ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೂಡಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಜುಲೈ 20 ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ರೌಸ್ ಅವೆನ್ಯೂ ನ್ಯಾಯಾಲಯ ಸಂಕೀರ್ಣದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಬ್ರಿಜ್ ಭೂಷಣ್ ಮತ್ತು ವಿನೋದ್ ತೋಮರ್ ಅವರಿಗೆ ಮಧ್ಯಂತರ ಜಾಮೀನು ನೀಡಿದರು. ಬ್ರಿಜ್ ಭೂಷಣ್ ಅವರ ನಿಯತ ಜಾಮೀನಿಗೆ ಸಂಬಂಧಿಸಿದ ವಾದವನ್ನು ನ್ಯಾಯಾಲಯ ಗುರುವಾರ ಆಲಿಸಲಿದೆ.
ಬ್ರಿಜ್ ಭೂಷಣ್ ಅವರನ್ನು ಬಂಧಿಸದೆಯೂ ಅವರ ವಿರುದ್ಧ ಆರೋಪ ಪಟ್ಟಿ ದಾಖಲಿಸಲಾಗಿದೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎನ್ನುವ ಬ್ರಿಜ್ ಭೂಷಣ್ ಪರ ವಕೀಲರ ವಾದವನ್ನು ದೆಹಲಿ ಪೊಲೀಸರ ಪರ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ವಿರೋಧಿಸಿದರು. ಭೂಷಣ್ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಆಕ್ಷೇಪಿಸಿದರು.
ಬ್ರಿಜ್ ಭೂಷಣ್ ಮತ್ತು ಡಬ್ಲ್ಯುಎಫ್ಐನ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರಿಗೆ ನ್ಯಾಯಾಧೀಶ ಜಸ್ಪಾಲ್ ಅವರು ಜುಲೈ 7 ರಂದು ಸಮನ್ಸ್ ಜಾರಿಗೊಳಿಸಿದ್ದರು. ಅಂದು ಬ್ರಿಜ್‌ಭೂಷಣ್ ವಿರುದ್ಧ ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ನ್ಯಾಯಾಲಯ ಪರಿಗಣಿಸಿತ್ತು.