

ಯಾದಗಿರಿ ಜಿಲ್ಲಾ ಕ್ರೀಡಾಂಗಣದ ದುರವಸ್ಥೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಲಬುರ್ಗಿ ಜಿಲ್ಲಾ ಸಚಿವರೂ ಆದ ಪ್ರಿಯಾಂಕ ಖರ್ಗೆ ಅವರನ್ನು ಅವಮಾನಿಸುವಂತಹ ಆಕ್ಷೇಪಾರ್ಹ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಮತ್ತು ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣದ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ಅದನ್ನು ಆಧರಿಸಿದ ನ್ಯಾಯಿಕ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠವು ಬುಧವಾರ ಮಧ್ಯಂತರ ತಡೆ ನೀಡಿದೆ.
ಕಲಬುರ್ಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಶಕುಂತಲಾ ನಟರಾಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ರಾಜೇಶ್ ರೈ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
“ಅವಮಾನಕ್ಕೆ ಒಳಗಾಗಿದ್ದರೆ ಎನ್ನಲಾದ ಸಚಿವರು ದೂರು ದಾಖಲಿಸಿಲ್ಲ. ಆದರೆ, ಆಡಳಿತ ಪಕ್ಷದ ಪದಾಧಿಕಾರಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಯಾದಗಿರಿಯಲ್ಲಿನ ಕ್ರೀಡಾಂಗಣದಲ್ಲಿ ಸೌಲಭ್ಯಕ್ಕೆ ಬೇಡಿಕೆ ಇಟ್ಟಿದ್ದ ಕ್ರೀಡಾಪಟುವಿನ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಮೆರಿಟ್ ಮೇಲೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೇ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಲಾಗಿದೆ. ಪ್ರತಿವಾದಿ ರಾಜ್ಯ ಪ್ರಾಸಿಕ್ಯೂಷನ್‌ಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.
ಶಕುಂತಲಾ ನಟರಾಜ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ಅವರು “ಅರ್ಜಿದಾರರ ವಿರುದ್ಧ ರಾಜಕೀಯ ದ್ವೇಷದಿಂದ ಈ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆಡಳಿತಾರೂಢ ಪಕ್ಷದ ಪದಾಧಿಕಾರಿ ಮುಖಾಂತರ ಈ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ಜಾಲತಾಣ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದ ಟ್ವೀಟ್ ಅನ್ನು ಶಕುಂತಲಾ ಅವರು ರೀಟ್ವೀಟ್ ಮಾಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ಅದಕ್ಕೆ ತಡೆ ನೀಡಬೇಕು” ಎಂದು ಮನವಿ ಮಾಡಿದರು. ಇದನ್ನು ನ್ಯಾಯಾಲಯ ಪುರಸ್ಕರಿಸಿತು.
ಕಾಂಗ್ರೆಸ್ ಕಾರ್ಯಕರ್ತ ಜಗದೇವ್ ಗುತ್ತೇದಾರ್ ಜನವರಿ 11ರಂದು ನೀಡಿದ ದೂರು ಆಧರಿಸಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಶಕುಂತಲಾ ಮತ್ತು ಬಿಜೆಪಿಯ ಫೇಸ್‌ಬುಕ್ ಮತ್ತು ಟ್ವಿಟರ್ ಪೇಜ್‌ಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್‌ಗಳಾದ 192 ಮತ್ತು 353(1) ಅಡಿ ಪ್ರಕರಣ ದಾಖಲಿಸಲಾಗಿತ್ತು.