ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣ: ರಾಹುಲ್, ಸೋನಿಯಾ ಗಾಂಧಿಗೆ ದೆಹಲಿ ನ್ಯಾಯಾಲಯ ನೋಟಿಸ್

ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ, ಸ್ಯಾಮ್ ಪಿತ್ರೋಡಾ , ಇನ್ನಿತರರ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿತ್ತು.
Rahul Gandhi, Sonia Gandhi and National Herald
Rahul Gandhi, Sonia Gandhi and National Heraldfacebook
Published on

ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಅಲ್ಲದೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ ಡಿ) ಹೆಸರಿಸಿರುವ ಸ್ಯಾಮ್ ಪಿತ್ರೋಡಾ, ಸುಮನ್ ದುಬೆ, ಸುನಿಲ್ ಭಂಡಾರಿ, ಯಂಗ್ ಇಂಡಿಯಾ ಸಂಸ್ಥೆ  ಮತ್ತು ಡೋಟೆಕ್ಸ್ ಮರ್ಚಂಡೈಸ್ ಪ್ರೈವೇಟ್ ಲಿಮಿಟೆಡ್‌ಗಳಿಗೂ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್‌ ಗೋಗ್ನೆ ನೋಟಿಸ್‌ ನೀಡಿದ್ದಾರೆ.  ಪ್ರಕರಣದ ಮುಂದಿನ ವಿಚಾರಣೆ ಮೇ 8 ರಂದು ನಡೆಯಲಿದೆ.

Also Read
ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಇ ಡಿ ಆರೋಪಪಟ್ಟಿ

ಜಾರಿ ನಿರ್ದೇಶನಾಲಯ  ತನ್ನ ಆರೋಪಪಟ್ಟಿಯಲ್ಲಿ ಹೆಸರಿಸಿರುವ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಇತರರು ಪ್ರಕರಣದ ಸಂಜ್ಞೇಯ ಪರಿಗಣನೆಯ ವೇಳೆ ತಮ್ಮ ವಾದ ಆಲಿಸುವಂತೆ ಕೇಳುವ ಹಕ್ಕು ಪಡೆದಿದ್ದಾರೆ ಎಂದು ನ್ಯಾಯಾಧೀಶ ಗೋಗ್ನೆ ಹೇಳಿದರು.

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಒಡೆತನ ಹೊಂದಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ಗೆ (ಎಜೆಎಲ್‌) ಕಾಂಗ್ರೆಸ್‌ ಪಕ್ಷ ₹ 90 ಕೋಟಿಯಷ್ಟು ಸಾಲ ನೀಡಿತ್ತು. ಯಂಗ್‌ ಇಂಡಿಯಾ ಸಂಸ್ಥೆ ಕಾಂಗ್ರೆಸ್‌ಗೆ ಕೇವಲ ₹ 50 ಲಕ್ಷ ಹಣ ನೀಡಿ ಎಜೆಎಲ್‌ ಕಾಂಗ್ರೆಸ್‌ಗೆ ನೀಡಬೇಕಿದ್ದ ₹ 90 ಕೋಟಿಯಷ್ಟು ಹಣ ಹಿಂಪಡೆಯಬೇಕಾದ ಹಕ್ಕನ್ನು ತನ್ನದಾಗಿಸಿಕೊಂಡಿತ್ತು ಎಂಬುದು ಹಗರಣದ ಸಾರ. ಈಕ್ವಿಟಿ ವಹಿವಾಟಿನಲ್ಲಿ ₹ 2,000 ಕೋಟಿಗೂ ಅಧಿಕ ಆಸ್ತಿ ಅವ್ಯವಹಾರ ನಡೆದಿದೆ ಎಂಬ ಆರೋಪವೂ ಕೇಳಿಬಂದಿತ್ತು.

Also Read
ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್, ಸೋನಿಯಾಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಕಾರ

ಸೋನಿಯಾ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಗಾಂಧಿ ಕುಟುಂಬದ ನಿಯಂತ್ರಣದಲ್ಲಿರುವ - ಯಂಗ್ ಇಂಡಿಯನ್ ಲಿಮಿಟೆಡ್‌ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಖಾಸಗಿ ದೂರು ದಾಖಲಿಸಿ ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ದ್ರೋಹ ಹಾಗೂ ಆಸ್ತಿ ದುರುಪಯೋಗದ ಆರೋಪ ಮಾಡಿದ್ದರು.

ಕಳೆದ ಏಪ್ರಿಲ್ 15 ರಂದು ಗಾಂಧಿ ಕುಟುಂಬ, ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹಾಗೂ ಇತರರ ವಿರುದ್ಧ ಇ ಡಿ ಪ್ರಾಸಿಕ್ಯೂಷನ್ ದೂರು ದಾಖಲಿಸಿತ್ತು.

Kannada Bar & Bench
kannada.barandbench.com