂಗಳೂರು ಕಂಬಳ ಸಮಿತಿ ಪರ ವಕೀಲ ಬಿ ವಿನೋದ್ ಕುಮಾರ್ ಅವರು ಅರ್ಜಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಪೀಠಕ್ಕೆ ಸಲ್ಲಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠವು ಈ ಬಗ್ಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಿ ಎಂದು ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.