ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ದಾಖಲಿಸಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟದ ನಿರ್ಗಮಿತ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.
ರೌಸ್ ಅವೆನ್ಯೂ ನ್ಯಾಯಾಲಯಗಳ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಹರ್ಜೀತ್ ಸಿಂಗ್ ಜಸ್ಪಾಲ್ ಜಾಮೀನು ನೀಡಿ ಆದೇಶಿಸಿದ್ದಾರೆ.
"ನಾವು ಕೆಲ ಷರತ್ತು ವಿಧಿಸಿದ್ದೇವೆ. ಆರೋಪಿ ನೇರವಾಗಿ ಅಥವಾ ಪರೋಕ್ಷವಾಗಿ ದೂರುದಾರರ ಅಥವಾ ಸಾಕ್ಷಿಗಳಮೇಲೆ ಪ್ರಭಾವ ಬೀರುವಂತಿಲ್ಲ. ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ತೊರೆಯುವಂತಿಲ್ಲ. ದಯವಿಟ್ಟು ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಬಗ್ಗೆ ಖಚಿತಪಡಿಸಿಕೊಳ್ಳಿ" ಎಂದು ನ್ಯಾಯಾಲಯ ಹೇಳಿದೆ.
ಬ್ರಿಜ್ ಭೂಷಣ್ ಮತ್ತು ಡಬ್ಲ್ಯುಎಫ್ಐನ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರಿಗೆ ನ್ಯಾಯಾಧೀಶ ಜಸ್ಪಾಲ್ ಅವರು ಜುಲೈ 7ರಂದು ಸಮನ್ಸ್ ಜಾರಿಗೊಳಿಸಿದ್ದರು.
ಬ್ರಿಜ್‌ಭೂಷಣ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಹೂಡಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೆಹಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ.